ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಡದ ಬದುಕಿಗೆ ಕ್ರೀಡೆ ಮದ್ದು: ಜಿಲ್ಲಾಧಿಕಾರಿ ಹಿರೇಮಠ

ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿ ಹೇಳಿಕೆ
Last Updated 5 ಫೆಬ್ರುವರಿ 2021, 14:47 IST
ಅಕ್ಷರ ಗಾತ್ರ

ಬೆಳಗಾವಿ: ‘ನೌಕರಿಯ ಒತ್ತಡಕ್ಕೆ ಆಟೋಟಗಳು ಮದ್ದಾಗಿವೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ನಗರದ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶುಕ್ರವಾರದಿಂದ ಆಯೋಜಿಸಿರುವ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಚೇರಿಗಳಲ್ಲಿನ ಕೆಲಸದ ಒತ್ತಡ ನಡುವೆ ನೌಕರರು ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೆಚ್ಚೆಚ್ಚು ಭಾಗವಹಿಸುವ ಆಸಕ್ತಿ ಬೆಳಸಿಕೊಳ್ಳಬೇಕು. ಕೋವಿಡ್-19 ನಡುವೆ ನೌಕರರು ಒತ್ತಡದಲ್ಲಿಯೇ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ಆ ಸೋಂಕು ಕಡಿಮೆಯಾಗುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಈ ವೇಳೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಿರುವುದು ಸಂತಸದ ವಿಷಯವಾಗಿದೆ’ ಎಂದರು.

‘ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎಲ್ಲ ಇಲಾಖೆಗಳ ನೌಕರರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಕ್ರೀಡಾಭಿಮಾನ ಮೆರೆದಿದ್ದಾರೆ. ನೌಕರರ ಸಂಘದ ಪ್ರಮುಖ ಬೇಡಿಕೆಯಾಗಿರುವ, ಸಂಘಕ್ಕೆ 2 ಎಕರೆ ಜಮೀನನ್ನು ಮಂಜೂರು ಮಾಡುವ ಕುರಿತು ಕ್ರಮ ವಹಿಸಲಾಗುವುದು. ಅಲ್ಲದೆ ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್ ಮಾತನಾಡಿ, ‘ನೌಕರರು, ಸಿಬ್ಬಂದಿ ವರ್ಗ ಕೆಲಸದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆ ಮತ್ತು ಮನರಂಜನೆ ಮೂಲಕ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ’ ಎಂದರು.

‘ಕೋವಿಡ್-19 ಕಡಿಮೆಯಾಗಿದ್ದರೂ ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸುವುದು ಅಗತ್ಯವಾಗಿದೆ. ದೈಹಿಕ ಸಾಮರ್ಥ್ಯ, ಮಾನಸಿಕ ಆರೋಗ್ಯ ಇಲ್ಲದಿದ್ದರೆ ಯಾವ ಕೆಲಸಗಳೂ ಸುಸೂತ್ರವಾಗಿ ಆಗುವುದಿಲ್ಲ. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಲಾಭ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಂಘದ ರಾಜ್ಯ ಘಟಕದ ಉ‍ಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶಗೌಡ ಪಾಟೀಲ, ‘ಸರ್ಕಾರಿ ನೌಕರರಾದ ನಾವು ಒತ್ತಡದಲ್ಲಿಯೂ ಉತ್ತಮ ಕೆಲಸ ನಿರ್ವಹಿಸುತ್ತಿದ್ದೇವೆ. ಜನರ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇವೆ. ಸರ್ಕಾರವು ನಮ್ಮ ಬೇಡಿಕೆಯಂತೆ ಎನ್‌ಪಿಎಸ್ ರದ್ದುಪಡಿಸಬೇಕು. ಕೇಂದ್ರ ಸರ್ಕಾರಿ ನೌಕರರ ಸಿಗುತ್ತಿರುವ ವೇತನ ಸೌಲಭ್ಯಗಳನ್ನು ನಮಗೂ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

‘ಈಗಾಗಲೇ ರಾಜ್ಯ ಸರ್ಕಾರವು ಗಳಿಕೆ ರಜೆ ನಗದೀಕರಣ, ಶವ ಸಂಸ್ಕಾರಕ್ಕೆ ವೆಚ್ಚ, ಡಯಾಲಿಸಿಸ್‌ಚಿಕಿತ್ಸೆಗೆ ರಜೆ, 10 ದಿನಗಳ ಸಿಎಲ್‌ 15ದಿನಗಳಿಗೆ ಹೆಚ್ಚಿಸುವುದು, ನೌಕರರ ಚಿಕಿತ್ಸೆಗೆ ಆರೋಗ್ಯ ಸಿರಿ ಯೋಜನೆ ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸಿದೆ. ಇದರಂತೆ ಉಳಿದ ಬೇಡಿಕೆಗಳನ್ನು ಈಡೇರಿಸುವುದಕ್ಕೂ ಕ್ರಮ ವಹಿಸಬೇಕು’ ಎಂದರು.

ಬಿಮ್ಸ್ ಮುಖ್ಯ ಆಡಳಿತಾಧಿಕಾರಿ ಎಸ್.ಎಸ್. ಬಳ್ಳಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗೌರಿಶಂಕರ ಕಡೇಚೂರ, ಡಿಡಿಪಿಐ ಡಾ.ಎ.ಬಿ. ಪುಂಡಲೀಕ, ಚಂದ್ರಶೇಖರ ಕೋಲಕಾರ, ಶ್ರವಣ ರಾಣವ್ವಗೋಳ, ಎಂ.ಎಸ್‌. ಕಲ್ಮಠ ಪಾಲ್ಗೊಂಡಿದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT