ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಕಾರರಿಂದ ಸೀರೆ ಖರೀದಿ ಪರಿಶೀಲಿಸಿ ನಿರ್ಧಾರ: ಸಚಿವ ಶ್ರೀಮಂತ ಪಾಟೀಲ ಭರವಸೆ

Last Updated 9 ಜೂನ್ 2020, 12:31 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್- 19 ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೇಕಾರ ಕುಟುಂಬಗಳಿಂದ ನೇರವಾಗಿ ಸೀರೆ ಖರೀದಿಸುವುದು ಹಾಗೂ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ ಭರವಸೆ ನೀಡಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನೇಕಾರರ ಮುಖಂಡರ ಜೊತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹೊಲಿಗೆ ಯಂತ್ರ ಖರೀದಿ, ವಿದ್ಯುತ್ ಮಗ್ಗಗಳ ಅಳವಡಿಕೆ ಸೇರಿದಂತೆ ನೇಕಾರರಿಗೆ ನೀಡಲಾಗುವ ಸೌಲಭ್ಯಗಳ ಹಂಚಿಕೆಯ ಮಾರ್ಗಸೂಚಿ ಇನ್ನಷ್ಟು ಸರಳೀಕರಣಗೊಳಿಸಲಾಗುತ್ತಿದೆ. ಇದಲ್ಲದೇ ನೇಕಾರ ಕುಟುಂಬಗಳ ಸಮಗ್ರ ಸಮೀಕ್ಷೆ ಕೈಗೊಂಡು ಗುರುತಿನಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಇನ್ನು ಎರಡು ತಿಂಗಳ ಬಳಿಕ ಈ ಕೆಲಸ ಆಗಲಿದೆ’ ಎಂದು ತಿಳಿಸಿದರು.

‘ನೇಕಾರರ ಎಲ್ಲ ಬೇಡಿಕೆಗಳು ನ್ಯಾಯಯುತವಾಗಿವೆ. ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಅವರಿಗೆ ಒದಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸರ್ಕಾರದ ಕಡೆಯಿಂದ ಹೆಚ್ಚಿನ ಸಹಾಯ-ಸೌಲಭ್ಯಗಳು ಸಿಗಬೇಕಿದೆ. ನೇಕಾರರ ಪರಿಸ್ಥಿತಿಯ ಅರಿವು ಇರುವುದರಿಂದ ನೇಕಾರರ ಸಮುದಾಯದ ಏಳ್ಗೆಗೆ ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.

ಕೂಲಿ ನೇಕಾರರನ್ನು ಕೂಡ ಅಸಂಘಟಿತ ವಲಯದ ಕಾರ್ಮಿಕರು ಎಂದು ಗುರುತಿಸುವ ಬಗ್ಗೆ ಸೂಕ್ತ ಪ್ರಸ್ತಾವ ರೂಪಿಸಿ ಮುಖ್ಯಮಂತ್ರಿಗಳ ಜತೆ ಮಾತನಾಡುವುದಾಗಿ ಅವರು ತಿಳಿಸಿದರು.

‘ಸಾಲ ಸೇರಿದಂತೆ ನೇಕಾರರಿಗೆ ಇನ್ನೂ ಹೆಚ್ಚಿನ ಆರ್ಥಿಕ ನೆರವು ಒದಗಿಸಲು ಕೇಂದ್ರ ಸರಕಾರ ಕೈಜೋಡಿಸಿದರೆ ಇನ್ನಷ್ಟು ಅನುಕೂಲ ಆಗಲಿದೆ. ಈ ಬಗ್ಗೆ ಕೇಂದ್ರ ಸಚಿವರ ಜತೆಯೂ ಚರ್ಚಿಸಲಾಗಿದೆ’ ಎಂದು ಹೇಳಿದರು.

‘ಸೀರೆ ಖರೀದಿ ಅಥವಾ ಲಭ್ಯವಿರುವ ದಾಸ್ತಾನಿನ ಮೇಲೆ ಸಾಲ ನೀಡುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ. ಆದಷ್ಟು ಬೇಗನೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಸರ್ಕಾರವೇ ಸೀರೆ ಖರೀದಿಸಿದರೆ ಅನುಕೂಲ:‘ನೇಕಾರರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಮುಖ್ಯವಾಗಿ ನೇಕಾರರು ಉತ್ಪಾದಿಸಿರುವ ಸೀರೆಗಳನ್ನು ಸರ್ಕಾರವೇ ಖರೀದಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.‌ ಈ ನಿಟ್ಟಿನಲ್ಲಿ ಸಚಿವರು ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಅಭಯ ಪಾಟೀಲ ಒತ್ತಾಯಿಸಿದರು.

‘ಎಂ.ಎಸ್.ಎಂ.ಇ. ಅಡಿಯಲ್ಲಿ ಸಾಲ ತೆಗೆದುಕೊಂಡಿದ್ದರೆ ಸದ್ಯಕ್ಕೆ ಮರುಪಾವತಿಯನ್ನು ಕೈಬಿಡುವುದರ ಜತೆಗೆ ಹೆಚ್ಚುವರಿ ಸಾಲ ನೀಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಈ ಬಗ್ಗೆ ಬ್ಯಾಂಕರ್ಸ್ ಸಭೆ ಕರೆದು ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು.

ಕೋವಿಡ್–19 ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ ಐದು ಸಾವಿರಕ್ಕೂ ಅಧಿಕ ಕೈಮಗ್ಗ ನೇಕಾರರಿಂದ ದಾಖಲಾತಿ ಪಡೆದುಕೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಘೋಷಿಸಿರುವ ಪರಿಹಾರಧನ‌ ಶೀಘ್ರ ಜಮಾ ಮಾಡಲಾಗುವುದು. ಅದೇ ರೀತಿ ವಿದ್ಯುತ್ ಮಗ್ಗದ ಮಾಲೀಕರಿಗೂ ಪರಿಹಾರವನ್ನು ನೀಡಲಾಗುವುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಕೀರ್ತಪ್ಪ ಗೋಟೂರ ತಿಳಿಸಿದರು.

ಸೀರೆ ಖರೀದಿಗೆ ಮುಖಂಡರ ಆಗ್ರಹ:ನೇಕಾರರು ಈಗಾಗಲೇ ಉತ್ಪಾದಿಸಿರುವ ಸೀರೆಗಳನ್ನು ಸರ್ಕಾರ ಖರೀದಿಸಬೇಕು. ನೇಕಾರರಿಗೂ ₹ 5 ಸಾವಿರ ಪರಿಹಾರ ನೀಡಬೇಕು. ನೇಕಾರರ ಸಾಲಮನ್ನಾ ಯೋಜನೆ ಮಾರ್ಗಸೂಚಿ ಸರಳೀಕರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ನೇಕಾರರ ಮುಖಂಡರು ಸಚಿವರ ಮುಂದಿಟ್ಟರು.

ಮಹಾನಗರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್. ಹಾಗೂ ನೇಕಾರ ಸಮುದಾಯದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT