ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿಯಲ್ಲಿ ಕುಸ್ತಿ: ಸತೀಶ ಜಾರಕಿಹೊಳಿ ವ್ಯಂಗ್ಯ

Last Updated 15 ಜೂನ್ 2021, 12:31 IST
ಅಕ್ಷರ ಗಾತ್ರ

ಬೆಳಗಾವಿ: ‘ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿಯಲ್ಲಿ ಕುಸ್ತಿ ಪ್ರಾರಂಭವಾಗಿದೆ. ಅ ಶಾಸಕರು ಪರ–ವಿರೋಧವಾಗಿ ಸಹಿ ಸಂಗ್ರಹ ಮಾಡುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಗಾದಿಯಲ್ಲಿ ಮುಂದುವರಿಯುವುದು ಕುಸ್ತಿಯ ಮೇಲೆ ಅವಲಂಬಿತವಾಗಿದೆ’ ಎಂದು ಯಮಕನಮರಡಿ ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈಗ ನಡೆದಿರುವ ಬೆಳವಣಿಗೆಗಳು ಆ ಪಕ್ಷದ ಆಂತರಿಕ ವಿಚಾರ. ಯಾರು ಏನು ವರದಿ ನೀಡುತ್ತಾರೋ, ಅವರ ವರಿಷ್ಠರು ಏನು ನಿರ್ಧಾರ ಮಾಡುತ್ತಾರೋ ಅವರಿಗೆ ಬಿಟ್ಟಿದ್ದು. ನಾವು ಎಲ್ಲವನ್ನೂ ಕಾದು ನೋಡುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಸೋಲಿನಿಂದ ನಾವು ಪಾಠ ಕಲಿತಿದ್ದು, ಪಕ್ಷವನ್ನು ಇನ್ನೂ ಯಾವ ರೀತಿ ಸಮರ್ಥವಾಗಿ ಸಂಘಟನೆ ಮಾಡಬೇಕು ಎಂಬ ಕುರಿತು ಸಿದ್ಧತೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.

‘ಅಶೋಕ ಪೂಜಾರಿ ಸೇರಿದಂತೆ ಹಲವು ಮುಖಂಡರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಲಾಕ್‌ಡೌನ್‌ ಮುಗಿದ ನಂತರ ತೀರ್ಮಾನಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.

‘ಕಾಂಗ್ರೆಸ್ ಪಕ್ಷವು ಹಿಂದಿನಿಂದಲೂ ಜನಪರ ಕೆಲಸ ಮಾಡುತ್ತಿದೆ. ಲಾಕ್‌ಡೌನ್ ವೇಳೆ ಬಡವರು, ಕಾರ್ಮಿಕರು, ರೈತರ‌ ಪರವಾಗಿ ನಿಂತಿದೆ. ಕೋವಿಡ್ 2ನೇ ಅಲೆಯಲ್ಲಿ ನಿರಂತರವಾಗಿ ಸರ್ಕಾರವನ್ನು ಎಚ್ಚರಿಸಿ ಲಸಿಕೆ, ಹಾಸಿಗೆ, ಆಮ್ಲಜನಕ ವ್ಯವಸ್ಥೆ ಮಾಡಿಸಿರುವ ಬಗ್ಗೆ ಹೆಮ್ಮೆ ಇದೆ’ ಎಂದರು.

‘ಎಲ್ಲರಿಗೂ ಉಚಿತ ಲಸಿಕೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಲೇ ಬಂದಿತ್ತು. ಇದರ ಪರಿಣಾಮವಾಗಿ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ನಿರ್ಧಾರವನ್ನು ಸರ್ಕಾರ ಮಾಡಿದೆ’ ಎಂದು ತಿಳಿಸಿದರು.

ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮನ್ನವರ, ಮುಖಂಡರಾದ ಸೈಫ್ ಶೇಠ್, ಕಾರ್ತಿಕ ಪಾಟೀಲ, ಸಿದ್ದಿಕ್ ಅಂಕಲಿಗಿ, ಇಮ್ರಾನ್ ತಬಕೀರ್, ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಮಾಳಗಿ ಉಪಸ್ಥಿತರಿದ್ದರು.

ಪ್ರಾಣಿಗಳನ್ನು ದತ್ತು ಪಡೆಯಬೇಕು
ಕೋವಿಡ್ ಲಾಕ್‌ಡೌನ್‌ನಿಂದಾಗಿ ಮೃಗಾಲಯಗಳ ನಿರ್ವಹಣೆಗೆ ಆರ್ಥಿಕ ತೊಂದರೆ ಎದುರಾಗಿದೆ. ಹೀಗಾಗಿ, ಉಳ್ಳವರು ಪ್ರಾಣಿಗಳನ್ನು ದತ್ತು ಪಡೆದು ಸಹಕರಿಸಬೇಕು. ಈ ನಿಟ್ಟಿನಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹುಲಿ ದತ್ತು ‍ಪಡೆದಿರುವುದು ಅಭಿನಂದನಾರ್ಹ
-ಸತೀಶ ಜಾರಕಿಹೊಳಿ, ಕಾರ್ಯಾಧ್ಯಕ್ಷ, ಕೆಪಿಸಿಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT