ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರೇಶ ಅಂಗಡಿ ಕುಟುಂಬಕ್ಕೆ ನ್ಯಾಯ ಒದಗಿಸದ ಸರ್ಕಾರ: ಡಿ.ಕೆ.ಶಿವಕುಮಾರ್ ಟೀಕೆ

Last Updated 2 ಅಕ್ಟೋಬರ್ 2020, 5:03 IST
ಅಕ್ಷರ ಗಾತ್ರ

ಬೆಳಗಾವಿ: ‘ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಪಾರ್ಥಿವ ಶರೀರವನ್ನು ನವದೆಹಲಿಯಿಂದ ಬೆಳಗಾವಿಗೆ ತರಲು ವಿಫಲವಾದ ಕೇಂದ್ರ ಮತ್ತು ರಾಜ್ಯದ ಸರ್ಕಾರಗಳು, ಆ ಕುಟುಂಬದವರಿಗೆ ನ್ಯಾಯ ಒದಗಿಸಲಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಟೀಕಿಸಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಬೇಕಿತ್ತು. ಅಂತಿಮ ದರ್ಶನಕ್ಕೆ ಕ್ಷೇತ್ರದ ಜನರಿಗೆ ಅವಕಾಶ ಕೊಡಬಹುದಾಗಿತ್ತು. ನಾಲ್ಕು ತಿಂಗಳ ಹಿಂದೆ ಏನೇನೋ ರಾಜಕಾರಣ ನಡೆಯಿತು; ಅವರನ್ನು ಮುಖ್ಯಮಂತ್ರಿ ಮಾಡಲು ಚರ್ಚೆಯಾಗಿತ್ತು ಎಂದು ಕುಟುಂಬದವರು ಹೇಳಿದ್ದಾರೆ. ಹೀಗಿದ್ದಾಗಲೂ ನೊಂದ ಕುಟುಂಬಕ್ಕೆ ನ್ಯಾಯ ಕಲ್ಪಿಸಲಿಲ್ಲ. ಅವರು ಕೇಂದ್ರದ ಮಂತ್ರಿ ಆಗಿದ್ದರು. ಬೆಳಗಾವಿಯಲ್ಲಿ ಮಿಲಿಟರಿ ನೆಲೆ ಇದೆ. ಆದರೂ ಪಾರ್ಥಿವ ಶರೀರ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಆಗಲಿಲ್ಲ’ ಎಂದು ಆರೋಪಿಸಿದರು.

ಹಾಥರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಇಡೀ ಪ್ರಪಂಚಕ್ಕೆ ಕಪ್ಪು ಚುಕ್ಕೆ; ಮನುಕುಲಕ್ಕೆ ಅಪಮಾನ’ ಎಂದು ವಾಗ್ದಾಳಿ ನಡೆಸಿದರು.

‘ಪ್ರವಾಹ ಸಂತ್ರಸ್ತರಿಗೆ ನ್ಯಾಯ ಕೊಡಲು ಸರ್ಕಾರಕ್ಕೆ ಆಗಿಲ್ಲ. ಬೆಳಗಾವಿಯಲ್ಲಿ ಇಷ್ಟು ಜನ ಸಚಿವರು, ಸಂಸದರಿದ್ದರೂ ಸಮರ್ಪಕ ಪರಿಹಾರ ಕೊಡಿಸಿಲ್ಲ. ಇದೆಲ್ಲವನ್ನೂ ಗಮನಿಸಿ ಜನರು ನಿರ್ಧಾರ ಮಾಡಬೇಕು’ ಎಂದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಜಿಲ್ಲಾ ನಾಯಕರಿಂದ ಅಭಿಪ್ರಾಯ ಸಂಗ್ರಹಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT