ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಉಸ್ತುವಾರಿ ಕಾರ್ಯದರ್ಶಿ ಅತೀಕ್ ಸಭೆ

Last Updated 27 ನವೆಂಬರ್ 2021, 12:40 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿ.13ರಿಂದ ನಿಗದಿಯಾಗಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ತಯಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು. ಶಿಷ್ಟಾಚಾರ ಪ್ರಕಾರ ವಸತಿ ಹಾಗೂ ವಾಹನ ವ್ಯವಸ್ಥೆ ಕಲ್ಪಿಸಬೇಕು’ ಎಂದರು.

ಭದ್ರತೆ ಒದಗಿಸಿ:

‘ಸುವರ್ಣ ಗಾರ್ಡನ್ ಮತ್ತಿತರ ಕಡೆಗಳಲ್ಲಿ ನಿಗದಿಪಡಿಸಲಾಗಿರುವ ಪ್ರತಿಭಟನಾ ಸ್ಥಳದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕುಡಿಯುವ ನೀರು, ಶೌಚಾಲಯ ಮತ್ತಿತರ ಸೌಕರ್ಯಗಳನ್ನು ಒದಗಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಪ್ರತಿಭಟನಾಕಾರರು ಹೆದ್ದಾರಿ ತಡೆದರೆ ಸಂಚಾರ ಅಸ್ತವ್ಯಸ್ತವಾಗುತ್ತದೆ. ಪೊಲೀಸರು ಮುಂಚಿತವಾಗಿ ಮಾಹಿತಿ ಸಂಗ್ರಹಿಸಿ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಸುವರ್ಣ ವಿಧಾನಸೌಧದಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಪರಿಶೀಲಿಸಬೇಕು. ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕು’ ಎಂದು ಸೂಚಿಸಿದರು.

ಇ–ಆಫೀಸ್ ಮಾಡಿ:

‘ಬೆಂಗಳೂರಿನ ವಿಧಾನಸೌಧದಲ್ಲಿ ಸಂಪೂರ್ಣ ಇ-ಆಫೀಸ್ ವ್ಯವಸ್ಥೆ ಜಾರಿಯಲ್ಲಿದೆ. ಅಧಿವೇಶನದವೇಳೆ ಸುವರ್ಣ ವಿಧಾನಸೌಧದಲ್ಲೂ ಇ-ಆಫೀಸ್ ಕಾರ್ಯನಿರ್ವಹಣೆಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಬೇಕು’ ಎಂದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್, ‘ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸಾರಿಗೆ, ವಸತಿ, ಊಟೋಪಹಾರ ಮೊದಲಾದವುಗಳಿಗೆ ಸಮಿತಿಗಳನ್ನು ರಚಿಸಲಾಗಿದೆ. ಈ ಬಾರಿ ದೂರು ನಿರ್ವಹಣಾ ಸಮಿತಿ ರಚಿಸಲಾಗಿದೆ. ಸಾರ್ವಜನಿಕರ ಅಹವಾಲು ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಪೊಲೀಸರಿಗೆ ಟೌನ್‌ಶಿಪ್‌:

‘ಅಧಿವೇಶನ ವೇಳೆ ಭದ್ರತೆ ಮತ್ತು ಸಂಚಾರ ನಿರ್ವಹಣೆಗಾಗಿ 5ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಅವರೆಲ್ಲರಿಗೂ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗುವುದು’ ಎಂದು ಡಿಸಿಪಿ ಪಿ.ವಿ. ಸ್ನೇಹಾ ವಿವರಿಸಿದರು.

‘ಸಿಬ್ಬಂದಿಗೆ 14 ಕಡೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ತಾತ್ಕಾಲಿಕ ಟೌನ್‌ಶಿಪ್‌ ಕೂಡ ನಿರ್ಮಿಸಲಾಗುತ್ತಿದೆ. ಅಲ್ಲೇ ಊಟೋಪಹಾರ, ವಸತಿ, ಶೌಚಾಲಯ ಮತ್ತಿತರ ಸೌಕರ್ಯ ಒದಗಿಸಲಾಗುತ್ತದೆ’ ಎಂದರು.

ಅಧಿವೇಶನದ ವಿಶೇಷ ಅಧಿಕಾರಿ ಡಾ.ಸುರೇಶ ಇಟ್ನಾಳ, ಆಹಾರ ಸಮಿತಿಯ ಉಸ್ತುವಾರಿ ಅಧಿಕಾರಿ ಶಶಿಧರ ಕುರೇರ, ವಸತಿ ಸಮಿತಿಯ ಉಸ್ತುವಾರಿ ಅಧಿಕಾರಿ ಡಾ.ರುದ್ರೇಶ್ ಘಾಳಿ ತಯಾರಿಯ ಮಾಹಿತಿ ನೀಡಿದರು.

ಜಿ.ಪಂ. ಸಿಇಒ ಎಚ್‌.ವಿ. ದರ್ಶನ್ ಎಚ್.ವಿ., ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಕ್ಯಾಳ, ಎಎಸ್ಪಿ ಅಮರನಾಥ್ ರೆಡ್ಡಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಗೀತಾ ಕೌಲಗಿ, ಬುಡಾ ಆಯುಕ್ತ ಪ್ರೀತಂ‌ ನಸಲಾಪುರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ‌ ನಿರ್ದೇಶಕ ಸಿ.ಬಿ. ಕೊಡ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT