ಭಾನುವಾರ, ಸೆಪ್ಟೆಂಬರ್ 20, 2020
23 °C
ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್‌ ಸಲಹೆ

ಮಾದಕ ವಸ್ತುಗಳ ಸಹವಾಸ ಸಲ್ಲದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಮಾದಕ ವಸ್ತುಗಳು ಹಾಗೂ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು’ ಎಂದು ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಬಕಾರಿ ಇಲಾಖೆ, ಪೊಲೀಸ್‌ ಇಲಾಖೆ, ಬಿಮ್ಸ್‌, ಸಹರಾ ಮತ್ತು ಸ್ತ್ರೀಶಕ್ತಿ ವ್ಯಸನ ಮುಕ್ತ ಕೇಂದ್ರ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ’ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಯುವಜನರು ಜೀವಕ್ಕೆ ಮಾರಕವಾಗುವ ವ್ಯಸನಗಳನ್ನು ಬೆಳೆಸಿಕೊಳ್ಳಬಾರದು. ಮಾದಕ ವಸ್ತುಗಳನ್ನು ಮಾರುವುದು ಅಥವಾ ಬಳಸುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣದ ಹೊಣೆ ಎಲ್ಲರ ಮೇಲೂ ಇದೆ ಎನ್ನುವುದನ್ನು ಮರೆಯಬಾರದು’ ಎಂದರು.

‘ಸಂಚಾರ ನಿಯಮಗಳನ್ನು ಪಾಲಿಸಬೇಕು. ಇದರಿಂದ, ಅಪಘಾತಗಳ ಪ್ರಮಾಣವನ್ನು ತಪ್ಪಿಸಬಹುದಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ್‌ ಅರಸ್‌ ಮಾತನಾಡಿ, ‘ಮಾದಕ ವಸ್ತುಗಳ ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ. ಉತ್ತಮ ಸಮಾಜಕ್ಕಾಗಿ ಉತ್ತಮ ಆರೋಗ್ಯ ಅತ್ಯವಶ್ಯ ಎನ್ನುವುದನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.

ಅಬಕಾರಿ ಉಪ ಆಯುಕ್ತ ಕೆ.ಅರುಣ್‌ಕುಮಾರ್‌ ಮಾತನಾಡಿ, ‘ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಗೆ ಮಾತ್ರವಲ್ಲ ಕುಟುಂಬ ಹಾಗೂ ಇಡೀ ಸಮಾಜಕ್ಕೆ ತೊಂದರೆಯಾಗುತ್ತದೆ. ಮಕ್ಕಳು ದುಶ್ಚಟಗಳಿಗೆ ಒಳಗಾಗದೇ ಇರುವಂತೆ ಪಾಲಕರು ಗಮನಹರಿಸಬೇಕು’ ಎಂದು ಸಲಹೆ ನೀಡಿದರು.

ಮನೋವೈದ್ಯೆ ಡಾ.ಸರಸ್ವತಿ ತೆನಗಿ ಉಪನ್ಯಾಸ ನೀಡಿದರು. ಡಿಎಚ್‌ಒ ಡಾ.ಅಪ್ಪಾಸಾಹೇಬ ನರಟ್ಟಿ ಸ್ವಾಗತಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಚಾಂದಿನಿ ದೇವಡಿ ‍ಪ್ರಾಸ್ತಾವಿಕ ಮಾತನಾಡಿದರು. ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು. ತಾಲ್ಲೂಕು ವೈದ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ವಂದಿಸಿದರು.

ಇದಕ್ಕೂ ಮುನ್ನ, ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೈಸಿಕಲ್ ಜಾಥಾ ನಡೆಯಿತು. ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಬಿ. ಬೂದೆಪ್ಪ ಬಲೂನು ಹಾರಿಸುವ ಮೂಲಕ ಚಾಲನೆ ನೀಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು