ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ ನಿಯಂತ್ರಣ: ಜಾಗೃತಿ ಹೆಚ್ಚಲಿ

Last Updated 16 ಮೇ 2022, 13:15 IST
ಅಕ್ಷರ ಗಾತ್ರ

ಬೆಳಗಾವಿ: ‘ಡೆಂಗಿ, ಚಿಕೂನ್‌ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಬಾಧಿಸದಂತೆ ಜನಸಾಮಾನ್ಯರು ಮುಂಜಾಗ್ರತೆ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜನರಿಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ರಾಷ್ಟ್ರೀಯ ಡೆಂಗಿ ದಿನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡೆಂಗಿ ಜಾಗೃತಿ ಜಾಥಾಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳಿಂದ ದೂರವಿರಬಹುದು’ ಎಂದರು.

ಡಿಎಚ್‌ಒ ಡಾ.ಶಶಿಕಾಂತ ಮುನ್ಯಾಳ ಮಾತನಾಡಿ, ‘ಮನೆ ಸುತ್ತಮುತ್ತಲಿನ ಪ್ರದೇಶದ ಘನತ್ಯಾಜ್ಯದಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಬ್ಯಾರಲ್, ಸಿಮೆಂಟ್ ಟ್ಯಾಂಕ್ ಇನ್ನಿತರ ಕಡೆಗಳಲ್ಲಿನ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುವುದನ್ನು ತಡೆಗಟ್ಟುವುದರಿಂದ ಡೆಂಗಿ ಹರಡದಂತೆ ನಿಯಂತ್ರಿಸಬಹುದು’ ಎಂದರು.

‘ಡೆಂಗಿ ನಿಯಂತ್ರಣದಲ್ಲಿ ಸಮುದಾಯದ ಭಾಗವಹಿಸುವಿಕೆ ಪ್ರಮುಖವಾಗಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಹಕಾರವೂ ಅಗತ್ಯವಾಗಿದೆ. ಯಾವುದೇ ಜ್ವರ ಕಂಡುಬಂದರೆ ನಿರ್ಲಕ್ಷ್ಯ ವಹಿಸದೆ ತಕ್ಷಣವೆ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಎಸ್. ಪಲ್ಲೇದ, ‘ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಶುರುವಾದ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಬೋಗಾರವೇಸ್‌ನಲ್ಲಿ ಕೊನೆಗೊಂಡಿತು.

ಜಿ.ಪಂ. ಸಿಇಒ ಎಚ್‌.ವಿ. ದರ್ಶನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT