ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರದಲ್ಲಿ ಕೈಗಾರಿಕೆ ಬೆಳವಣಿಗೆಗೆ ಆದ್ಯತೆ

ಉದ್ಯಮಬಾಗ್‌ನಲ್ಲಿನ ಅವ್ಯವಸ್ಥೆ ಪರಿಶೀಲಿಸಿದ ಸಚಿವ ಶೆಟ್ಟರ್‌
Last Updated 1 ಅಕ್ಟೋಬರ್ 2019, 11:42 IST
ಅಕ್ಷರ ಗಾತ್ರ

ಬೆಳಗಾವಿ: ‘ಮಾದರಿ ಕೈಗಾರಿಕಾ ನೀತಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆ ಮತ್ತು ಬೆಳವಣಿಗೆಗೆ ಆದ್ಯತೆ ನೀಡಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಇಲ್ಲಿನ ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಕಾರಿನಲ್ಲಿ ಸಂಚರಿಸಿ ಪರಿಶೀಲಿಸಿದ ಬಳಿಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ನಡೆದ ವಾಣಿಜ್ಯೋದ್ಯಮಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಉದ್ಯಮಬಾಗ ಅತ್ಯಂತ ಹಳೆಯ ಕೈಗಾರಿಕಾ ಪ್ರದೇಶವಾಗಿದೆ. ಇಲ್ಲಿನ ಪರಿಸ್ಥಿತಿ ಅವಲೋಕಿಸಿದಾಗ ತಕ್ಷಣವೇ ರಸ್ತೆ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸುವ ಅವಶ್ಯವಿರುವುದು ಕಂಡುಬಂದಿದೆ. ಕೈಗಾರಿಕೋದ್ಯಮಿಗಳು ತೆರಿಗೆ ನೀಡುವುದರಿಂದ ಮೂಲಸೌಲಭ್ಯ ಸುಧಾರಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು’ ಎಂದು ನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು. ‘ಉತ್ತಮ ಸೌಲಭ್ಯ ಕಲ್ಪಿಸಿ, ತೆರಿಗೆ ಪ್ರಮಾಣವನ್ನು ಹೆಚ್ಚಿಸಿ’ ಎಂದು ತಿಳಿಸಿದರು.

₹ 6 ಕೋಟಿ ವೆಚ್ಚದಲ್ಲಿ:‘ಸದ್ಯಕ್ಕೆ ಲಭ್ಯವಿರುವ ₹ 6 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ವೃದ್ಧಿಸುವ ಕಾಮಗಾರಿಗಳನ್ನು ಆರಂಭಿಸಲಾಗುವುದು. ಏಕಗವಾಕ್ಷಿ ಪದ್ಧತಿಯಡಿ ಕೈಗಾರಿಕೆಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗೂ ತಿಳಿಸಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯಬೇಕಿರುವ ಪ್ರಸ್ತಾವಗಳನ್ನು ತಿಳಿಸಿದರೆ ಸಹಕರಿಸಲಾಗುವುದು’ ಎಂದರು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ‘ದೇಶದ ಶೇ. 75ರಷ್ಟು ತೆರಿಗೆ ಸಣ್ಣ ಉದ್ದಿಮೆದಾರರಿಂದ ಬರುತ್ತಿದ್ದು, ಆ ಕ್ಷೇತ್ರದ ಪ್ರಗತಿಗೆ ನೆರವು ನೀಡಲು ಸರ್ಕಾರ ಸಿದ್ಧವಿದೆ. ಉದ್ಯಮಬಾಗ ಕೈಗಾರಿಕಾ ಪ್ರದೇಶದ ಸಮಗ್ರ ಅಭಿವೃದ್ಧಿಗೆ ವರದಿ ಸಿದ್ಧಪಡಿಸಿದ ಬಳಿಕ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ಒದಗಿಸಲಾಗುವುದು’ ಎಂದು ತಿಳಿಸಿದರು.

ನೆರವಾಗಬೇಕು:

ಶಾಸಕ ಅಭಯ ಪಾಟೀಲ ಮಾತನಾಡಿ, ‘ಬೆಂಗಳೂರು ಹೊರತುಪಡಿಸಿ ಅತಿ ಹೆಚ್ಚು ರಫ್ತು ಮಾಡುವಂತಹ ಸ್ಥಳ ಬೆಳಗಾವಿ. ಹೀಗಾಗಿ, ಇಲ್ಲಿನ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸರ್ಕಾರಗಳು ಹೆಚ್ಚಿನ ನೆರವು ನೀಡಬೇಕು’ ಎಂದು ಕೋರಿದರು.

‘ಉದ್ಯಮಬಾಗ್‌ ಕೈಗಾರಿಕಾ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿ ಸಮಗ್ರ ಬೆಳವಣಿಗೆಗೆ ಮುಂದಾಗಬೇಕು. ಮಹಾರಾಷ್ಟ್ರ ಮಾದರಿಯಲ್ಲಿ ಹೆಚ್ಚಿನ ಸಬ್ಸಿಡಿ ನೀಡಬೇಕು’ ಎಂದು ಒತ್ತಾಯಿಸಿ ಉದ್ಯಮಿಗಳು ಸಚಿವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಜಿಲ್ಲಾ ಕೈಗಾರಿಕಾ ಸಂಸ್ಥೆಯ ಜಂಟಿ ನಿರ್ದೇಶಕ ದೊಡ್ಡಬಸವರಾಜ ಇದ್ದರು.

ಬೆಳಗಾವಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶ್ರೀಧರ ಉಪ್ಪಿನ ಪ್ರಾಸ್ತಾವಿಕ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT