ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತರಿಗೆ ಬಡಾವಣೆ ಅಭಿವೃದ್ಧಿ: ಗೋವಿಂದ ಕಾರಜೋಳ

ಅಧಿಕಾರಿಗಳಿಗೆ ಸಚಿವ ಗೋವಿಂದ ಕಾರಜೋಳ ಸೂಚನೆ
Last Updated 6 ಆಗಸ್ಟ್ 2021, 12:05 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾಗುವವರಿಗೆ ಅಗತ್ಯವಿರುವ ಕಡೆಗಳಲ್ಲಿ ‌ಹೊಸದಾಗಿ ಬಡಾವಣೆ ಅಭಿವೃದ್ಧಿಪಡಿಸಿ ನೀರು, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಿ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸಚಿವ ಗೋವಿಂದ ಕಾರಜೋಳ ಸೂಚಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಪುನರ್ವಸತಿ ಕಾಯ್ದೆ ಪ್ರಕಾರ ಸಂತ್ರಸ್ತರಿಗೆ 40x60 ಅಳತೆಯ ನಿವೇಶನದಲ್ಲಿ ಸೂರು‌ ಒದಗಿಸಲು ಸಮರ್ಪಕ ಯೋಜನೆ ರೂಪಿಸಬೇಕು. ಮುಳುಗಡೆಯಾಗುವ ಗ್ರಾಮಗಳ ಜನರಿಗೆ ತಾತ್ಕಾಲಿಕ ‌ಶೆಡ್ ನಿರ್ಮಿಸಿ ಮೂಲಸೌಕರ್ಯ ಒದಗಿಸಬೇಕು. ‘ಆಸರೆ’ ಮನೆಗಳನ್ನು ನೀಡಲು ಪರಿಶೀಲಿಸಬೇಕು’ ಎಂದು ತಿಳಿಸಿದರು.

ಪಾವತಿಗೆ ಸೂಚನೆ:‘ಮನೆ ಕಳೆದುಕೊಂಡಿರುವ ಕುಟುಂಬಗಳಿಗೆ ಘೋಷಿಸಿರುವ ₹ 10ಸಾವಿರ ಪರಿಹಾರ ಹಣವನ್ನು ಆರ್.ಟಿ.ಜಿ.ಎಸ್. ಮೂಲಕ ನೇರವಾಗಿ ಪಾವತಿಸಬೇಕು’ ಎಂದು ತಾಕೀತು ಮಾಡಿದರು.

‘ಹಾನಿಗೆ ಸಂಬಂಧಿಸಿದಂತೆ ಜಂಟಿ‌ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಬೇಕು. ಜಮೀನಿನಲ್ಲಿ ನೀರಿರುವುದರಿಂದ ಅಡ್ಡಿಯಾದರೆ ಜಿ.ಪಿ.ಎಸ್. ಆಧಾರಿತ ಸಮೀಕ್ಷೆಯ ಸಾಧ್ಯತೆ ಪರಿಶೀಲಿಸಬೇಕು. ಮಳೆಯಿಂದ ತೊಂದರೆಯಾದಾಗ ತಕ್ಷಣವೇ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಬೇಕು. ಅಗತ್ಯ ಪರಿಕರಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು’ ಎಂದು ಸೂಚಿಸಿದರು.

ತೊಂದರೆ ನೀಗಿಸಿ:‘ರೈತರಿಗೆ ವಿದ್ಯುತ್ ಪರಿವರ್ತಕ ಒದಗಿಸುವ ಸಂದರ್ಭದಲ್ಲಿ ಉಂಟಾಗುವ ತೊಂದರೆಗಳನ್ನು ನೀಗಿಸಲು ಕ್ರಮ ಕೈಗೊಳ್ಳಬೇಕು. ಟಿಸಿ‌ ದುರಸ್ತಿ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ದುರಸ್ತಿಗೆ ಅನುಮತಿ ನೀಡಬೇಕು’ ಎಂದು ತಿಳಿಸಿದರು.

‘ಕೋವಿಡ್ ಸಂಭವನೀಯ 3ನೇ ಅಲೆ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣೆ ಮುಖ್ಯವಾಗಿದೆ. ಆದ್ದರಿಂದಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಔಷಧಿ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ 418 ಹಾಸಿಗೆಗಳು ಲಭ್ಯವಿವೆ. ಆದರೆ, ತುರ್ತು ಪರಿಸ್ಥಿತಿ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳಲ್ಲೂ ತಯಾರಿ ಮಾಡಬೇಕು’ ಎಂದು ಸೂಚಿಸಿದರು.

ಪಟ್ಟಿ ಸಿದ್ಧ:ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಜಿಲ್ಲೆಯಲ್ಲಿ ಪ್ರವಾಹ ಮತ್ತು ಅತಿವೃಷ್ಟಿಯಿಂದ ಪ್ರಾಥಮಿಕ ಮಾಹಿತಿ ಪ್ರಕಾರ ₹7,800 ಕೋಟಿ ನಷ್ಟವಾಗಿದೆ. ಸಮೀಕ್ಷೆ ಬಳಿಕ ಖಚಿತ ಮಾಹಿತಿ ‌ಲಭಿಸಲಿದೆ. ಮಳೆಯಿಂದ ಚಿಕ್ಕೋಡಿ ವಿಭಾಗದಲ್ಲಿ ತೊಂದರೆಯಾಯಿತು. ಸಕಾಲದಲ್ಲಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಹಾನಿಯ ಪ್ರಮಾಣ ಕಡಿಮೆಗೊಳಿಸಲು ಸಾಧ್ಯವಾಯಿತು’ ಎಂದರು.

‘ಅಥಣಿ ತಾಲ್ಲೂಕಿನಲ್ಲಿ 22 ಹಳ್ಳಿಗಳು ಜಲಾವೃತಗೊಂಡಿದ್ದವು. 230 ತಾತ್ಕಾಲಿಕ ಶೆಡ್ ನಿರ್ಮಿಸಿ ಜನರಿಗೆ ತುರ್ತು ವಸತಿ ಕಲ್ಪಿಸಲಾಗಿದೆ. ಆದ್ಯತೆ ಮೇರೆಗೆ ತಲಾ ₹ 10ಸಾವಿರ ಪರಿಹಾರವನ್ನು ಆರ್.ಟಿ.ಜಿ.ಎಸ್. ಮೂಲಕ ನೀಡಲಾಗುವುದು. ಇದಕ್ಕೆ ಪಟ್ಟಿ ಸಿದ್ಧಗೊಂಡಿದೆ. ಬೆಳೆ ಹಾನಿ ಜಂಟಿ ಸಮೀಕ್ಷೆ ಆರಂಭಿಸಲಾಗಿದೆ. ಆ. 15ರೊಳಗೆ ಹಾನಿಯ ಸಮಗ್ರ ವರದಿ ಸಿದ್ಧಪಡಿಸಲಾಗುವುದು’ ಎಂದು ತಿಳಿಸಿದರು.

ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಲಸಿಕಾಧಿಕಾರಿ ಡಾ.ಐ.ಪಿ. ಗಡಾದ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿದರು.

ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಂ ಅಮಟೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಇದ್ದರು.

ಸಚಿವರ ಸೂಚನೆಗಳು

* ಬಾಕಿ ಉಳಿದಿರುವ ಆಮ್ಲಜನಕ ಘಟಕಗಳ ಸ್ಥಾಪನೆ ಕಾರ್ಯ ಹಾಗೂ ತುರ್ತು ನಿರ್ವಹಣೆಗೆ ಅನುಕೂಲವಾಗುವಂತೆ ಸ್ಥಳೀಯ ಉತ್ತಮ ಕಂಪನಿಗಳಿಗೆ ಕಾರ್ಯಾದೇಶ ನೀಡಬೇಕು.

* ಕೋವಿಡ್ ಸಂದರ್ಭದಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ಗುಣಮಟ್ಟದ ಚಿಕಿತ್ಸೆಗಾಗಿ ಅಗತ್ಯ ತಜ್ಞ ವೈದ್ಯರು‌ ಮತ್ತು ಸಿಬ್ಬಂದಿ ನಿಯೋಜಿಸಬೇಕು.

* ಜಿಲ್ಲಾಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ತರಬೇತಿ ನೀಡುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು.

* ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಯ ಕೆಲಸ ತ್ವರಿತವಾಗಿ ಆಗಬೇಕು.

ನದಿ ತೀರದ ಪ್ರದೇಶಗಳಲ್ಲಿ ಮಳೆ ಹಾಗೂ ನೀರು ಹರಿವು ಪ್ರಮಾಣಕ್ಕೆ ಸಂಬಂಧಿಸಿದಂತೆ ಪ್ರವಾಹ ಮುನ್ಸೂಚನೆ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ.

–ಆಮ್ಲಾನ್ ಆದಿತ್ಯ ಬಿಸ್ವಾಸ್, ಪ್ರಾದೇಶಿಕ ಆಯುಕ್ತ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT