ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಾಜ್ಯೋತ್ಸವದಂದು ಅದ್ಧೂರಿ ಮೆರವಣಿಗೆಗೆ ಅವಕಾಶಕ್ಕೆ ಪಟ್ಟು

Last Updated 18 ಅಕ್ಟೋಬರ್ 2021, 13:33 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ ಕರ್ನಾಟಕ ರಾಜ್ಯೋತ್ಸವದಂದು ಅದ್ಧೂರಿ ಮೆರವಣಿಗೆಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಕೋವಿಡ್ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ಎಲ್ಲ ಚಟುವಟಿಕೆಗಳಿಗೂ ಅವಕಾಶ ಕೊಡಲಾಗಿದೆ. ಚುನಾವಣೆಗಳನ್ನೂ ನಡೆಸಲಾಗುತ್ತಿದೆ. ಆದರೆ, ರಾಜ್ಯೋತ್ಸವ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಿರುವುದು ಸಮಂಜಸವಲ್ಲ. ಅದ್ಧೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವಕ್ಕೆ ನಮ್ಮ ಸಮ್ಮತಿ ಇಲ್ಲ. ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು, ಗಡಿನಾಡಿನಲ್ಲಿ ಕನ್ನಡಗಿರ ಸ್ವಾಭಿಮಾನದ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲು ಅನುವು ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರದ ನಿರ್ಧಾರ ತಿಳಿಸಲು ಅ.22ರವರೆಗೆ ಗಡುವು ಕೊಡಲಾಗಿದೆ. ಇಲ್ಲವಾದಲ್ಲಿ, ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಬಳಿಕ ಪತ್ರಕರ್ತರಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಗಡಿ ನಾಡಾದ ಬೆಳಗಾವಿಯಲ್ಲಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಇಳಿಕೆಯಾಗಿವೆ. ಆದರೆ, ಇನ್ನೂ ಸಂಪೂರ್ಣವಾಗಿ ಹೋಗಿಲ್ಲ. ಆದ್ದರಿಂದ ಸರ್ಕಾರವು ನೀಡಿರುವ ಮಾರ್ಗಸೂಚಿಗಳ ಪ್ರಕಾರ ಉತ್ಸವ ನಡೆಸಲಾಗುವುದು’ ಎಂದು ತಿಳಿಸಿದರು.

‘ಅದ್ಧೂರಿ ಮೆರವಣಿಗೆಗೆ ಅವಕಾಶ ಕೊಡುವಂತೆ ಕನ್ನಡಪರ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದ್ದಾರೆ. ಈ ವಿಷಯ ಸರ್ಕಾರದ ಗಮನಕ್ಕೆ ತರಲಾಗುವುದು. ಅಲ್ಲಿಂದ ಬರುವ ನಿರ್ದೇಶನದಂತೆ ನಡೆಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಮುಖಂಡರಾದ ರಮೇಶ ಸೊಂಟಕ್ಕಿ, ವಾಜೀದ ಹಿರೇಕೋಡಿ, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT