ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ ಹೊರುವುದು ಕಂಡುಬಂದರೆ ಕಠಿಣ ಕ್ರಮ: ಡಾ.ಪಿ.ಪಿ. ವಾವಾ

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ವಾವಾ ಎಚ್ಚರಿಕೆ
Last Updated 22 ಜುಲೈ 2021, 14:11 IST
ಅಕ್ಷರ ಗಾತ್ರ

ಬೆಳಗಾವಿ: ‘ಮಾನವನ ಮಲ-ಮೂತ್ರವನ್ನು ಕೈಯಿಂದ ಸ್ವಚ್ಛಗೊಳಿಸಿ ಹೊತ್ತು ಸಾಗಿಸುವುದು (ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ) ರಾಜ್ಯದ ಕೆಲವೆಡೆ ಇನ್ನೂ ನಡೆಯುತ್ತಿದೆ ಎಂಬ ವರದಿಗಳಿವೆ’ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ. ವಾವಾ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಪದ್ಧತಿ ಕಂಡುಬಂದರೆ ಸಂಬಂಧಿಸಿದ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದ್ದರಿಂದ ತೀವ್ರ ನಿಗಾ ವಹಿಸಬೇಕು’ ಎಂದು ಸೂಚಿಸಿದರು.

‘ಈ ಪದ್ಧತಿಯನ್ನು ದೌರ್ಜನ್ಯ ಎಂದು ಪರಿಗಣಿಸಿ 2013ರಿಂದ ನಿಷೇಧಿಸಲಾಗಿದೆ. ಆ ಪದ್ಧತಿಯಲ್ಲಿ ಸಿಲುಕಿದ್ದವರ ಸಮೀಕ್ಷೆ ನಡೆಸಿ ಪುನರ್ವಸತಿ ಕಲ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸಿಎಸ್ಆರ್ ಅನುದಾನದಲ್ಲಿ ರೋಬೋಟಿಕ್ ಯಂತ್ರಗಳನ್ನು ಖರೀದಿಸುವ ಬಗ್ಗೆ ಪರಿಶೀಲಿಸಬೇಕು’ ಎಂದು ಸಲಹೆ ನೀಡಿದರು.

‘ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಅವು ದೊರೆಯುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ತಾಕೀತು ಮಾಡಿದರು.

ಅವಕಾಶವಿಲ್ಲ:

‘ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವವರು ಕರ್ತವ್ಯದಲ್ಲಿರುವಾಗ ಮರಣ ಹೊಂದಿದರೆ ಅನುಕಂಪದ ಆಧಾರದ ಮೇಲೆ ಯಾವ ರೀತಿ ಉದ್ಯೋಗ ನೀಡಲಾಗುತ್ತಿದೆ’ ಎಂದು ಸಫಾಯಿ ಕರ್ಮಚಾರಿ ಸಂಘದ ಪದಾಧಿಕಾರಿಗಳು ಪ್ರಶ್ನಿಸಿದರು.

ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ‘ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ನೌಕರ ಮರಣಹೊಂದಿದರೆ ಅವರಿಗೆ ಅನುಕಂಪದ ಆಧಾರದ ಮೇಲೆ ಕಾಯಂ ನೌಕರಿ ನೀಡಲು ಸದ್ಯದ ನಿಯಮಾವಳಿಗಳಲ್ಲಿ ಅವಕಾಶವಿಲ್ಲ. ಆದರೆ, ಆ ಕುಟುಂಬದ ಸದಸ್ಯರಿಗೆ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗ ಒದಗಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

‘ಕೆಲಸದ ಬಳಿಕ ಹಿಂದಿರುಗುವ ಪೌರಕಾರ್ಮಿಕರು ಕೈ-ಕಾಲು ಶುಚಿಗೊಳಿಸಿಕೊಳ್ಳಲು ಅನುಕೂಲ ಆಗುವಂತೆ ಅವರ ವಸತಿಗೃಹಗಳ ಆವರಣದಲ್ಲಿ ನೀರಿನ ಟ್ಯಾಂಕ್‌ಗಳನ್ನು ಅಳವಡಿಸಬೇಕು’ ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಸ್ಪಂದಿಸಿದ ಜಿಲ್ಲಾಧಿಕಾರಿ, ‘ಟ್ಯಾಂಕ್ ನಿರ್ಮಿಸಬೇಕು ಹಾಗೂ ಶೌಚಾಲಯ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ 42 ಜನರಿಗೆ ತಲಾ ₹40ಸಾವಿರ ನೆರವು ನೀಡಲಾಗಿದೆ. ಎಲ್ಲರಿಗೂ ಗುರುತಿನ ಚೀಟಿ ಕೊಡಲಾಗಿದೆ. ನರೇಗಾ ಉದ್ಯೋಗ ಚೀಟಿಗಳನ್ನು ಒದಗಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಯಡಿ 23 ಮಂದಿಗೆ ಸೌಲಭ್ಯ ಒದಗಿಸಲಾಗಿದೆ’ ಎಂದು ಜಿ.ಪಂ. ಸಿಇಒ ಎಚ್‌.ವಿ. ದರ್ಶನ್ ತಿಳಿಸಿದರು.

ಮರು ಸಮೀಕ್ಷೆ:

‘ನಗರ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳು ಇಲ್ಲ ಎಂಬ ವರದಿ ಇತ್ತು. ಆದರೆ, ಸಂಘ-ಸಂಸ್ಥೆಗಳ ಒತ್ತಾಯದ ಮೇರೆಗೆ ಮರು ಸಮೀಕ್ಷೆ ನಡೆಸಲಾಗಿದೆ. ಸಾಕಷ್ಟು ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಪರಿಶೀಲಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

‘ಸೌಲಭ್ಯಗಳನ್ನು ಒದಗಿಸಲು ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು’ ಎಂದರು.

‘ಪೌರಕಾರ್ಮಿಕರ ಸಾಲ ಸೌಲಭ್ಯದ ಅರ್ಜಿಗಳು ತಿರಸ್ಕೃತಗೊಳ್ಳದಂತೆ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಹುಲ್ ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಇದ್ದರು.

ಆದ್ಯತೆ ಮೇರೆಗೆ

ಸಫಾಯಿ ಕರ್ಮಚಾರಿಗಳ ಜೊತೆಗೆ ಅವರ ಕುಟುಂಬದ ಸದಸ್ಯರಿಗೂ ಆದ್ಯತೆ ಮೇಲೆ ಕೋವಿಡ್ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು.

–ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT