ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮದುರ್ಗ: ಪಿಡಿಒ ಮೇಲಿನ ಹಲ್ಲೆ ಖಂಡಿಸಿ ನೌಕರರ ಸಂಘದ ಪ್ರತಿಭಟನೆ

Last Updated 28 ಏಪ್ರಿಲ್ 2021, 6:19 IST
ಅಕ್ಷರ ಗಾತ್ರ

ರಾಮದುರ್ಗ: ಕರ್ತವ್ಯ ನಿರತ ತೋರಣಗಟ್ಟಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಜಯಗೌಡ ಪಾಟೀಲರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಇಲ್ಲಿನ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಸೇರಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದ ನೂರಾರು ಪದಾಧಿಕಾರಿಗಳು ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಿದರು. ಅಲ್ಲಿಂದ ಮೆರವಣಿಗೆ ಮೂಲಕ ಸಾಗಿ ತಹಶೀಲ್ದಾರ್‌ಗೂ ಮನವಿ ಸಲ್ಲಿಸಿದರು.

ಈ ಹಿಂದೆಯೂ ಮಾಜಿ ಅಧ್ಯಕ್ಷರ ಪತಿ ಮತ್ತು ಇತರರು ಸೇರಿ ಹಲ್ಲೆ ನಡೆಸಿದ್ದರು. ಆಗ ಹಿರಿಯರ ಸಮ್ಮುಖದಲ್ಲಿ ರಾಜಿ ಸಂಧಾನ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿತ್ತು. ಈಗ ಮತ್ತೆ ಹಲ್ಲೆ ಮಾಡಿರುವುದು ಸರ್ಕಾರಿ ಸೇವೆ ಸಲ್ಲಿಸುವವರಿಗೆ ಭದ್ರತೆ ಇಲ್ಲದಂತಾಗಿದೆ. ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಕಾನೂನು ಬಾಹಿರ ಕಾಮಗಾರಿಗೆ ಒತ್ತಾಯಿಸಿದಾಗ ವಿರೋಧ ವ್ಯಕ್ತ ಮಾಡಿದ ಪ್ರಾಮಾಣಿಕ ಅಧಿಕಾರಿಗೆ ಹಲ್ಲೆ ಮಾಡಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರೂ ತಪ್ಪಿತಸ್ಥರನ್ನು ಬಂಧಿಸಿಲ್ಲ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಹಲ್ಲೆ ನಡೆಸಿದ ಪಂಚಾಯ್ತಿ ಅಧ್ಯಕ್ಷರು, ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಬೇಕು. ಅಲ್ಲಿಯ ತನಕ ತಾಲ್ಲೂಕು ಆಡಳಿತದ ಎಲ್ಲ ನೌಕರರು ಸೇವೆಗೆ ಹಾಜರಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಅರಕೇರಿ, ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ, ವಿಜಯಕುಮಾರ ವನಕಿಹಾಳ, ಮಂಜುನಾಥ ದೇವರಡ್ಡಿ, ಸೋಮಶೇಖರ ಹಿರೇಸೋಮನ್ನವರ, ರಮೇಶ ರಕ್ಕಸಗೇರಿ, ಚನ್ನಮ್ಮ ಕೊಪ್ಪದ, ರಾಜೇಶ್ವರ ಮೆಕ್ಕೇದ, ಭಾರತಿ ಬದ್ನೂರ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT