ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಿಂದ ಹಿಂದೆ ಬಿಟ್ಟು ಮುಂದೆ ಬಂದ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ ಕಿಡಿ

ಬಿಜೆಪಿ ವಿಜಯ ಸಂಕಲ್ಪ ಯಾತ್ರೆ
Last Updated 2 ಮಾರ್ಚ್ 2023, 16:18 IST
ಅಕ್ಷರ ಗಾತ್ರ

ನಂದಗಡ (ಖಾನಾಪುರ ತಾ.): ‘ಅಹಿಂದ ಸಾಮಾಜಿಕ ನ್ಯಾಯ ಎಂದು ಹೇಳುತ್ತ ಕಾಂಗ್ರೆಸ್ಸಿಗರು ಮುಂದೆ ಬಂದರು. ಆದರೆ, ಅಹಿಂದ ಸಮುದಾಯಗಳಿಗೆ ಮೋಸ ಮಾಡಿದರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ನಂದಗಡದಲ್ಲಿ ಗುರುವಾರ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ನ್ಯಾಯ ಕೇವಲ ಭಾಷಣದಿಂದ ಸಿಗುವುದಿಲ್ಲ. ಬಿಜೆಪಿ ಸರ್ಕಾರ ದಿಟ್ಟ ನಿಲುವಿನಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದೆ’ ಎಂದರು.

‘ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇಧಕ್ಕೆ ಸೇರಿಸಲು ಸೂಕ್ತ ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಇದು ನಮ್ಮ ಸರ್ಕಾರದ ಬದ್ಧತೆ’ ಎಂದು ಹೇಳಿದರು.

ಇದಕ್ಕೂ ಮುನ್ನ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರು, ‘ಯಡಿಯೂರಪ್ಪ ಅವರು ರಾಜ್ಯದ ಅತ್ಯುನ್ನತ ನಾಯಕ. ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ್ದೇವೆ. ಅವರ ಸೇವೆಯನ್ನು ಬಿಜೆಪಿ ಮರೆಯುವುದಿಲ್ಲ’ ಎಂದರು.

‘ಕೇಂದ್ರ ಸರ್ಕಾರ 9 ವರ್ಷದಲ್ಲಿ 3.5 ಲಕ್ಷ ಕಿ.ಮೀ ರಸ್ತೆಯನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಅಡಿ ಮತ್ತು 80 ಸಾವಿರ ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಭಿವೃದ್ಧಿ ಮಾಡಲಾಗಿದೆ. ಮುಂಬೈ, ಚೆನ್ನೈ ಮತ್ತು ಹೈದರಾಬಾದ್‌ಗಳಿಂದ ಬೆಂಗಳೂರುವರೆಗೆ ಕೈಗಾರಿಕಾ ಕಾರಿಡಾರ್ ಮಾಡಿ, ನಿರುದ್ಯೋಗ ಸಮಸ್ಯೆಗೆ ಪರಿಹಾರ ಒದಗಿಸುವುದು ಪ್ರಧಾನಿ ಮೋದಿಯವರ ಸಂಕಲ್ಪ’ ಎಂದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಮಾತನಾಡಿದರು.

ರಾಜನಾಥ್ ಸಿಂಗ್ ಡೊಳ್ಳು ಬಾರಿಸುವ ಮೂಲಕ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು. ಸಂಗೊಳ್ಳಿ ರಾಯಣ್ಣನ ಸಮಾಧಿಗೆ ಭೇಟಿ ನೀಡಿ ರಾಯಣ್ಣನ ಪುತ್ಥಳಿಗೆ ಗೌರವಾರ್ಪಣೆ ಸಲ್ಲಿಸಿದರು. ಸಚಿವರಾದ ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಶಿವರಾಮ್ ಹೆಬ್ಬಾರ, ಶಶಿಕಲಾ ಜೊಲ್ಲೆ, ಭೈರತಿ ಬಸವರಾಜ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಮಹೇಶ ಕುಮ್ಮಠಳ್ಳಿ, ಅಭಯ ಪಾಟೀಲ, ಅನಿಲ್ ಬೆನಕೆ, ಲಕ್ಷ್ಮಣ ಸವದಿ ಸೇರಿದಂತೆ ಹಲವು ಮುಖಂಡರು ಇದ್ದರು.

‘12 ಸಾವಿರ ಮರಾಠ ಮಕ್ಕಳಿಗೆ ಶಿಷ್ಯವೇತನ’
‘ಕೋವಿಡ್ ನಂತರವೂ ಕರ್ನಾಟಕದ ತಲಾವಾರು ಆದಾಯ ₹3.54 ಲಕ್ಷಕ್ಕೆ ಏರಿಕೆಯಾಗಿದೆ. ಮರಾಠ ನಿಗಮಕ್ಕೆ ₹100 ಕೋಟಿ ಅನುದಾನ ನೀಡಿ, ಮರಾಠ ಜನರ ಶಿಕ್ಷಣ, ಗಂಗಾಕಲ್ಯಾಣ ಉದ್ಯೋಗಕ್ಕೆ ಬಲ ನೀಡಲಾಗುತ್ತಿದೆ. ಬೆಳಗಾವಿಯಲ್ಲಿ 12 ಸಾವಿರ ಮರಾಠ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆಗಳನ್ನು ಜನರಿಗೆ ತಲುಪಿಸಲಾಗಿದೆ. ರಾಜ್ಯ ಸರ್ಕಾರ ರೈತ ಮಕ್ಕಳಿಗೆ, ರೈತ ಕೂಲಿಕಾರರ, ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ’ ಎಂದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT