ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಪ್ರಕರಣದಲ್ಲಿ ಅಸಾರಾಂ ಬಾಪು ದೋಷಿ: ಜೋಧಪುರ ನ್ಯಾಯಾಲಯ ತೀರ್ಪು

Last Updated 25 ಏಪ್ರಿಲ್ 2018, 5:54 IST
ಅಕ್ಷರ ಗಾತ್ರ

ಜೋಧಪುರ: ಐದು ವರ್ಷ ಹಿಂದಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಸಾರಾಂ ಬಾಪು ಮತ್ತು ಇಬ್ಬರು ಸಹಚರರನ್ನು ದೋಷಿಗಳು ಎಂದು ಇಲ್ಲಿನ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟವಾಗಬೇಕಿದೆ.

ಆರೋಪಿಗಳಾದ ಅಸಾರಾಂ ಬಾಪು, ಶಿಲ್ಪಿ ಮತ್ತು ಶರದ್‌ ತಪ್ಪಿತಸ್ಥರು ಎಂದು ತೀರ್ಪು ನೀಡಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ಶಿವ ಮತ್ತು ಪ್ರಕಾಶ್‌ರನ್ನು ಖುಲಾಸೆಗೊಳಿಸಲಾಗಿದೆ.

ಪ್ರಕರಣದ ಹಿನ್ನೆಲೆ: 2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ದೂರು ನೀಡಿದ್ದಳು. ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. 2013ರ ಸೆಪ್ಟೆಂಬರ್ 2ರಿಂದ ಅಸಾರಾಂ ನ್ಯಾಯಾಂಗ ವಶದಲ್ಲಿದ್ದಾರೆ.

ಅಸಾರಾಂ ಜತೆಗೆ ಶಿವ, ಶಿಲ್ಪಿ, ಶರದ್ ಹಾಗೂ ಪ್ರಕಾಶ್ ವಿರುದ್ಧ ಭಾರತೀಯ ದಂಡಸಂಹಿತೆ, ಪೋಕ್ಸೊ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 2013ರ ನವೆಂಬರ್‌ 6ರಂದು ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣಗಳ ಕುರಿತ ಅಂತಿಮ ವಿಚಾರಣೆಯನ್ನು ಏಪ್ರಿಲ್ 7ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ ಏಪ್ರಿಲ್ 25ಕ್ಕೆ ಆದೇಶ ಕಾಯ್ದಿರಿಸಿತ್ತು.

ತೀರ್ಪಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 378 ಮಂದಿಯನ್ನು ಜೋಧಪುರ ಪೊಲೀಸರು ಬಂಧಿಸಿದ್ದರು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂಬ ಅನುಮಾನ ಇರುವುದರಿಂದ ಇದೇ 30ರ ವರೆಗೆ ಜೋಧಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT