ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಿರಿ: ಸುರೇಶ ಅಂಗಡಿ

ಯುವಜನರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸಲಹೆ
Last Updated 12 ಜನವರಿ 2020, 11:32 IST
ಅಕ್ಷರ ಗಾತ್ರ

ಬೆಳಗಾವಿ: ‘ಯುವಜನರು ಉದ್ಯಮಗಳನ್ನು ಆರಂಭಿಸಿ, ಮತ್ತೊಬ್ಬರಿಗೆ ಉದ್ಯೋಗ ಕೊಡುವ ಮಟ್ಟಕ್ಕೆ ಬೆಳೆಯಬೇಕು. ಇದಕ್ಕಾಗಿ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾಲೇಜು ಶಿಕ್ಷಣ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ಸ್ವಾಮಿ‌ ವಿವೇಕಾನಂದರ ರಾಷ್ಟ್ರೀಯ ಯುವ ಸಪ್ತಾಹ ಮತ್ತು ಪದವಿ ಪ್ರಥಮ‌ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮ ಮತ್ತುಪ್ರಥಮ ದರ್ಜೆ ಮಹಿಳಾ ಸರ್ಕಾರಿ ಕಾಲೇಜಿನ ಯುವ ಸಬಲೀಕರಣ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಭಾರತದ ಯುವಕರೆಂದರೆ ಹಿಂದುಳಿದವರು, ಕೊಳೆಗೇರಿಗಳಲ್ಲಿ ವಾಸಿಸುವರು ಎಂದು ಅಮೆರಿಕದಲ್ಲಿ ಹಿಂದೆ ಮಾತನಾಡುತ್ತಿದ್ದರು. ಆದರೆ, ಈಗ ಆ ದೇಶದಲ್ಲಿರುವ ಶೇ 36ರಷ್ಟು ಎಂಜಿನಿಯರ್‌ಗಳು, ಶೇ 18ರಷ್ಟು ವೈದ್ಯರು ಭಾರತೀಯರಾಗಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ವಿದೇಶದವರು ನಮ್ಮನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿದೆ. ಹೀಗಾಗಿ, ಅವಕಾಶ ಹೆಚ್ಚಾಗಿವೆ’ ಎಂದರು.

ಶಿಕ್ಷಕರ ಜವಾಬ್ದಾರಿ:‘ಇಂದಿನ ತಾಂತ್ರಿಕ ಯುಗದಲ್ಲಿ ಶಿಕ್ಷಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು. ತಂತ್ರಜ್ಞಾನ ಅರಿಯಲೆಂದು ಸರ್ಕಾರವು ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುತ್ತಿವೆ. ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅನಿಲ ಬೆನಕೆ, ‘ಬಡತನದ ಕಾರಣದಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯಬಾರದು ಎಂದು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಬಳಸಿಕೊಂಡು ಮುಂದೆ ಬರಬೇಕು. ದೇಶದಲ್ಲಿ ಯುವಜನತೆ ಸಂಖ್ಯೆ ಜಾಸ್ತಿ ಇದೆ. ಹೀಗಾಗಿ, ಭಾರತವನ್ನು ವಿಶ್ವಗುರು ಮಾಡಲು ಪ್ರಧಾನಿ ಮುಂದಾಗಿದ್ದಾರೆ. ಯುವಕ, ಯುವತಿಯರು ಶಕ್ತಿಯನ್ನು ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳಬೇಕು. ಗುರಿ ತಲುಪುವವರೆಗೂ ಪ್ರಯತ್ನ ಬಿಡಬಾರದು. ಆಗ ಯಶಸ್ಸು ಸಿಗುತ್ತದೆ’ ಎಂದು ತಿಳಿಸಿದರು.

ಬಹುಮಾನ ವಿತರಣೆ:ನಗರದ ಕೋಟೆಯ ರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ಮೋಕ್ಷಾತ್ಮಾನಂದ ಸ್ವಾಮಿ ವಿವೇಕಾನಂದರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಲಾಯಿತು. ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

ಪದವಿಯ ಎಲ್ಲ ವರ್ಷದ ವಿದ್ಯಾರ್ಥಿಗಳಿಗೂ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸಬೇಕು ಎಂದು ವಿದ್ಯಾರ್ಥಿಗಳು ಗಣ್ಯರನ್ನು ಒತ್ತಾಯಿಸಿದರು.

ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ಗುಡಗುಂಟಿ, ಪಾಲಿಕೆ ಉಪ ಆಯುಕ್ತ ದೊಡಗೌಡ, ಮಹಿಳಾ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ ಪ್ರಾಚಾರ್ಯ ಪ್ರೊ.ಸಿ. ಈಶ್ವರಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT