ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಕಿದ್ವಾಯಿ ಸಂಸ್ಥೆಯ ನಿರ್ದೇಶಕ

Last Updated 1 ಏಪ್ರಿಲ್ 2022, 9:49 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿನ ವಡಗಾವಿಯಲ್ಲಿರುವ ನಗರ ಆರೋಗ್ಯ ಕೇಂದ್ರದ ಬಳಿ ಆರೋಗ್ಯ ಇಲಾಖೆಗೆ ಸೇರಿದ 4 ಎಕರೆ ಜಾಗದಲ್ಲಿ ₹ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಪ್ರಾದೇಶಿಕ ಸಂಸ್ಥೆ ಸ್ಥಾಪಿಸಲು ನಿರ್ಧರಿಸಲಾಗಿದೆ’ ಎಂದು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ. ರಾಮಚಂದ್ರ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಆಸ್ಪತ್ರೆ ಸ್ಥಾಪನೆ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಸ್ಥಳ ಪರಿಶೀಲನೆ ನಡೆಸಿ, ಪ್ರಶಸ್ತವಾದ ಸ್ಥಳ ಆಯ್ಕೆ ಮಾಡಲಾಗಿದೆ. ಜಾಗವು ಸರ್ಕಾರದ್ದೇ ಆಗಿರುವುದರಿಂದ ಪಡೆದುಕೊಳ್ಳುವುದಕ್ಕೆ ತೊಂದರೆ ಆಗುವುದಿಲ್ಲ’ ಎಂದು ಹೇಳಿದರು.

‘ತುಮಕೂರು, ಶಿವಮೊಗ್ಗ, ಮೈಸೂರಿನಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಗೆ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಮುತುವರ್ಜಿಯಿಂದ ಮುಖ್ಯಮಂತ್ರಿ ಅವರು ಕ್ಯಾನ್ಸರ್ ಸಂಸ್ಥೆ ಮಂಜೂರು ಮಾಡಿದ್ದಾರೆ. ಮುಂದಿನ ತಿಂಗಳು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಂದಿನ 2 ವರ್ಷಗಳ ಅವಧಿಯಲ್ಲಿ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ’ ಎಂದು ಮಾಹಿತಿ ನೀಡಿದರು.

ಎಲ್ಲ ಚಿಕಿತ್ಸೆಯೂ ಲಭ್ಯ:

‘ಬೆಳಗಾವಿಯಲ್ಲಿ ಸದ್ಯಕ್ಕೆ 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲು ಉದ್ಧೇಶಿಸಲಾಗಿದೆ. ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಕಿದ್ವಾಯಿ ಕ್ಯಾನ್ಸರ್ ಕೇಂದ್ರದ ಮಾದರಿಯಲ್ಲಿ ಪ್ರತಿ ಚಿಕಿತ್ಸೆಯೂ ಇಲ್ಲಿ ಲಭ್ಯವಾಗಲಿದೆ. ಎಲ್ಲ ಬಗೆಯ ವಿಭಾಗಗಳನ್ನೂ ಆರಂಭಿಸಲಾಗುವುದು. ಇದಲ್ಲದೇ ಸಂಶೋಧನಾ ಕೇಂದ್ರ ಕೂಡ ಆರಂಭವಾಗಲಿದೆ. ಮುಂಬರುವ ದಿನಗಳಲ್ಲಿ ಆಸ್ಪತ್ರೆ ವಿಸ್ತರಣೆಗೆ ಅನುಕೂಲವಾಗುವಂತೆ ಜಾಗವನ್ನು ಗುರುತಿಸಲಾಗಿದೆ. ಬೋಧನಾ ಆಸ್ಪತ್ರೆಯಾಗಿಯೂ ಇದು ಕಾರ್ಯನಿರ್ವಹಿಸಲಿದೆ’ ಎಂದರು.

‘ಕ್ಯಾನ್ಸರ್ ರೋಗ ದಿನೆ ದಿನೇ ಹೆಚ್ಚಾಗಿ ಕಂಡುಬರುತ್ತಿದೆ. ಆದ್ದರಿಂದ ಈ ಭಾಗದಲ್ಲಿ ಚಿಕಿತ್ಸೆಗೆ ಆಸ್ಪತ್ರೆ ಸ್ಥಾಪಿಸುವುದು ಅತ್ಯಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಆದ್ದರಿಂದ ಸುಸಜ್ಕಿತ ಮೊಬೈಲ್ ಘಟಕದ ಮೂಲಕ ಕ್ಯಾನ್ಸರ್ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನೂ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

7 ಜಿಲ್ಲೆಗಳ ಜನರಿಗೆ ಅನುಕೂಲ:

ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ‘ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ ಆರಂಭದಿಂದ ಸುತ್ತಮುತ್ತಲಿನ 7 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಗಡಿ ಜಿಲ್ಲೆಯಾದ್ದರಿಂದ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಜನರಿಗೂ ಇದರಿಂದ ಪ್ರಯೋಜನ ಆಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಆಸ್ಪತ್ರೆ ನಿರ್ಮಾಣಕ್ಕೆ ಸದ್ಯ ₹ 50 ಕೋಟಿ ಇಡಲಾಗಿದೆ. ಒಟ್ಟು ₹ 130 ಕೋಟಿ ಬೇಕಾಗುತ್ತದೆ. ಕಾಮಗಾರಿ ಆರಂಭಗೊಂಡ ಬಳಿಕ ಯಾವುದೇ ರೀತಿಯ ಅನುದಾನ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಬೆಳಗಾವಿಯಲ್ಲಿ ಆರೋಗ್ಯ ಕ್ಷೇತ್ರದ ಬಲವರ್ಧನೆಗಾಗಿ ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ. ಆರೋಗ್ಯ ಕ್ಷೇತ್ರದ ಬೆಳವಣಿಗೆಯಿಂದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ಅನುಕೂಲ ಆಗಲಿದೆ’ ಎಂದರು.

‘ಮುಂದಿನ ದಿನಗಳಲ್ಲಿ ನಗರದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನೂ ಆರಂಭಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ‌.ಜಿ. ಹಿರೇಮಠ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT