ಬೆಳಗಾವಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧವೂ ಪ್ರಕರಣಗಳಿವೆ. ಮರ್ಯಾದೆ ಇದ್ದರೆ, ಅವರ ರಾಜೀನಾಮೆ ಕೇಳಿ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
‘ಚುನಾವಣಾ ಬಾಂಡ್‌ನ ₹6,000 ಕೋಟಿ ಹಗರಣದಲ್ಲಿ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದೆ. ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿ, ಕೇಂದ್ರ ಸಚಿವರ ರಾಜೀನಾಮೆ ಪಡೆಯಬೇಕು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
‘ಬಿಜೆಪಿಯೇತರ ರಾಜ್ಯಗಳಲ್ಲಿ ಸರ್ಕಾರಗಳನ್ನು ಬೀಳಿಸಲು ರಾಜಭವನ ಬಳಸಿಕೊಳ್ಳಲಾಗುತ್ತಿದೆ. ಇದರ ವಿರುದ್ಧ ನಾವೂ ಕಾನೂನು ರೀತಿಯಲ್ಲೇ ಉತ್ತರಿಸುತ್ತೇವೆ’ ಎಂದರು.
ರಾಜೀನಾಮೆ ನೀಡಿ ಇಲ್ಲದಿದ್ದರೆ ಸಿಬಿಐಗೆ ತನಿಖೆ ಒಪ್ಪಿಸಿ’
ಹುಬ್ಬಳ್ಳಿ: ‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಇಲ್ಲದಿದ್ದರೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಿ. ಇಲ್ಲಿನ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ಮಾಡಲ್ಲ. ಸತ್ಯ ಹೊರಗೆ ಬರಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ‘ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ಬಿಜೆಪಿ ಹೋರಾಟ ಮುಂದುವರಿಯಲಿದೆ. ಚುನಾವಣಾ ಬಾಂಡ್ ಗೋಧ್ರಾ ಸೇರಿ ಬೇರೆ ಬೇರೆ ಪ್ರಕರಣಗಳನ್ನು ಎಳೆದುತಂದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆ ಪ್ರಕರಣಗಳಿಗೂ ಮುಡಾ ಪ್ರಕರಣಕ್ಕೂ ಸಂಬಂಧವೇ ಇಲ್ಲ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು. ‘2011ರಲ್ಲಿ ಗೋಧ್ರಾ ಘಟನೆ ನಡೆದಾಗ ಸಿದ್ದರಾಮಯ್ಯ ಏಕೆ ಮೋದಿ ಅವರ ವಿರುದ್ಧ ಧ್ವನಿ ಎತ್ತಲಿಲ್ಲ? ಆಗ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಆ ಪ್ರಕರಣದಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿತ್ತು’ ಎಂದು ಅವರು ಆರೋಪಿಸಿದರು. ‘ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣ 2008ರದ್ದು. 2013ರಿಂದ 2018ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದರು. ಆಗ ಯಾಕೆ ತನಿಖೆಗೆ ಒತ್ತಾಯಿಸಲಿಲ್ಲ? 2018ರಿಂದ 2019 ಮಧ್ಯಭಾಗದವರೆಗೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಯಾರು?’ ಎಂದು ಅವರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.