ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ: ಕರೋಶಿಗೆ ‘ಗಾಂಧಿ ಗ್ರಾಮ’ ಪುರಸ್ಕಾರ

ಮೂಲಸೌಲಭ್ಯ ಅಭಿವೃದ್ಧಿಯಿಂದ ಗಮನಸೆಳೆದ ಗ್ರಾಮ
Last Updated 30 ಸೆಪ್ಟೆಂಬರ್ 2019, 19:31 IST
ಅಕ್ಷರ ಗಾತ್ರ

ಚಿಕ್ಕೋಡಿ: ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜೊತೆಗೆ ಗ್ರಾಮದ ಸಮಗ್ರ ಅಭಿವೃದ್ಧಿ ಸಾಧಿಸಿದ ಗ್ರಾಮಗಳಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಪ್ರಯುಕ್ತ ನೀಡಲಾಗುವ ಪ್ರಸಕ್ತ ವರ್ಷದ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ತಾಲ್ಲೂಕಿನ ಕರೋಶಿ ಗ್ರಾಮ ಪಂಚಾಯ್ತಿ ಆಯ್ಕೆಯಾಗಿದೆ. ಅ.2ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ರಾಯಬಾಗ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕರೋಶಿ ಚಿಕ್ಕೋಡಿ ಪಟ್ಟಣದಿಂದ ದಕ್ಷಿಣಕ್ಕೆ 7 ಕಿ.ಮೀ. ದೂರದಲ್ಲಿದೆ. ಗ್ರಾಮವು 1,631 ಕುಟುಂಬಗಳು ಮತ್ತು 10ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. 8 ವಾರ್ಡ್‌ಗಳಿವೆ. 22 ಜನ ಗ್ರಾಮ ಪಂಚಾಯ್ತಿ ಸದಸ್ಯರಿದ್ದಾರೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಗ್ರಾಮ ವ್ಯಾಪ್ತಿಯಲ್ಲಿ 1,321 ವೈಯುಕ್ತಿಕ ಶೌಚಾಲಯಗಳನ್ನು ನಿರ್ಮಿಸಿ ಶೇ.100ರಷ್ಟು ಗುರಿ ಸಾಧಿಸಲಾಗಿದೆ.

14ನೇ ಹಣಕಾಸು ಯೋಜನೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ, ಚರಂಡಿ, ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ವ್ಯವಸ್ಥೆ, ಬೀದಿ ದೀಪ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ನಾಲ್ಕು ಶುದ್ಧ ಕುಡಿಯುವ ನೀರು ಘಟಕಗಳನ್ನು ಅಳವಡಿಸಲಾಗಿದೆ.

ಉತ್ತಮ ಕಟ್ಟಡ:₹ 65 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಕಟ್ಟಡ (ರಾಜೀವ್‌ಗಾಂಧಿ ಸೇವಾ ಕೇಂದ್ರ) ನಿರ್ಮಿಸಲಾಗಿದೆ. ಸಭಾಂಗಣ, ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರತ್ಯೇಕ ಕೊಠಡಿಗಳಿವೆ. ಶೇ.80ರಷ್ಟು ಆಡಳಿತಾತ್ಮಕ ಕಾರ್ಯಗಳನ್ನು ಗಣಕೀಕರಣಗೊಳಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ, ಪ್ರೊಜೆಕ್ಟರ್‌ ಹಾಗೂ ವೈಫೈ ಸೌಲಭ್ಯವಿದೆ. ಗ್ರಾಮ ಪಂಚಾಯ್ತಿ ಕಟ್ಟಡವು 2 ಅಂತಸ್ತು ಹೊಂದಿದ್ದು, ಗ್ರಾಮಸ್ಥರಿಗೆ ಒಂದೇ ಸೂರಿನಡಿ ಅಗತ್ಯ ಸೇವೆಗಳು ದೊರಕಲಿ ಎಂಬ ಉದ್ದೇಶದಿಂದ ನೆಲ ಮಹಡಿಯಲ್ಲಿ ಅಂಚೆ ಕಚೇರಿ, ಗ್ರಾಮ ಲೆಕ್ಕಾಧಿಕಾರಿ ಕಚೇರಿ, ಗ್ರಾಮ ಸೇವಕ ಕಚೇರಿ, ವ್ಯಾಯಾಮ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಸ್ಥಳಾವಕಾಶ ನೀಡಲಾಗಿದೆ.

‘ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಡಿ.ಎಂ. ಐಹೊಳೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಅಗತ್ಯ ಅನುದಾನ ನೀಡುವ ಜೊತೆಗೆ ಯೋಜನೆಗಳ ಮಂಜೂರಾತಿಗೆ ಸಹಕರಿಸಿದ್ದಾರೆ. ಮುಂಬರುವ ವರ್ಷಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಗ್ರಾಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು’ ಎಂದು ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ಭಾತೆ ತಿಳಿಸಿದರು.

ಸೌರಶಕ್ತಿ ಬಳಕೆ ಉದ್ದೇಶ:‘ಶೀಘ್ರದಲ್ಲಿಯೇ ಪಂಚಾಯ್ತಿ ಕಟ್ಟಡದ ಮೇಲೆ ಸೋಲಾರ್ ಘಟಕ ಅಳವಡಿಸಿ ವಿದ್ಯುತ್ ಸ್ವಾವಲಂಬನೆ ಸಾಧಿಸುವುದು, ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮತ್ತು ಘಂಟಾ ಗಾಡಿಗಳ ಮೂಲಕ ತ್ಯಾಜ್ಯ ಸಂಗ್ರಹಣಾ ವ್ಯವಸ್ಥೆಯನ್ನೂ ಮಾಡಲು ಉದ್ದೇಶಿಸಲಾಗಿದೆ. ಕಳೆದ ವರ್ಷ ಮೂರು ಅಂಕಗಳ ಕೊರತೆಯಿಂದ ಗಾಂಧಿ ಗ್ರಾಮ ಪುರಸ್ಕಾರದಿಂದ ಕರೋಶಿ ಗ್ರಾಮ ಪಂಚಾಯ್ತಿ ವಂಚಿತವಾಗಿತ್ತು. ಪ್ರಸಕ್ತ ವರ್ಷ ಪಂಚಾಯ್ತಿಯ ಎಲ್ಲ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಗ್ರಾಮವನ್ನು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಪುರಸ್ಕಾರಕ್ಕೆ ಭಾಜನವಾಗಿದೆ. ಇದು ಸಂತಸ ತಂದಿದೆ' ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಂಜಯ ಕಾಂಬಳೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT