ನಿಪ್ಪಾಣಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಉಪಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಭಾನುವಾರ, ನಿಪ್ಪಾಣಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡಿ ಆರನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಯಿತು.
ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸು ವಾಹನ ನಿಲ್ಲಿಸಲಾಯಿತು. ಟ್ರ್ಯಾಕ್ಟರ್‌ನಲ್ಲಿ ಹಾಕಿದ ವೇದಿಕೆಯಲ್ಲಿ ಶ್ರೀಗಳು ಇಷ್ಟಲಿಂಗ ಪೂಜೆ ಆರಂಭಿಸಿದರು. ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಹಲವರು ಇಷ್ಟಲಿಂಗ ಪೂಜೆ ಮಾಡಿದರು.
ಇದಕ್ಕೂ ಮುನ್ನ ನಗರದಲ್ಲಿ ಕಾರು ಹಾಗೂ ಬೈಕ್ ಜಾಥಾ ನಡೆಸಲಾಯಿತು. ಬಳಿಕ ಬಹಿರಂಗ ಸಭೆ ನಡೆಯಿತು. ಅಲ್ಲಿಂದ ಪಾದಯಾತ್ರೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನ ಸಮಾವೇಶಗೊಂಡರು.
ಈ ವೇಳೆ ಮಾತನಾಡಿದ ಸ್ವಾಮೀಜಿ, ‘2ಎ ಮೀಸಲಾತಿಗಾಗಿ ಮೂರು ದಶಕಗಳಿಂದ ಹೋರಾಟ ಮಾಡಿದರೂ ನ್ಯಾಯ ಸಿಕ್ಕಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ 2ಡಿ ಮೀಸಲಾತಿ ನೀಡಿದ್ದರೂ ನಾವು ಒಪ್ಪಿಕೊಂಡಿಲ್ಲ. ಕಾಂಗ್ರೆಸ್ ಸರ್ಕಾರ ರಚನೆ ಮಾಡುವಲ್ಲಿ ಪಂಚಮಸಾಲಿ ಸಮುದಾಯದ ದೊಡ್ಡ ಪಾಲು ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.
ಮನವಿ ಪಡೆದು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ‘ಮೀಸಲಾತಿ ವಿಚಾರದಲ್ಲಿ ಸಮಾಜ ಮತ್ತು ಸರ್ಕಾರದ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ಮಂಗಳವಾರ (ಸೆ.12) ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ. ಮೀಸಲಾತಿ ಅವಶ್ಯಕತೆ ಕುರಿತು ಮನವರಿಕೆ ಮಾಡುತ್ತೇನೆ’ ಎಂದರು.
ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ‘2ಡಿ ಮೀಸಲಾತಿ ಒಪ್ಪಿಕೊಳ್ಳದ ಸಮಾಜದವರು ಬಿಜೆಪಿಯಿಂದ ದೂರವಾಗಿದ್ದು, ಇದರ ಲಾಭ ಕಾಂಗ್ರೆಸ್‌ಗೆ ಆಗಿದೆ. ಕಾಂಗ್ರೆಸ್ ಸರ್ಕಾರ ಸಮಾಜದ ಋಣ ತೀರಿಸಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.