ಬೆಳಗಾವಿ: ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ಬೆಳಗಾವಿ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಎತ್ತಿನಗಾಡಿಗಳೊಂದಿಗೆ ಬಂದು ಗುರುವಾರ ಪ್ರತಿಭಟನೆ ನಡೆಸಿದರು. ಇದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ಕ್ರಮಗಳ ವಿರುದ್ಧ ಘೋಷಣೆ ಕೂಗಿದರು.
‘ಸರ್ಕಾರಗಳು ರೈತ ವಿರೋಧಿ ನೀತಿಗಳನ್ನು ಕೈಬಿಡಬೇಕು. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಬೇಕು. ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಉಳಿಸಿಕೊಂಡಿರುವ ಬಾಕಿಯನ್ನೂ ಕೂಡಲೇ ಕೊಡಿಸಬೇಕು’ ಎಂದು ಆಗ್ರಹಿಸಿದರು.
‘ತಾಲ್ಲೂಕಿನ ಹಲಗಾ–ಮಚ್ಚೆ ಬೈಪಾಸ್ ಕಾಮಗಾರಿಯನ್ನು ಕೈಬಿಡಬೇಕು. ಫಲವತ್ತಾದ ಕೃಷಿ ಜಮೀನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2017–18ನೇ ಸಾಲಿನಲ್ಲಿ ನೀಡಿದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಚಿಕ್ಕೋಡಿ ತಾಲ್ಲೂಕಿನ ಜೋಡಕುರಳಿ ಗ್ರಾಮ ವ್ಯಾಪ್ತಿಯ ಬರುವ ಜಮೀನುಗಳಲ್ಲಿ ಕ್ರಷರ್ ಯಂತ್ರ ಅಳವಡಿಸಿ ಗಣಿಗಾರಿಕೆಗೆ ಅವಕಾಶ ನೀಡಬಾರದು. ನೆರೆ, ಕೋವಿಡ್–19 ಮೊದಲಾದ ಸಂಕಷ್ಟಗಳಿಗೆ ಸಿಲುಕಿ ತೊಂದರೆಗೆ ಒಳಗಾಗಿರುವ ರೈತರಿಗೆ ಸಾಲದ ಕಂತು ತುಂಬುವಂತೆ ಬ್ಯಾಂಕ್‌ಗಳವರು ನೋಟಿಸ್ ಕೊಡುವುದಕ್ಕೆ ಕಡಿವಾಣ ಹಾಕಬೇಕು. ಸಾಲ ವಸೂಲಿಗೆ ಮನೆಗಳಿಗೆ ಬಾರದಂತೆ ನೋಡಿಕೊಳ್ಳಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮನವಿ ಸ್ವೀಕರಿಸಿದರು.
ರಾಜ್ಯ ಸಂಚಾಲಕ ಗಣೇಶ ಮಾರುತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.