ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಒಂದು ಟಿಎಂಸಿ ಅಡಿ ನೀರು ಬಿಡುಗಡೆಗೆ ನಿರ್ಧಾರ: ಲಕ್ಷ್ಮಿ ಹೆಬ್ಬಾಳಕರ

Published 4 ನವೆಂಬರ್ 2023, 14:29 IST
Last Updated 4 ನವೆಂಬರ್ 2023, 14:29 IST
ಅಕ್ಷರ ಗಾತ್ರ

ಬೆಳಗಾವಿ: ರೈತರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆ, ನರಗುಂದ ಶಾಖಾ ಕಾಲುವೆ ಹಾಗೂ ಶಿಂಗಾರಕೊಪ್ಪ ಏತ ನೀರಾವರಿ ಯೋಜನೆ ಕಾಲುವೆಗಳಿಗೆ ನವೆಂಬರ್ 7ರಿಂದ ಒಂದು ಟಿಎಂಸಿ ಅಡಿ ನೀರು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಲಪ್ರಭಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

ಮಲಪ್ರಭಾ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ‘ಈ ವರ್ಷ ಮಳೆ ಕೊರತೆಯಾಗಿರುವುದರಿಂದ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಿದೆ. ಮುಂದಿನ ದಿನಗಳಲ್ಲಿ ಬೆಳೆಗಳಿಗೆ ಮಾತ್ರವಲ್ಲದೆ, ಕುಡಿಯುವ ನೀರಿಗೂ ಸಮಸ್ಯೆಯಾಗುವ ಸಾಧ್ಯತೆ ಇದೆ. ಆದರೆ, ರೈತರ‌ ಹಿತದೃಷ್ಟಿಯಿಂದ ಕಾಲುವೆಗಳಿಗೆ ಒಂದು ಟಿಎಂಸಿ ಅಡಿ ನೀರು ಹರಿಸಲು ತೀರ್ಮಾನಿಸಿದ್ದೇವೆ’ ಎಂದರು.

‘ನೀರಾವರಿ ಹಿತಾಸಕ್ತಿ ಮತ್ತು ಕುಡಿಯುವ ನೀರು ಒದಗಿಸುವ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ, ‘ನೀರಿನ ಲಭ್ಯತೆ ಕಡಿಮೆ ಇರುವುದರಿಂದ ನವಿಲುತೀರ್ಥ ಜಲಾಶಯದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಸೇರಿದಂತೆ ಇತರೆ ಪಟ್ಟಣಗಳಿಗೆ ನಿರಂತರವಾಗಿ ನೀರು ಬಿಡಬಾರದು. ನಾಲ್ಕೈದು ದಿನಗಳಿಗೊಮ್ಮೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು’ ಎಂದು ಮನವಿ‌ ಮಾಡಿದರು.

ನವಲಗುಂದ ಶಾಸಕ ಎನ್‌.ಎಚ್‌.ಕೋನರೆಡ್ಡಿ, ‘ಜಲಾಶಯದಲ್ಲಿ ಈಗ ಲಭ್ಯವಿರುವ 15 ಟಿಎಂಸಿ ಅಡಿ ನೀರನ್ನು ಕುಡಿಯುವ ಉದ್ದೇಶ, ಕೃಷಿ ಬಳಕೆಗೆ ಆದ್ಯತೆ ಆಧರಿಸಿ ಒದಗಿಸಲು ಸಮಿತಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದರು.

ಬೈಲಹೊಂಗಲ ಶಾಸಕ‌ ಮಹಾಂತೇಶ ಕೌಜಲಗಿ, ‘ರೈತರ ಹಿತಾಸಕ್ತಿ ಹಾಗೂ ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ಗಮನದಲ್ಲಿಟ್ಟಕೊಂಡು, ನೀರು ಬಿಡುಗಡೆ ವಿಚಾರವಾಗಿ ಸಮತೋಲನದ ನಿರ್ಧಾರ ಕೈಗೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.

ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ವಿ.ಎಸ್.ಮಧುಕರ್ ಇತರರಿದ್ದರು.

ಇದಕ್ಕೂ ಮುನ್ನ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿದ ರೈತರು, ಜನ–ಜಾನುವಾರುಗಳ ಹಿತದೃಷ್ಟಿಯಿಂದ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT