ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಭದ್ರತೆ: ಅತಿಥಿ ಉಪನ್ಯಾಸಕರ ಆಗ್ರಹ

ಕ್ರಮಕ್ಕೆ ಮುಖ್ಯಮಂತ್ರಿ ಮುಂದಾಗಲಿ: ಕಂಬಾರ
Last Updated 2 ಆಗಸ್ಟ್ 2021, 10:41 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ 10–15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜು ಕಂಬಾರ ಒತ್ತಾಯಿಸಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಕೆಲವರಿಗೆ ವಯೋಮಿತಿ ಮೀರಿದೆ. ನಿರಂತರವಾಗಿ ಕೆಲಸ ಮಾಡುತ್ತಿದ್ದರೂ ಅವರ ಬದುಕು ಚಿಂತಾಜನಕ ಸ್ಥಿತಿಯಲ್ಲಿದೆ’ ಎಂದು ತಿಳಿಸಿದರು.

‘ಕೋವಿಡ್–19 ಪರಿಣಾಮದಿಂದಾಗಿ ಆ ಕುಟುಂಬಗಳು ಬೀದಿಪಾಲಾಗುವ ದುಃಸ್ಥಿತಿ ಬಂದೊದಗಿದೆ. ಅನೇಕರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ಅವರನ್ನೇ ನಂಬಿದ್ದ ಕುಟುಂಬಗಳ ಸದಸ್ಯರು ಅತಂತ್ರವಾಗಿದ್ದಾರೆ’ ಎಂದು ಹೇಳಿದರು.

‘ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗಾಗಿ ಎರಡು ದಶಕಗಳಿಂದಲೂ ನಿರಂತರವಾಗಿ ಹೋರಾಟ ಮಾಡುತ್ತಾ ಬರಲಾಗಿದೆ. ಸಂಬಂಧಿಸಿದ ಮಂತ್ರಿಗಳಿಗೆ, ಅಧಿಕಾರಿಗಳಿಗೆ ನೂರಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವೂ ಆಗಿಲ್ಲ’ ಎಂದು ದೂರಿದರು.

‘ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ವೇಳೆಯೂ ತೀವ್ರ ಹೋರಾಟ ಮಾಡಲಾಗಿತ್ತು. ಆಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು, ‘ನಮ್ಮ ಸರ್ಕಾರ ಬಂದರೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲಾಗುವುದು’ ಎಂದು ಭರವಸೆ ಕೊಟ್ಟಿದ್ದರು. ಅದಾದ ನಂತರ ಬಿಜೆಪಿ ಸರ್ಕಾರ ಬಂತು. ಆದರೆ, ಯಡಿಯೂರಪ್ಪ ಅವರು ಭರವಸೆ ಈಡೇರಿಸಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತ್ವರಿತವಾಗಿ ಕ್ರಮ ವಹಿಸಬೇಕು. ಶೈಕ್ಷಣಿಕ ವರ್ಷದ ಮಾರ್ಚ್ ತಿಂಗಳಿನಿಂದ ಇದುವರೆಗೂ ಗೌರವಧನ ನೀಡಿಲ್ಲ. ತುರ್ತಾಗಿ ಬಿಡುಗಡೆ ಮಾಡಬೇಕು. ಅತಿಥಿ ಉಪನ್ಯಾಸಕರ ಸೇವೆಯನ್ನು ವರ್ಷದುದ್ದಕ್ಕೂ ಮುಂದುವರಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಲು ಕೊಡುಗೆ ನೀಡುವ ನಮಗೂ ಗೌರವದ ಬದುಕು ಸಿಗುವಂತೆ ಆರ್ಥಿಕವಾಗಿ ನೆರವಾಗಬೇಕು’ ಎಂದು ಆಗ್ರಹಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿಠ್ಠಲ ಮಾಳವದೆ, ನಿಂಗಪ್ಪ ಸಂಗ್ರೇಜಿಕೊಪ್ಪ, ಖಜಾಂಚಿ ಅಡಿವೆಪ್ಪ ಬಿ. ಇಟಗಿ, ಸಂಘಟನಾ ಕಾರ್ಯದರ್ಶಿ ನೀಲಕಂಠ ಬೊಮ್ಮಣ್ಣವರ, ಸದಸ್ಯ ಕೆ.ಎನ್. ಕಾಂಬಳೆ, ಪ್ರಕಾಶ ಮಬನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT