ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಸೂಚನೆ

ಸಭೆ ನಡೆಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎನ್. ಕೃಷ್ಣಮೂರ್ತಿ
Last Updated 20 ಫೆಬ್ರುವರಿ 2020, 20:00 IST
ಅಕ್ಷರ ಗಾತ್ರ

ಬೆಳಗಾವಿ: ‘ಅಂಗನವಾಡಿ, ವಸತಿನಿಲಯಗಳ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು. ಶುದ್ಧ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಬೇಕು’ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎನ್.ಕೃಷ್ಣಮೂರ್ತಿ ಸೂಚಿಸಿದರು.

ಇಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನ್ಯಾಯಬೆಲೆ ಅಂಗಡಿಗಳಲ್ಲಿ ತೂಕ ಮತ್ತು ಅಳತೆ ಬಗ್ಗೆ ನಿಗಾ ವಹಿಸಬೇಕು. ಕೆಲವು ಕಡೆಗಳಲ್ಲಿ ದಾಖಲೆಗಳ ನಿರ್ವಹಣೆ ಸಮರ್ಪಕ ನಡೆದಿಲ್ಲದಿರುವುದು ಕಂಡುಬರುತ್ತದೆ. ಇದು ತಪ್ಪಬೇಕು. ಆರೋಗ್ಯ ಇಲಾಖೆ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಬೇಕು’ ಎಂದು ತಿಳಿಸಿದರು.

ವೈಜ್ಞಾನಿಕವಾಗಿ ಸಂಗ್ರಹಿಸಿ:‘ಸಾರ್ವಜನಿಕ ವಿತರಣೆಗಾಗಿ, ಆಹಾರ ಧಾನ್ಯವನ್ನು ಗೋದಾಮಿನಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಬೇಕು. ಸಂಗ್ರಹ ಮತ್ತು ವಿತರಣೆಗೆ ಸಂಬಂಧಿಸಿದಂತೆ ದೈನಂದಿನ ಮಾಹಿತಿಯನ್ನು ಸಮರ್ಪಕವಾಗಿ ಇಟ್ಟಿರಬೇಕು. ಆದರೆ ಜಿಲ್ಲೆಯ ಗೋದಾಮುಗಳಲ್ಲಿ ಆಹಾರ ಪರೀಕ್ಷಾ ಉಪಕರಣ ಇಟ್ಟಿರುವುದು ಕಂಡುಬರಲಿಲ್ಲ. ಕೆಲವು ನ್ಯಾಯಬೆಲೆ ಅಂಗಡಿಗಳು ಸರಿಯಾದ ಸಮಯಕ್ಕೆ ತೆರೆಯದಿರುವ ಬಗ್ಗೆ ದೂರುಗಳಿವೆ. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಬೇಕು’ ಎಂದು ಸದಸ್ಯ ಡಿ.ಜಿ. ಹಸಬಿ ಸೂಚಿಸಿದರು.

‘ಆಹಾರಧಾನ್ಯ ಗೋದಾಮುಗಳಲ್ಲೇ ವ್ಯರ್ಥವಾದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಕಾರ್ಡ್‌ದಾರರಿಗೆ ಸರ್ಕಾರದಿಂದ ಉಚಿತವಾಗಿ ನೀಡುವ ಆಹಾರಧಾನ್ಯಗಳ ಮಾಹಿತಿ ಫಲಕವನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಹಾಕಬೇಕು. ಆಹಾರ ಅದಾಲತ್ ನಡೆಸಬೇಕು. ಹಣ ಪಡೆಯುವ ಮತ್ತು ಸಮಯಕ್ಕೆ ಸರಿಯಾಗಿ ಅಂಗಡಿ ಬಾಗಿಲು ತೆರೆಯದ ಅಂಗಡಿಗಳ ಮಾಲೀಕರಿಂದ ವಿವರಣೆ ಪಡೆಯಬೇಕು’ ಎಂದರು.

ಹಾಲು ವಿತರಿಸುತ್ತಿಲ್ಲ:ಸದಸ್ಯೆ ಮಂಜುಳಾಬಾಯಿ, ‘ಕೆಲವು ಅಂಗನವಾಡಿಗಳಲ್ಲಿ, ಮಕ್ಕಳ ದಾಖಲಾತಿ ಮತ್ತು ಹಾಜರಾತಿಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ರೇಷನ್ ಅಸಮರ್ಪಕ ದಾಸ್ತಾನು, ಕೆಲವು ಕಡೆ ಮಕ್ಕಳಿಗೆ ಹಾಲು ವಿತರಿಸದಿರುವುದನ್ನು ಗಮನಿಸಲಾಗಿದೆ. ನಿರ್ಲಕ್ಷ್ಯ ವಹಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಸದಸ್ಯ ಶಿವಶಂಕರ ಮಾತನಾಡಿ, ‘ಅಪೌಷ್ಟಿಕತೆ ಹೊಂದಿರುವ ಮಕ್ಕಳ ಸಂಖ್ಯೆಯಲ್ಲಿ ಹೊಂದಾಣಿಕೆ ಆಗುತ್ತಿಲ್ಲ. ಆಸ್ಪತ್ರೆಗೆ ದಾಖಲಾದ ಮಕ್ಕಳಲ್ಲಿ ಗುಣಮುಖರಾದ ಮಕ್ಕಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಂಕಿಅಂಶಗಳಲ್ಲಿ ವ್ಯತ್ಯಾಸವಿದೆ. ಈ ಬಗ್ಗೆ ಸೂಕ್ತ ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

ಸದಸ್ಯ ಬಿ.ಎ. ಮಹಮ್ಮದ್ ಅಲಿ ಮಾತನಾಡಿ, ‘ಕೆಲವು ಹಾಸ್ಟೆಲ್‌ಗಳಲ್ಲಿ ಮಿತಿಗಿಂತ ಜಾಸ್ತಿ ಪ್ರವೇಶ ನೀಡಿದ್ದು, ಇದರಿಂದ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಕ್ಕಪ್ಪಗೋಳ, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ರಾಮನಗೌಡ ಕನ್ನೊಳ್ಳಿ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT