ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನಸಿ, ತರಕಾರಿ ಸಮರ್ಪಕವಾಗಿ ಸಿಗುವಂತೆ ನೋಡಿಕೊಳ್ಳಿ: ಸಚಿವ ಜಗದೀಶ ಶೆಟ್ಟರ್

ಬೆಳಗಾವಿಯಲ್ಲಿ ಕೋವಿಡ್- 19 ನಿಯಂತ್ರಣ ಸಭೆ
Last Updated 26 ಮಾರ್ಚ್ 2020, 11:52 IST
ಅಕ್ಷರ ಗಾತ್ರ

ಬೆಳಗಾವಿ: ‘ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಗುರುವಾರ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಜತೆ ಮಾತನಾಡಿದ್ದೇನೆ. ಆದಷ್ಟು ಬೇಗನೇ ಆರಂಭಿಸುವುದಾಗಿ ಅವರು ತಿಳಿಸಿದ್ದಾರೆ. ವೈದ್ಯರು, ಸಿಬ್ಬಂದಿ ಸೇರಿದಂತೆ ಅಗತ್ಯವಿರುವ ಸಲಕರಣೆಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಳ್ಳಬೇಕು. ತುರ್ತು ಸಾಮಗ್ರಿ ಆಥವಾ ಸಲಕರಣೆಗಳ ಅಗತ್ಯವಿದ್ದರೆ ತಕ್ಷಣವೇ ಸರ್ಕಾರಕ್ಕೆ ಪ್ರಸ್ತಾವ ಕಳಿಸಿಕೊಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ‘ಜಿಲ್ಲೆಯಲ್ಲಿ ತುರ್ತಾಗಿ ಪ್ರಯೋಗಾಲಯ ಆರಂಭಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದ್ದು, ಜನರು ಸಹಕರಿಸಬೇಕು’ ಎಂದು ಮನವಿ ಮಾಡಿಕೊಂಡರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ‘ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮುನ್ನೆಚ್ಚರಿಕೆ ಮೇರೆಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಅಂಗನವಾಡಿ ಮಕ್ಕಳಿಗೆ ಮನೆ ಮನೆಗೆ ಆಹಾರ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ’ ಎಂದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ‘ಸರಕು ಸಾಮಗ್ರಿಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ. ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ’ ಎಂದು
ತಿಳಿಸಿದರು.

ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಮಾತನಾಡಿ, ‘ನೆರೆಯ ರಾಜ್ಯ ಮತ್ತು ಬೆಂಗಳೂರಿನಿಂದ ನೂರಾರು ಸಂಖ್ಯೆಯ ಯುವಕರು ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಹೀಗೆ ಬರುವ ಜನರ ಮೇಲೆ ತೀವ್ರ ನಿಗಾ ವಹಿಸಬೇಕು’ ಎಂದರು.

ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ‘ಗ್ರಾಮೀಣ ಪ್ರದೇಶಗಳಲ್ಲಿ ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ವ್ಯಾಪಾರ-ವಹಿವಾಟುಗಳಿಗೆ ಅವಕಾಶ ಕಲ್ಪಿಸಬೇಕು’ ಎಂದು ಸಲಹೆ ನೀಡಿದರು.

‘ನಗರದಲ್ಲಿ ಜನಸಂಚಾರವನ್ನು ನಿಯಂತ್ರಿಸದಿದ್ದರೆ ಕಠಿಣ ಪರಿಸ್ಥಿತಿ ಎದುರಾಗಲಿದೆ’ ಎಂದು ಶಾಸಕ ಅಭಯ ಪಾಟೀಲ ಅಭಿಪ್ರಾಯಪಟ್ಟರು.

ವೆಂಟಿಲೇಟರ್ ಒದಗಿಸಲು ಮನವಿ

ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ‘ಕಾರ್ಖಾನೆಗಳಲ್ಲಿ ನೂರಾರು ಕಾರ್ಮಿಕರು ಒಂದೇ ಕಡೆ ಕೆಲಸ ಮಾಡುತ್ತಿರುವುದರಿಂದ ಪೊಲೀಸರು ಹಾಗೂ ಆಶಾ ಕಾರ್ಯಕರ್ತರು ಆಗಾಗ ಭೇಟಿ ನೀಡಿ ಸೂಕ್ತ ನಿಗಾ ವಹಿಸಬೇಕು. ಸರ್ಕಾರದಿಂದ ತುರ್ತು ಅನುದಾನ ಬಂದರೆ ತಾಲ್ಲೂಕು ಆಸ್ಪತ್ರೆಗಳಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

‘ಗೋವಾ ಹಾಗೂ ಮಹಾರಾಷ್ಟ್ರದಿಂದ ಆಗಮಿಸುವ ಜನರನ್ನು ಸಾಧ್ಯವಾದರೆ ಒಂದು ಕಡೆ ಕ್ವಾರಂಟೈನ್ ಮಾಡುವ ವ್ಯವಸ್ಥೆ ಮಾಡಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮನವಿ
ಮಾಡಿಕೊಂಡರು.

‘ಹೊರದೇಶಗಳಿಂದ ಬಂದಿರುವ 326 ಜನರ ಮೇಲೆ ನಿಗಾ ವಹಿಸಲಾಗಿದೆ. ಅವರ ಮನೆಯಲ್ಲಿಯೇ ಕ್ವಾರಂಟೈನ್ ಇರಿಸಲಾಗಿದೆ. ಹತ್ತು ಜನರ ಮಾದರಿ ಕಳಿಸಲಾಗಿದ್ದು, ಎಲ್ಲ ಮಾದರಿಯ ವರದಿ
ನೆಗೆಟಿವ್ ಬಂದಿವೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

‘ಸರ್ಕಾರದ ನಿರ್ದೇಶನದ ಮೇರೆಗೆ ಅಂತರರಾಜ್ಯ ಹಾಗೂ ಅಂತರ್ ಜಿಲ್ಲಾ ಗಡಿಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಪ್ರತ್ಯೇಕ ಕೋವಿಡ್ ಆಸ್ಪತ್ರೆ ಸ್ಥಾಪನೆಯ ಸಾಧ್ಯತೆಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ’ ಎಂದರು.

‘ಅಗತ್ಯ ವಸ್ತುಗಳ ಕೊರತೆಯಾಗದಂತೆ ಎಲ್ಲ ರೀತಿಯ ಸರಕು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಅವಶ್ಯಕತೆ ಇರುವ ಜನರಿಗೆ ಪಾಸ್‌ಗಳನ್ನು ಒದಗಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ ಕೋರೆ, ಶಾಸಕರಾದ ಮಹೇಶ ಕುಮಠಳ್ಳಿ, ಮಹಾಂತೇಶ ದೊಡಗೌಡ್ರ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT