ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿಯಲ್ಲಿ ಸುಗಮ ಸಂಚಾರಕ್ಕೆ ಮೇಲ್ಸೇತುವೆ ಸಹಕಾರಿ: ಡಿ.ಸಿ ನಿತೇಶ್‌ ಪಾಟೀಲ

Published 6 ಜನವರಿ 2024, 16:07 IST
Last Updated 6 ಜನವರಿ 2024, 16:07 IST
ಅಕ್ಷರ ಗಾತ್ರ

ಬೆಳಗಾವಿ: ನಗರದಲ್ಲಿ ವಾಹನ ಸಂಚಾರ ಸುಗಮಗೊಳಿಸುವ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ-48ರಿಂದ ರಾಣಿ ಚನ್ನಮ್ಮನ ವೃತ್ತದವರೆಗೆ 4.50 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು.

‘ಇದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಕನಸಿನ ಯೋಜನೆಯಾಗಿದೆ. ಈಗ ಹೆಚ್ಚಾಗಿರುವ ಸಂಚಾರದಟ್ಟಣೆ ನಿಯಂತ್ರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

‘ಮೇಲ್ಸೇತುವೆ ನಿರ್ಮಾಣವಾದರೆ, ರಾಷ್ಟ್ರೀಯ ಹೆದ್ದಾರಿಯಿಂದ ಅಶೋಕ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಮತ್ತು ರಾಣಿ ಚನ್ನಮ್ಮನ ವೃತ್ತದವರೆಗೆ ಸಂಚಾರಕ್ಕೆ ಅನುಕೂಲವಾಗಲಿದೆ. ನೂತನ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ತೆರಳಲು ಅನುಕೂಲವಾಗುವಂತೆ ಯೋಜನೆ ವಿನ್ಯಾಸಗೊಳಿಸಲಾಗುವುದು’ ಎಂದರು.

‘ಬಿಎಸ್ಎನ್ಎಲ್, ಹೆಸ್ಕಾಂ, ಸಾರಿಗೆ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್.ಸೊಬರದ, ಉಪವಿಭಾಗಾಧಿಕಾರಿ ಶ್ರವಣ ನಾಯಕ, ಭೂಸ್ವಾಧೀನ ಇಲಾಖೆ ಅಧಿಕಾರಿ ಬಲರಾಮ್ ಚವ್ಹಾಣ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT