ಶನಿವಾರ, ಡಿಸೆಂಬರ್ 7, 2019
22 °C
ನೆರೆಪೀಡಿತ 10 ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ರೈತ ಸಂಘಟನೆಗಳ ಬೃಹತ್‌ ಪ್ರತಿಭಟನೆ 16ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸೆ.16ರಂದು ಬೆಳಗಾವಿ ಸೇರಿ ನೆರೆಪೀಡಿತ 10 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಸಂಘಟನೆಯ ಮುಖಂಡ ಚೂನಪ್ಪ ಪೂಜಾರಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿ ಅಂದು ಬೆಳಿಗ್ಗೆ 11ಕ್ಕೆ ಕೋಟೆ ಕೆರೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು. ಕನ್ನಡಪರ ಸಂಘಟನೆಗಳು ಹಾಗೂ ಇನ್ನಿತರ ಸಂಘಟನೆಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ’ ಎಂದರು.  

‘ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಪ್ರವಾಹದಲ್ಲಿ ಜೀವ ಕಳೆದುಕೊಂಡವರಿಗೆ ತಲಾ ₹ 15 ಲಕ್ಷ ಪರಿಹಾರ ಕೊಡಬೇಕು. ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ₹ 15 ಲಕ್ಷ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳಿಗೆ ₹ 10 ಲಕ್ಷ ಪರಿಹಾರ ನೀಡಬೇಕು. ಪ್ರಾಣ ಕಳೆದುಕೊಂಡ ಜಾನುವಾರುಗಳಿಗೆ ಹೆಚ್ಚಿನ ಹಣ ಕೊಡಬೇಕು. ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು’ ಎಂದು ತಿಳಿಸಿದರು. 

ಮುಖಂಡರಾದ ರಾಘವೇಂದ್ರ ನಾಯಿಕ, ಜಯಶ್ರೀ ಗುರಣ್ಣವರ ಸುದ್ದಿಗೋಷ್ಠಿಯಲ್ಲಿ ಇದ್ದರು.  

 

ಪ್ರತಿಕ್ರಿಯಿಸಿ (+)