ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬರ ಪರಿಹಾರ; ₹ 11 ಕೋಟಿ ಅನುದಾನ ಬಿಡುಗಡೆ’

Last Updated 16 ಜನವರಿ 2019, 14:25 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲೆಗೆ 11 ಕೋಟಿ ಬಂದಿದ್ದು, ಇದುವರೆಗೆ ₹ 6 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸರ್ಕಾರ ನೀಡಿರುವ ಅನುದಾನದಲ್ಲಿ ಇನ್ನೂ ₹ 5 ಕೋಟಿ ನಮ್ಮತ್ತರ ಉಳಿದಿದೆ. ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಬಳಸಲಾಗುತ್ತಿದೆ’ ಎಂದು ಹೇಳಿದರು.

‘ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಸವದತ್ತಿ, ರಾಮದುರ್ಗ ಹಾಗೂ ಅಥಣಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿತ್ತು. ಹಿಂಗಾರು ಅವಧಿಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನೂ ಘೋಷಿಸಲಾಗಿದೆ. ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಆದ್ಯತೆ ಮೇರೆಗೆ ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

‘ಪ್ರಸ್ತುತ ಅಥಣಿ ತಾಲ್ಲೂಕಿನಲ್ಲಿ ಮಾತ್ರ ನೀರು ಹಾಗೂ ಮೇವಿನ ಕೊರತೆ ಕಂಡುಬಂದಿದೆ. ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು. ಮೇವು ಬ್ಯಾಂಕ್‌ ತೆರೆಯಲು ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

ಸಾಲ ಮನ್ನಾ– ದಾಖಲೆ ಪರಿಶೀಲನೆ:

‘ಸಾಲ ಮನ್ನಾ ಮಾಡುವ ಕುರಿತು ಸಹಕಾರಿ ಬ್ಯಾಂಕ್‌ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರ ನೋಂದಣಿ ಮುಂದುವರಿದಿದೆ. ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ರೈತರು ಸಲ್ಲಿಸಿರುವ ದಾಖಲೆಗಳ ಪರಿಶೀಲನೆ ಮಾಡುತ್ತಿವೆ’ ಎಂದು ಅವರು ತಿಳಿಸಿದರು.

‘ಸರ್ಕಾರ ಸೂಚಿಸಿರುವಂತೆ ರೈತರ ಆಧಾರ್‌ ಕಾರ್ಡ್‌, ಪಡಿತರ ಚೀಟಿ ಹಾಗೂ ಆರ್‌.ಟಿ.ಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಸಣ್ಣ ಪುಟ್ಟ ಅಕ್ಷರ ದೋಷಗಳಿದ್ದಲ್ಲಿ ತಹಶೀಲ್ದಾರರೇ ಬಗೆಹರಿಸುತ್ತಿದ್ದಾರೆ’ ಎಂದು ಹೇಳಿದರು.

‘ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ಬಹುತೇಕ ಎಲ್ಲ ರೈತರ ನೋಂದಣಿಯಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ಶೇ 85ರಷ್ಟು ರೈತರ ನೋಂದಣಿಯಾಗಿದೆ. ಕೆಲವರು ಎರಡೂ ಕಡೆ ಸಾಲ ಪಡೆದಿದ್ದು, ಒಂದು ಕಡೆ ಮಾತ್ರ ಮನ್ನಾ ಆಗಲಿದೆ. ಇಂತಹವರ ನೋಂದಣಿ ಮಾತ್ರ ಬಾಕಿ ಉಳಿದಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT