ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಪಿಎಲ್‌ ಕುಟುಂಬಗಳಿಗೆ ಉಚಿತ ಚಿಕಿತ್ಸೆ’

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ
Last Updated 20 ಸೆಪ್ಟೆಂಬರ್ 2019, 5:25 IST
ಅಕ್ಷರ ಗಾತ್ರ

ಬೆಳಗಾವಿ: ‘‌ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಲ್ಲಿ ದೊರೆಯುವ ಸೌಲಭ್ಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪನಿರ್ದೇಶಕ ಡಾ.ಅಪ್ಪಾಸಾಹೇಬ ಎಂ. ನರಟ್ಟಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌, ಬಿಮ್ಸ್‌, ವಾರ್ತಾ ಮತ್ತು ಪ್ರಚಾರ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ’ ಪಾಕ್ಷಿಕ ಆಚರಣೆ–ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಯೋಜನೆಯಲ್ಲಿ ಬಿಪಿಎಲ್ ಕುಟುಂಬಗಳಿಗೆ ವರ್ಷಕ್ಕೆ ₹5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ. ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್‌ ದರದ ಶೇ 30ರಷ್ಟು ವೆಚ್ಚ ಸಿಗಲಿದೆ. ವಾರ್ಷಿಕ ₹ 1.50 ಲಕ್ಷ ವರಮಾನ ಇರುವವರು ಪಡೆದುಕೊಳ್ಳಬಹುದು’ ಎಂದು ಹೇಳಿದರು.

ಬಿಮ್ಸ್‌ ಆಸ್ಪತ್ರೆ ಪ್ರಭಾರ ವೈದ್ಯಕೀಯ ಅಧೀಕ್ಷಕ ಡಾ.ಜಿ. ದಂಡಗಿ ಮಾತನಾಡಿ, ‘ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಜಿಲ್ಲಾ ಆಸ್ಪತ್ರೆಯಲ್ಲಿಯೂ ಲಭ್ಯವಿದೆ. ಅರ್ಹ ಫಲಾನುಭವಿಗಳು ಇದರ ಲಾಭ ಪಡೆಯಬಹುದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಮ್ಸ್‌ ನಿರ್ದೇಶಕ ಡಾ.ಎಸ್.ಟಿ. ಕಳಸದ ಮಾತನಾಡಿ, ‘ಯೋಜನೆಯಲ್ಲಿ ಒಟ್ಟು 1,650 ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುವುದು. ರೋಗಿಗಳು ತಮ್ಮ ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ನೊಂದಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋಗಬೇಕು. ನೋಂದಣಿ ಮಾಡಿಸಿ ‘ಎವಿ-ಎಆರ್‌ಕೆ’ ಆರೋಗ್ಯ ಕಾರ್ಡ್ ಪಡೆಯಬಹುದು’ ಎಂದು ತಿಳಿಸಿದರು.

‘ಸರ್ಕಾರಿ ಆಸ್ಪತ್ರೆಯು ಚಿಕಿತ್ಸೆ ನೀಡುವ ಸಾಮರ್ಥ್ಯ ಹೊಂದಿದ್ದಲ್ಲಿ ಅಲ್ಲಿಯೇ ಪಡೆಯಬಹುದು. ಇಲ್ಲದಿದ್ದರೆ ಬೇರೆ ಆಸ್ಪತ್ರೆಗೆ ಕಳುಹಿಸಲಾಗುತ್ತದೆ (ರೆಫರಲ್). ರೇಪರಲ್ ಪಡೆದ ರೋಗಿಯು ತಾನು ಇಚ್ಛಿಸುವ ಯಾವುದೇ ನೋಂದಾಯಿತ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ತುರ್ತು ಚಿಕಿತ್ಸೆಗೆ ರೆಫರಲ್ ಇಲ್ಲದೆಯೂ ನೇರವಾಗಿ ಹೋಗಬಹುದು. ಆರೋಗ್ಯ ಸ್ಥಿತಿ ಸ್ಥಿರಗೊಂಡ ಕೂಡಲೇ ಚಿಕಿತ್ಸೆ ನೀಡಿದ ಆಸ್ಪತ್ರೆಗೆ ಪಡಿತರ ಚೀಟಿ ಸಲ್ಲಿಸಬೇಕು’ ಎಂದು ಮಾಹಿತಿ ನೀಡಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪ್ರಾದೇಶಿಕ ಸಮಾಲೋಚಕ ಡಾ.ವಿ.ಡಿ. ಡಾಂಗೆ ಯೋಜನೆಯ ಕುರಿತು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹುಸೇನಸಾಬ ಖಾಜಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಚಾಂದನಿ ದೇವಡಿ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಅನಿಲ ಕೊರಬು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಪಿ. ಯಲೀಗಾರ, ಜಿಲ್ಲಾ ಸಂಯೋಜಕರಾದ ನಾಗರಾಜ ಹೊನ್ನಪ್ಪಗೌಡ, ಅಜಿತ ಕಾಂಬ್ಳೆ ಇದ್ದರು.

ನೇತ್ರಾವತಿ ಹಾಗೂ ನಾಗಲಕ್ಷ್ಮಿ ಪ್ರಾರ್ಥಿಸಿದರು. ಎಡಿಎಚ್‌ಒ ಡಾ.ಶೈಲಜಾ ತಮ್ಮಣ್ಣವರ ಸ್ವಾಗತಿಸಿದರು. ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು. ಜಿಲ್ಲಾ ಆರ್.ಸಿ.ಎಚ್‌. ಅಧಿಕಾರಿ ಡಾ.ಐ.ಪಿ ಗಡಾದ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT