ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕೌಟುಂಬಿಕ ಹಿಂಸೆ; ಹೆಚ್ಚಿನ ಪ್ರಕರಣ ಬಾಕಿ

ತ್ವರಿತ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ
Last Updated 2 ಆಗಸ್ಟ್ 2021, 14:07 IST
ಅಕ್ಷರ ಗಾತ್ರ

ಬೆಳಗಾವಿ: ‘ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಲ್ಲಿ 2007ರಿಂದ 2021ರವರೆಗೆ ದಾಖಲಾಗಿರುವ ಪ್ರಕರಣಗಳ ಪೈಕಿ ಇತ್ಯರ್ಥಕ್ಕಿಂತ ಬಾಕಿ ಪ್ರಕರಣಗಳ ಸಂಖ್ಯೆ ಜಾಸ್ತಿ ಇದ್ದು, ಲೋಕ ಅದಾಲತ್ ಮೂಲಕ ಬಗೆಹರಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೌಟುಂಬಿಕ ಹಿಂಸೆ ಪ್ರಕರಣಗಳನ್ನು ಲೋಕ‌ಅದಾಲತ್ ಮೂಲಕ ಇತ್ಯರ್ಥಪಡಿಸಲು ಕಕ್ಷಿದಾರರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಾರಿಗೆ ಸೇರಿದಂತೆ ಎಲ್ಲ ವ್ಯವಸ್ಥೆ ಕಲ್ಪಿಸಲು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

‘ಒಟ್ಟು 251 ಪ್ರಕರಣಗಳ ಪೈಕಿ 142 ಬಾಕಿ ಇವೆ. ಇದುವರೆಗೆ 9 ಪ್ರಕರಣಳನ್ನು ಮಾತ್ರ ಇತ್ಯರ್ಥಪಡಿಸಲಾಗಿದೆ. ಇತ್ಯರ್ಥಕ್ಕೆ ಮುತುವರ್ಜಿ ವಹಿಸಬೇಕು. ವಿಚಾರಣೆಗೆ ಕಾನೂನು ಪ್ರಾಧಿಕಾರದಿಂದ ನೇಮಿಸಲಾದ ವಕೀಲರು ಹಾಜರಾಗಲು ಕ್ರಮ ವಹಿಸುವಂತೆ ಕೋರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ತಿಳಿಸಿದರು.

‘ಸಖಿ ಒನ್‌ ಸ್ಟಾಪ್ ಸೆಂಟರ್ ಕಟ್ಟಡ ನಿರ್ಮಾಣ ಕಾರ್ಯ ಆ.30ರೊಳಗೆ ಪೂರ್ಣಗೊಳಿಸಬೇಕು. ಅಗತ್ಯ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ’ ಎಂದರು.

ಸಭೆ ನಡೆಸಲು ಸೂಚನೆ:‘ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ಗ್ರಾಮ ಮಟ್ಟದಲ್ಲಿ ಗ್ರಾಮ‌ ಪಂಚಾಯ್ತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕಾವಲುಸಮಿತಿಯ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಆಸ್ಪತ್ರೆಗೆ ದಾಖಲಿಸಬೇಕು’ ಎಂದು ಸೂಚಿಸಿದರು.

‘ಮಾತೃವಂದನಾ ಯೋಜನೆಯಡಿ 1.28 ಲಕ್ಷ ಫಲಾನುಭವಿಗಳಿಗೆ ₹ 43 ಕೋಟಿ ಅವರವರ ಖಾತೆಗಳಿಗೆ ಜಮೆಯಾಗಿದೆ. ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನ ಒದಗಿಸಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ, ‘ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಗ್ರಾಮ‌ ಪಂಚಾಯ್ತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಗ್ರಾಮ ಮಟ್ಟದಲ್ಲಿ ಕಾವಲುಸಮಿತಿ ರಚಿಸಲಾಗಿದೆ. ನೊಂದ ಮಹಿಳೆಯರಿಗೆ ತಾಲ್ಲೂಕು ಮಟ್ಟದಲ್ಲಿರುವ ಸಾಂತ್ವನ ಕೇಂದ್ರದಲ್ಲಿ ತಾತ್ಕಾಲಿಕ ಆಶ್ರಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರ ಅವರನ್ನು ಸ್ವಾಧಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಸಖಿ ಒನ್ ಸ್ಟಾಪ್ ಕೇಂದ್ರ ಶೀಘ್ರ ಪೂರ್ಣಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.

‘ಒನ್ ಸ್ಟಾಪ್ ಸೆಂಟರ್‌ನಲ್ಲಿ ವೈದ್ಯಕೀಯ ವೃತ್ತಿ ಅನುಭವ ಹೊಂದಿರುವ ಸಿಬ್ಬಂದಿ ನಿಯೋಜಿಸಿದರೆ ಪರಿಣಾಮಕಾರಿ ಕೆಲಸ ಮಾಡಲು ಅನುಕೂಲವಾಗುತ್ತದೆ’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಅಭಿಪ್ರಾಯಪಟ್ಟರು.

ಅನಾಥರಿಗೆ ಸರ್ಕಾರರಿಂದ ನೆರವು
‘ಕೋವಿಡ್ ಸೋಂಕಿನಿಂದ ತಂದೆ-ತಾಯಿ ಕಳೆದುಕೊಂಡಿರುವ ಮಕ್ಕಳಿಗೆ ರಾಜ್ಯ ಸರ್ಕಾರದ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು ₹ 3,500 ನೆರವು ಹಾಗೂ ಪಿಎಂ ಕೇರ್ಸ್ ನಿಧಿಯಿಂದ ₹ 10 ಲಕ್ಷ ಪರಿಹಾರ ನೀಡಲು (23 ವರ್ಷ ತುಂಬಿದಾಗ) ನಿರ್ಧರಿಸಲಾದೆ. ಆದ್ದರಿಂದ ಈ ಬಗ್ಗೆ ಪ್ರತಿ ತಾಲ್ಲೂಕು ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಒದಗಿಸುವ ಮೂಲಕ ಅನಾಥ ಮಕ್ಕಳಿಗೆ ನೆರವು ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಸಂಭವನೀಯ ಕೋವಿಡ್ 3ನೇ ಅಲೆ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ಮೊದಲ ಸ್ಥಾನ
ಮಾತೃ ವಂದನಾ ಯೋಜನೆ ಅನುಷ್ಠಾನದಲ್ಲಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಶೇ.119ರಷ್ಟು ಸಾಧನೆ ಮಾಡಲಾಗಿದೆ.
–ಬಸವರಾಜ ವರವಟ್ಟಿ, ಉಪ ನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT