ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ: ಗ್ರಾ.ಪಂ. ಅಧ್ಯಕ್ಷರು, ಪಿಡಿಒಗಳಿಗೆ ಈಶ್ವರಪ್ಪ

Last Updated 11 ಆಗಸ್ಟ್ 2021, 15:39 IST
ಅಕ್ಷರ ಗಾತ್ರ

ಬೆಳಗಾವಿ: ‘ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಪಿಡಿಒಗಳು ತಮ್ಮ ವ್ಯಾಪ್ತಿಯ ಗ್ರಾಮಗಳನ್ನು ಕುಟುಂಬದಂತೆ ಭಾವಿಸಿ, ಅವುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಅಬ್ದುಲ್ ನಜೀರ್‌ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ಇಲ್ಲಿನ ಗಾಂಧಿ ಭವನದಲ್ಲಿ ಬುಧವಾರ ಆಯೋಜಿಸಿದ್ದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಪಿಡಿಒಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅನಕ್ಷರಸ್ಥರಿಗೂ ಅವಕಾಶ ಕಲ್ಪಿಸಲಾಗಿದೆ. ಅವರು ಅಭಿವೃದ್ಧಿಗೆ ಶ್ರಮಿಸಬೇಕು ಹಾಗೂ ದೂರದೃಷ್ಟಿಯಿಂದ ಯೋಜನೆಗಳನ್ನು ರೂಪಿಸಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ಗೆಲುವು ಸಾಧಿಸಿದಂತೆಯೇ ಜನರ ನಂಬಿಕೆ‌ ಉಳಿಸಿಕೊಳ್ಳುವುದೂ ಬಹಳ ಮುಖ್ಯ. ಅರ್ಧ ದಿನವಾದರೂ ಜನರಿಗೆ ಕೆಲಸ ಮಾಡಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿಸಿ, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ. ಅದನ್ನು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ವ್ಯಾಪಿಸಿತ್ತು. ಗ್ರಾಮ ಪಂಚಾಯ್ತಿಗಳ ಕಾರ್ಯಪಡೆಗಳು ಸೋಂಕಿನ ಪರಿಸ್ಥಿತಿ ನಿರ್ವಹಿಸುವಲ್ಲಿ ಯಶಸ್ವಿಯಾಗಿವೆ. ಕೋವಿಡ್ ನಿರ್ವಹಿಸುವಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದ್ದು, ಜಗತ್ತಿನಲ್ಲಿಯೇ ನಮ್ಮ ದೇಶ ಮೊದಲ‌ ಸ್ಥಾನದಲ್ಲಿದೆ’ ಎಂದು ಹೇಳಿದರು.

‘ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯ್ತಿಗಳ ಸದಸ್ಯರಿಗೆ ವಿಧಾನಸಭಾ ಕ್ಷೇತ್ರವಾರು ತರಬೇತಿ ಕಾರ್ಯಕ್ರಮ ನಡೆಸಲಾಗುವುದು.

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ‘ಗ್ರಾಮದಲ್ಲಿ ನೈರ್ಮಲ್ಯ ಅತ್ಯಂತ ಮುಖ್ಯವಾಗಿದೆ. ಇದರೊಂದಿಗೆ ಅಭಿವೃದ್ಧಿಗೂ ಗಮನಹರಿಸಬೇಕು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ‘ಹಳ್ಳಿಗಳ ಅಭಿವೃದ್ಧಿಗಾಗಿ ಶ್ರಮಿಸುವ ಭಾಗ್ಯ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ದೊರೆತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ವಾಂಗೀಣ ಪ್ರಗತಿಗೆ ಕೈಜೋಡಿಸಬೇಕು’ ಎಂದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ‘ರಾಜ್ಯದಲ್ಲಿ ಹಂತ ಹಂತವಾಗಿ ಗ್ರಾಮ ಪಂಚಾಯ್ತಿಗಳನ್ನು ಮಾದರಿಯಾಗಿಸುವ ಗುರಿ ಇದೆ. ಮಹಿಳೆಯರು, ಮಕ್ಕಳು ಹಾಗೂ ಅಂಗವಿಕಲರಿಗಾಗಿ ಪಂಚಾಯ್ತಿಗಳಲ್ಲಿ ಪ್ರತ್ಯೇಕ ಬಜೆಟ್ ರೂಪಿಸಲು ಕ್ರಮ ವಹಿಸಲಾಗಿದೆ’ ಎಂದು ತಿಳಿಸಿದರು.

ಪರಿಸರ ಬರಹಗಾರ ಶಿವಾನಂದ ಕಳವೆ ಉಪನ್ಯಾಸ ನೀಡಿದರು. ಪ್ರಮೋದ್ ಹೆಗಡೆ ಅಧಿಕಾರ ವಿಕೇಂದ್ರೀಕರಣ ಕುರಿತು ಮಾತನಾಡಿದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ ಸಿದ್ಧಪಡಿಸಿದ ಗ್ರಾಮ ಚರಿತ್ರೆ ಕೋಶ ಬಿಡುಗಡೆ ಮಾಡಲಾಯಿತು.

ಜಿ.ಪಂ. ಸಿಇಒ ಎಚ್‌.ವಿ. ದರ್ಶನ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT