ಬೆಳಗಾವಿ: ‘ಇಡೀ ರಾಜ್ಯದಲ್ಲಿ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿರುವ ಸಿದ್ದರಾಮಯ್ಯ ಅವರಿಗೆ ಇನ್ನೂ ಕ್ಷೇತ್ರವೇ ಸಿಕ್ಕಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರು 224 ಕ್ಷೇತ್ರಗಳಿಂದಲೂ ಸ್ಪರ್ಧಿಸಲಿ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಿದ್ದಾರೆ. ಅಪ್ಪನಿಗಾಗಿ ಮಗ ದೊಡ್ಡ ತ್ಯಾಗ ಮಾಡಿದ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ವರುಣಾದಲ್ಲಿ ಸೋಲುತ್ತೇನೆ ಎನ್ನುವ ಭಯದಿಂದಾಗಿ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ’ ಎಂದು ಟೀಕಿಸಿದರು.
‘ಕಾಂಗ್ರೆಸ್ ರೀತಿ ನಮ್ಮದು ಪರಿವಾರದ ಪಕ್ಷವಲ್ಲ. ಡೆಮಾಕ್ರೆಟಿಕ್ ಪಕ್ಷವಾದ ನಮ್ಮಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಸೂಕ್ತ ಅಭ್ಯರ್ಥಿಗೆ ಟಿಕೆಟ್ ಕೊಡುತ್ತೇವೆ. ಅದಕ್ಕಾಗಿಯೇ ಇಂದು ಅಭಿಪ್ರಾಯ ಸಂಗ್ರಹ ಸಭೆ ನಡೆಸುತ್ತಿದ್ದೇವೆ’ ಎಂದು ಹೇಳಿದರು.
ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಬಿಜೆಪಿ ಶಾಸಕರಿಗೆ ಡಿ.ಕೆ.ಶಿವಕುಮಾರ್ ಕರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ‘ಕಾಂಗ್ರೆಸ್‌ನವರು ಈಗ ಭ್ರಮನಿರಸಗೊಂಡಿದ್ದಾರೆ. ದೇಶದಲ್ಲೇ ಕಾಂಗ್ರೆಸ್ ತಿರಸ್ಕೃತ ಪಕ್ಷವಾಗಿದ್ದು, ಕರ್ನಾಟಕದ ಜತೆಗೆ ವಿವಿಧ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಲ್ಲೂ ಸೋಲು ಕಾಣಲಿದೆ’ ಎಂದರು.
ಟಿಕೆಟ್ ವಿಚಾರವಾಗಿ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮಣ ಸವದಿ ಬಹಿರಂಗ ಹೇಳಿಕೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅವರಿಬ್ಬರಿಗೂ ಬಹಿರಂಗವಾಗಿ ಮಾತನಾಡದಂತೆ ಈಗಾಗಲೇ ತಾಕೀತು ಮಾಡಿದ್ದೇವೆ. ಎಲ್ಲ ಬೆಳವಣಿಗೆ ಗಮನಿಸುತ್ತಿದ್ದು, ಎಲ್ಲವನ್ನೂ ಸರಿ ಮಾಡುತ್ತೇವೆ. ಬೆಳಗಾವಿಯಲ್ಲಿ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.