ಸೋಮವಾರ, ಜುಲೈ 26, 2021
21 °C
ಪ್ರಗತಿ ಪರಿಶೀಲನೆ ನಡೆಸಿದ ಸಚಿವ ರಮೇಶ ಜಾರಕಿಹೊಳಿ

ಪಕ್ಷಾತೀತವಾಗಿ ಸಮಗ್ರ ಅಭಿವೃದ್ಧಿಗೆ ಆದ್ಯತೆ: ರಮೇಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಪಕ್ಷಾತೀತವಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೂ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ದೊಡ್ಡ ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಯ ಮೇಲ್ದರ್ಜೆಗೇರಿಸಲಾಗುವುದು. ಕುಡಿಯುವ ನೀರು ಯೋಜನೆ ಅನುಷ್ಠಾನ ಹಾಗೂ ಸ್ಮಶಾನ ಭೂಮಿ ಮಂಜೂರಾತಿ ಸೇರಿದಂತೆ ಎಲ್ಲ ಕೆಲಸಗಳನ್ನು ಕಾಲಮಿತಿಯಲ್ಲಿ ಮಾಡಲಾಗುವುದು. ಮಲಿನ ನೀರು ಅಥವಾ ತ್ಯಾಜ್ಯ ನೇರವಾಗಿ ನದಿ ಸೇರದಂತೆ ನೋಡಿಕೊಳ್ಳಬೇಕು’ ಎಂದರು.

ಪ್ರಸ್ತಾವ ಸಲ್ಲಿಸಿ: ‘ತಾಲ್ಲೂಕಿನ ಸಾಂಬ್ರಾ, ಗಣೇಶಪುರ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದ ಬಗ್ಗೆ ಪ್ರತ್ಯೇಕ ಸಭೆ ಕರೆಯುತ್ತೇನೆ’ ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಯಲ್ಲಪ್ಪ ಕೋಳೇಕರ, ‘ನರೇಗಾ ಕೆಲಸದ ಸ್ಥಳದಲ್ಲಿ ಕುಡಿಯುವ ನೀರು ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕು’ ಎಂದು ಕೋರಿದರು.

ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಸಿಇಒ, ‘ನರೇಗಾ ಕಾಮಗಾರಿ ಸ್ಥಳದಲ್ಲೇ ಮಕ್ಕಳಿಗೆ ಕಲಿಸಲು ಅಂಗನವಾಡಿ ಮಾದರಿ ಬೋಧನೆ ಹಾಗೂ ಪ್ರಥಮ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತಿದೆ’ ಎಂದರು.

ಕ್ರಮಕ್ಕೆ ಸೂಚನೆ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಆಂಗಡಿ, ‘ಸೋಯಾಅವರೆ ಬಿತ್ತನೆ ಬೀಜ ಕಳಪೆ ಆಗಿರುವ ಕುರಿತು ಸಾವಿರಾರು ರೈತರು ದೂರು ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಕೋವಿಡ್–19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೇಕಾರರು ಮತ್ತು ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರಿಗೆ ನೆರವು ಒದಗಿಸುವ ಬಗ್ಗೆ ಸರ್ಕಾರದ ಹಂತದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಒತ್ತಾಯಿಸಿದರು.

ಶಾಸಕ ಅನಿಲ ಬೆನಕೆ, ‘ಧಾಮನೆ ಗ್ರಾಮ ಭಾಗದಲ್ಲಿ ಬಳಕೆಯಾಗದ ಮಹಾರಾಷ್ಟ್ರದ ತಿಲಾರಿ ಜಲಾಶಯದ ನೀರನ್ನು ಈ ಕಡೆಗೆ ತಿರುಗಿಸಿದರೆ ಜಿಲ್ಲೆಯ ನೀರಿನ ಸಮಸ್ಯೆ ಬಗೆಹರಿಸಬಹುದು’ ಎಂದರು.

ವಿಧಾನಪರಿಷತ್‌ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಅಭಯ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಬುಡಾ ಆಯುಕ್ತ ಘೂಳಪ್ಪ ಹೊಸಮನಿ, ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್‌ ಇದ್ದರು.

ಇದಕ್ಕೂ ಮುನ್ನ ಸ್ವಚ್ಛ ಭಾರತ ಮಿಷನ್‌ನಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಕಸ ಸಂಗ್ರಹಿಸುವ ವಾಹನಗಳನ್ನು ಉಸ್ತುವಾರಿ ಸಚಿವರು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು