ಬುಧವಾರ, ಫೆಬ್ರವರಿ 19, 2020
24 °C
ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡುವಂತೆ ಪ್ರತಿಭಟನೆ

ರೈತರ ಸಾಲ ಮನ್ನಾಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಪ್ರತಿ ರೈತರ ₹1 ಲಕ್ಷದವರೆಗಿನ ಸಾಲ ಮನ್ನಾ ಮಾಡಬೇಕು’ ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

‘2020–21ನೇ ಸಾಲಿನ ಬಜೆಟ್‌ನಲ್ಲಿ ರೈತರು, ನೆರೆ ಸಂತ್ರಸ್ತರು, ಮಹದಾಯಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ಕೊಡಬೇಕು. ನಮ್ಮ ಸರ್ಕಾರ ಬಂದಲ್ಲಿ ರೈತರ ₹1 ಲಕ್ಷದವರೆಗಿನ ಸಾಲ ಮನ್ನಾ ಮಾಡಲಾಗುವುದು ಎಂದು ಬಿ.ಎಸ್. ಯಡಿಯೂರಪ್ಪ ಅವರು ನೀಡಿದ್ದ ಭರವಸೆಯನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಅಶೋಕ ಯಮಕನಮರಡಿ ಮಾತನಾಡಿ, ‘ತಾರತಮ್ಯವಿಲ್ಲದೇ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು. ಸಾಲ ಮರುಪಾವತಿಸುವಂತೆ ಬ್ಯಾಂಕ್‌ಗಳು ಸೇರಿದಂತೆ ಹಣಕಾಸು ಸಂಸ್ಥೆಗಳು ನೋಟಿಸ್‌ ಜಾರಿಗೊಳಿಸುವುದನ್ನು ಮತ್ತು ಕಿರುಕುಳ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು. 2019–20ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಕೇಂದ್ರ ಸರ್ಕಾರ ಘೋಷಿಸಿದಷ್ಟು ಹಣವನ್ನು ಸಕ್ಕರೆ ಕಾರ್ಖಾನೆಗಳವರು ನೀಡಿಲ್ಲ. ಸರ್ಕಾರ ಕೂಡಲೇ ಇದನ್ನು ಗಮನಿಸಬೇಕು. ಕಡಿಮೆ ಹಣ ಪಾವತಿಸಿದ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಹಿಂದಿನ ಸರ್ಕಾರ ಘೋಷಿಸಿದ ಸಾಲ ಮನ್ನಾ ಯೋಜನೆಗೆ ಅಗತ್ಯವಾದ ಹಣವನ್ನು ಸರ್ಕಾರ ಒದಗಿಸಬೇಕು. ಬರ, ನೆರೆಯಿಂದ ನೊಂದಿರುವ ರೈತರಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ನೆರೆ ಹಾನಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ. ಇದರಿಂದಾಗಿ ಬಹಳಷ್ಟು ಮಂದಿಗೆ ಪರಿಹಾರವೇ ದೊರೆತಿಲ್ಲ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಮರು ಸಮೀಕ್ಷೆ ನಡೆಸಿ, ಹೊಸ ಬದುಕು ಕಟ್ಟಿಕೊಳ್ಳಲು ಸಂತ್ರಸ್ತರಿಗೆ ನೆರವಾಗಬೇಕು’ ಎಂದು ಕೋರಿದರು.

‘ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆಯ ಕಾಮಗಾರಿ ಆರಂಭಿಸಬೇಕು’ ಎಂದು ಆಗ್ರಹಿಸಿದರು.

ಯಲ್ಲಪ್ಪ, ಗಂಗಪ್ಪ, ಮಹಾದೇವ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು