ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಹೋರಾಟಗಾರ ಮುಚಳಂಬಿ ಇನ್ನಿಲ್ಲ

Last Updated 6 ಅಕ್ಟೋಬರ್ 2021, 15:24 IST
ಅಕ್ಷರ ಗಾತ್ರ

ಬೆಳಗಾವಿ: ರೈತ ಹೋರಾಟಗಾರ, ‘ಹಸಿರುಕ್ರಾಂತಿ’ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ ಗುರಬಸಪ್ಪ ಮುಚಳಂಬಿ (72) ಅನಾರೋಗ್ಯದಿಂದ ಬುಧವಾರ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಅಂತ್ಯಕ್ರಿಯೆಯು ಅ.7ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಸದಾಶಿವನಗರದ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ಅವರು ಗೋಕಾಕ ತಾಲ್ಲೂಕು ಸಾವಳಗಿ ಶಿವಲಿಂಗೇಶ್ವರ ಮಠಕ್ಕೆ ಪಾದಯಾತ್ರೆ ಮಾಡುವುದಾಗಿ ಹರಕೆ ಹೊತ್ತಿದ್ದರು. ಅದರಂತೆ ಅ.5ರಂದು ಬೆಳಗಾವಿಯಿಂದ ಸಾವಳಗಿಗೆ ಪಾದಯಾತ್ರೆ ಆರಂಭಿಸಿದ್ದರು. ಮಾರ್ಗ ಮಧ್ಯೆ ಗೋಕಾಕ ಸಮೀಪದ ಮೇಲ್ಮಟ್ಟಿ ಬಳಿ ಅಸ್ವಸ್ಥರಾಗಿದ್ದ ಅವರನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು’ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ರೈತ ಸಂಘದ ಪ್ರೊ.ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಬೆಳೆದು ದಿವಂಗತ ಬಾಬಾಗೌಡ ಪಾಟೀಲ ಮತ್ತು ಕೆ.ಎಸ್. ಪುಟ್ಟಣ್ಣಯ್ಯ ಅವರೊಂದಿಗೆ ಒಡನಾಟ ಹೊಂದಿದ್ದರು. ವಿವಿಧ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಮುಖಂಡರೊಂದಿಗೆ ಸೇರಿ ಅನೇಕ ಹೋರಾಟ ಸಂಘಟಿಸಿದ್ದರು. 35 ವರ್ಷಗಳ ಹಿಂದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ‘ಹಸಿರುಕ್ರಾಂತಿ’ ಪತ್ರಿಕೆ ಆರಂಭಿಸಿದ್ದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ರೈತರ ಆತ್ಮಹತ್ಯೆ ತಡೆಗೆ ವಿವಿಧ ಮಠಾಧೀಶರ ಜೊತೆ 150 ಗ್ರಾಮಗಳಿಗೆ ಪಾದಯಾತ್ರೆ ನಡೆಸಿದ್ದರು. ಜೈಲ್ ಭರೋ ಚಳವಳಿಯಲ್ಲಿ ಭಾಗವಹಿಸಿ 2 ಬಾರಿ ಸೆರೆಮನೆ ವಾಸ ಅನುಭವಿಸಿದ್ದರು. ಪತ್ರಿಕಾ ರಂಗವಷ್ಟೆ ಅಲ್ಲದೆ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿದ್ದರು. ಎರಡು ದಿನಗಳ ಹಿಂದೆಯಷ್ಟೇ ತಮ್ಮ 72ನೇ ಜನ್ಮದಿನ ಆಚರಿಸಿಕೊಂಡಿದ್ದರು.

ಕೇಂದ್ರ ಸರ್ಕಾರವು ರೂಪಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ, ನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರೈತ ಮಹಾಪಂಚಾಯತ್‌ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೃಷಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಅನೇಕ ಲೇಖನಗಳನ್ನು ಅವರು ಬರೆದಿದ್ದರು. ರೈತ ಹೋರಾಟದ ಮುಂಚೂಣಿ ನಾಯಕರೆನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT