‘ಕಾಂಗ್ರೆಸ್‌ ಅಭ್ಯರ್ಥಿಗಳ ಉತ್ಸಾಹ ಕುಗ್ಗಿಸಲು ಐಟಿ ಬಳಕೆ’

ಶನಿವಾರ, ಏಪ್ರಿಲ್ 20, 2019
29 °C
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪ

‘ಕಾಂಗ್ರೆಸ್‌ ಅಭ್ಯರ್ಥಿಗಳ ಉತ್ಸಾಹ ಕುಗ್ಗಿಸಲು ಐಟಿ ಬಳಕೆ’

Published:
Updated:

ಬೆಳಗಾವಿ: ‘ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಉತ್ಸಾಹ ಕುಗ್ಗಿಸುವ ದುರುದ್ದೇಶದಿಂದ ಅವರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ (ಐಟಿ) ಇಲಾಖೆ ದಾಳಿ ನಡೆಸಲಾಗುತ್ತಿದೆ’ ಎಂದು ಕೆ‍ಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಆರೋಪಿಸಿದರು.

‌ಗುರುವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅಭ್ಯರ್ಥಿಗಳ ಕಚೇರಿಗಳು ಹಾಗೂ ಬೆಂಬಲಿಗರ ಮನೆಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.

‘ಸೋಲಿನ ಭೀತಿಯಿಂದಾಗಿ ಕರ್ನಾಟಕದಲ್ಲಷ್ಟೇ ಅಲ್ಲದೇ ಪಕ್ಷದ ಸಂಘಟನೆ ಬಲಿಷ್ಠವಾಗಿರುವ ರಾಜ್ಯಗಳಲ್ಲಿ ಐಟಿ ದಾಳಿ ಮಾಡಲಾಗುತ್ತಿದೆ’ ಎಂದರು.

‘ಬಿಜೆಪಿಯು ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ದೂರು ನೀಡಿರುವ ನಡುವೆಯೂ ಐಟಿ ದಾಳಿಗಳು ಹೆಚ್ಚಾಗುತ್ತಲೇ ಇವೆ. ಈ ಕುರಿತು ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.

‘ಬಿಜೆಪಿಯು ಚುನಾವಣೆಯನ್ನು ಗೆಲ್ಲಲು ಹಲವು ಕ್ಷೇತ್ರಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ವೆಚ್ಚ ಮಾಡುತ್ತಿದೆ. ಆದರೆ, ಆದಾಯ ತೆರಿಗೆ ಇಲಾಖೆ ಸೇರಿದಂತೆ ಸಂಬಂಧಿಸಿದ ಯಾವುದೇ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.

‘ಮಂಡ್ಯ, ಹಾಸನ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಸಂಶಯವಿಲ್ಲ’ ಎಂದರು.

‘ದೇಶದಲ್ಲಿ ಸದ್ಯದ ಪರಿಸ್ಥಿತಿ ನೋಡಿದರೆ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುತ್ತಿಲ್ಲ ಎಂಬ ಅನುಮಾನ ಮೂಡುತ್ತಿದೆ. ಈ ರೀತಿಯ ಚುನಾವಣೆ ಒಳ್ಳೆಯದಲ್ಲ. ಕೆಲವು ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಹೊಗಳುವಲ್ಲಿ ಮಾತ್ರವೇ ನಿರತವಾಗಿವೆ. ಇದು ಕೂಡ ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಶಾಸಕ ರಮೇಶ ಜಾರಕಿಹೊಳಿ ನಮ್ಮ ಸಂಪರ್ಕದಲ್ಲಿಲ್ಲ. ಚುನಾವಣೆ ಬಳಿಕ ಆ ಬಗ್ಗೆ ನೋಡೋಣ. ಅವರು ಯಾರ ಪರವಾಗಿ ಕೆಲಸ ಮಾಡುತ್ತಾರೆ ಎನ್ನುವುದನ್ನು ಆಧರಿಸಿ ಪಕ್ಷವು ಮುಂದಿನ ಕ್ರಮ ಕೈಗೊಳ್ಳಲಿದೆ’ ಎಂದರು.

ಬೆಂಗಳೂರಿನಲ್ಲಿ ತೇಜಸ್ವಿನಿ ಅನಂತಕುಮಾರ ಟಿಕೆಟ್ ಕೈ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಬಿ.ಎಸ್. ಯಡಿಯೂರಪ್ಪ, ಶಿವಕುಮಾರ ಉದಾಸಿ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸದೇ ಏಕೆ ಟಿಕೆಟ್ ನೀಡಲಾಗಿದೆ?’ ಎಂದು ಮಾರ್ಮಿಕವಾಗಿ ಕೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !