ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ಪ್ರದೇಶಗಳ ಸಮಗ್ರ ಅಧ್ಯಯನ

ಬೆಳಗಾವಿ ವಿಭಾಗದ ಕೈಗಾರಿಕಾ ಅದಾಲತ್‌ನಲ್ಲಿ ನಿರಾಣಿ
Last Updated 8 ಏಪ್ರಿಲ್ 2022, 12:39 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯದ ಎಲ್ಲ 188 ಕೈಗಾರಿಕಾ ಪ್ರದೇಶಗಳ ಕುರಿತು ಸಮಗ್ರ ಸಮೀಕ್ಷೆ ನಡೆಸಲಾಗುತ್ತಿದ್ದು, ಅಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಭರವಸೆ ನೀಡಿದರು.

ಬೆಳಗಾವಿ ಕಂದಾಯ ವಿಭಾಗದ 7 ಜಿಲ್ಲೆಗಳ ಕೈಗಾರಿಕೋದ್ಯಮಿಗಳ ಸಮಸ್ಯೆ ಪರಿಹಾರಕ್ಕಾಗಿ ಇಲ್ಲಿನ ವಿಟಿಯು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕೈಗಾರಿಕಾ ಅದಾಲತ್‌ನ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಇಡೀ ರಾಜ್ಯದ ಕೈಗಾರಿಕಾ ಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ಜಾಲತಾಣದಲ್ಲಿ ಶೀಘ್ರದಲ್ಲೇ ಅಳವಡಿಸಲಾಗುವುದು. ಆ ಪ್ರದೇಶಗಳಲ್ಲಿ ರಸ್ತೆ, ನೀರು, ವಿದ್ಯುತ್ ದೀಪ ಮತ್ತಿತರ ಮೂಲಸೌಕರ್ಯವನ್ನು ಒದಗಿಸುವ ಜೊತೆಗೆ ಉದ್ಯಮದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಲಾಗುವುದು’ ಎಂದು ತಿಳಿಸಿದರು.

‘ಇಲಾಖೆಯಿಂದ ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಿಗೆ ಅಭಿವೃದ್ಧಿ ಆಧಾರದ ಮೇಲೆ ಶೇ.20ರವರೆಗೆ ಹೆಚ್ಚುವರಿ ಅಭಿವೃದ್ಧಿ ಶುಲ್ಕ ಆಕರಿಸಲಾಗುತ್ತಿದೆ. ವ್ಯತ್ಯಾಸದ ಶುಲ್ಕ ಪಾವತಿಸಲು ನೆರವು ಒದಗಿಸುವಂತೆ ಮುಖ್ಯಮಂತ್ರಿಯನ್ನು ಕೋರಲಾಗಿದೆ’ ಎಂದರು.

ಹಲವು ದೂರುಗಳು:

‘ಹುಬ್ಬಳ್ಳಿ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಹದಗೆಟ್ಟಿದ್ದು, ಕೂಡಲೇ ಸರಿಪಡಿಸಬೇಕು. ಸರ್ವಿಸ್ ರಸ್ತೆ ನಿರ್ಮಿಸಬೇಕು’ ಎಂದು ಅಲ್ಲಿನ ಕೈಗಾರಿಕೋದ್ಯಮಿಗಳು ಕೊರಿದರು.

ಪ್ರತಿಕ್ರಿಯಿಸಿದ ಸಚಿವರು, ‘ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.

‘ಕಿತ್ತೂರು ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಲಾರಿಗಳ ಸಂಚಾರಕ್ಕೆ ಅನುಕೂಲ ಆಗುವಂತೆ ದೊಡ್ಡ ರಸ್ತೆ ನಿರ್ಮಿಸಬೇಕು. ಅನೇಕ ಕೈಗಾರಿಕೆಗಳು ಆರಂಭಗೊಂಡಿರುವುದರಿಂದ ಉತ್ಪನ್ನಗಳ ಸಾಗಾಣಿಕೆಗೆ ತೊಂದರೆ ಆಗುತ್ತಿದೆ’ ಎಂದು ಉದ್ಯಮಿಗಳು ಹೇಳಿದರು.

‘ಬೆಳಗಾವಿ ಆಟೊನಗರದಲ್ಲಿ ಒಂದು ಕಡೆ ಹಿಂಡಾಲ್ಕೊ ಮತ್ತು ಇನ್ನೊಂದೆಡೆ ರಕ್ಷಣಾ ಇಲಾಖೆಯ ಜಾಗ ಇರುವುದರಿಂದ ಆಟೊನಗರ ಕೈಗಾರಿಕಾ ಪ್ರದೇಶ ಮತ್ತು ರಾಷ್ಟ್ರೀಯ ಹೆದ್ದಾರಿ ನಡುವೆ ಸಂಪರ್ಕ ರಸ್ತೆ ಇಲ್ಲದಿರುವುದರಿಂದ ಕಾರ್ಮಿಕರಿಗೆ ತೀವ್ರ ಅನಾನುಕೂಲ ಆಗುತ್ತಿದೆ. ಕೂಡಲೇ ಸಂಪರ್ಕ ರಸ್ತೆ ಮತ್ತು ಬೀದಿದೀಪ ವ್ಯವಸ್ಥೆ ಮಾಡಬೇಕು’ ಎಂದು ಅಲ್ಲಿನ ಉದ್ಯಮಿಗಳ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ರಸ್ತೆ ನಿರ್ಮಾಣಕ್ಕೆ ಯೋಜನೆ:

‘ಹೆದ್ದಾರಿ-ಆಟೊನಗರ ನಡುವೆ ಸಂಪರ್ಕ ರಸ್ತೆ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ’ ಎಂದು ಅಧಿಕಾರಿಗಳು ವಿವರಿಸಿದರು.

‘ಆಟೊನಗರದಲ್ಲಿ ಟ್ರಕ್ ಟರ್ಮಿನಲ್ ಜಾಗದಲ್ಲಿ ಕೆಲವು ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಲು ಮಾತ್ರ‌ ಒದಗಿಸುವಂತೆ ಆದೇಶವಾಗಿದೆ. ಆದ್ದರಿಂದ ಆ ಜಾಗವನ್ನು ಬೇರೆ ಉದ್ದೇಶಕ್ಕೆ ಒದಗಿಸುವುದು ಸಾಧ್ಯವಾಗುವುದಿಲ್ಲ’ ಎಂದು ಸಚಿವರು ಸ್ಪಷ್ಟಪಡಿಸಿದರು.

‘2007ರಲ್ಲಿ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ನಿವೇಶನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ಕೆ.ಜೆ.ಪಿ. ಆಗಿಲ್ಲ. ಇದರಿಂದ ಕೈಗಾರಿಕೋದ್ಯಮಿಗಳಿಗೆ ತೀವ್ರ ತೊಂದರೆಯಾಗುತ್ತಿದೆ’ ಎಂದು ಉದ್ಯಮಿಗಳು ಸಚಿವರ ಗಮನಸೆಳೆದರು.

‘ಈ ಬಗ್ಗೆ ಜಿಲ್ಲಾಧಿಕಾರಿ ಹಂತದಲ್ಲಿ ಕ್ರಮಕ್ಕೆ ಸಲಹೆ ನೀಡಲಾಗುವುದು’ ಎಂದು ಸಚಿವರು ಹೇಳಿದರು.

ಅಧಿಕಾರಿಗಳು ಮತ್ತು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಯ ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT