ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ವಿಪತ್ತು ಘೋಷಿಸಲು ಒತ್ತಾಯ

ಕುರಬೂರ ಶಾಂತಕುಮಾರ ನೇತೃತ್ವದಲ್ಲಿ ಪ್ರತಿಭಟನೆ
Last Updated 14 ಸೆಪ್ಟೆಂಬರ್ 2019, 11:53 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದಲ್ಲಿ ನೆರೆಯಿಂದ ಉಂಟಾಗಿರುವ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂರಕ್ಕೂ ಹೆಚ್ಚು ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ರಾಜ್ಯವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರಬೂರ ಶಾಂತಕುಮಾರ ಮಾತನಾಡಿ, ‘ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಪ್ರಾಣಹಾನಿಗಳು ಉಂಟಾಗಿವೆ. ರೈತರು ಬೆಳೆದ ಬೆಳೆಗಳು ಸಂಪೂರ್ಣ ನೀರಿಗಾಹುತಿಯಾಗಿವೆ. ಹೀಗಾಗಿ, ಪ್ರವಾಹದಿಂದಾಗಿರುವ ಹಾನಿಯನ್ನು ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು’ ಎಂದು ಆಗ್ರಹಿಸಿದರು.

‘ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾನದಂಡಗಳು ಹತ್ತಾರು ವರ್ಷಗಳಿಂದ ಬದಲಾಗಿಲ್ಲ. ಪ್ರಸ್ತುತ ಸಂದರ್ಭಕ್ಕೆ ಅನುಗುಣವಾಗಿ ಮಾನದಂಡಗಳನ್ನು ಬದಲಾಯಿಸಬೇಕು. ವಿಪತ್ತು ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಕೊಡಬೇಕು’ ಎಂದು ಮನವಿ ಮಾಡಿದರು.

‘ರಾಜ್ಯದಲ್ಲಿ ಬಿಜೆಪಿಯ 25 ಲೋಕಸಭಾ ಸದಸ್ಯರು ಇದ್ದರೂ ಕೂಡ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸಲು ವಿಫಲರಾಗಿದ್ದಾರೆ. ಸಂಸದರು ಹಾಗೂ ರಾಜ್ಯ ಸರ್ಕಾರ ಕೂಡಲೇ ನಿಯೋಗದೊಂದಿಗೆ ತೆರಳಿ ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಆಗ್ರಹಿಸಿದರು.

ಪರಿಹಾರ ಹೆಚ್ಚಿಸಿ:‘ರಾಜ್ಯದಾದ್ಯಂತ 8 ಲಕ್ಷ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಹತ್ತಿ, ಮೆಕ್ಕೆಜೋಳ, ಭತ್ತ ಸೇರಿ ಇನ್ನಿತರ ಬೆಳೆಗಳು ನಾಶವಾಗಿವೆ. ಈಗ ಹೆಕ್ಟೇರ್‌ಗೆ ₹ 36,000 ಪರಿಹಾರ ಕೊಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸಿ ಹೆಕ್ಟೇರ್‌ಗೆ ₹ 1 ಲಕ್ಷ ಪರಿಹಾರ ಕೊಡಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಹೊಸದಾಗಿ ದೀರ್ಘಾವಧಿ ಸಾಲವನ್ನು ಬಡ್ಡಿ ರಹಿತವಾಗಿ ಕೊಡುವ ಯೋಜನೆ ರೂಪಿಸಬೇಕು. ಫಸಲ್‌ ವಿಮಾ ಯೋಜನೆಯಡಿ ವಿಮೆ ಮಾಡಿಸಿರುವ ರೈತರಿಗೆ ಕೂಡಲೇ ಪರಿಹಾರ ಪಾವತಿ ಮಾಡಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ಉಪಾಧ್ಯಕ್ಷ ಸುರೇಶ ಪಾಟೀಲ, ತೇಜಸ್ವಿ ಪಾಟೀಲ, ಎಸ್‌.ಎನ್‌. ಬಸವಣ್ಣವರ, ಬಾಬು ಉಪಾಸಿ, ಈರಣ್ಣ ಅರಳೀಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT