ಶುಕ್ರವಾರ, ಮೇ 14, 2021
32 °C

ಬೆಳಗಾವಿ ಲೋಕಸಭಾ ಕ್ಷೇತ್ರದ ಫಲಿತಾಂಶ: ಪತಿ ನೆನೆದು ಕಣ್ಣೀರಿಟ್ಟ ಮಂಗಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟ ಆಗುತ್ತಿದ್ದಂತೆಯೇ ವಿಜೇತ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಭಾವುಕರಾದರು. ‍ಪುತ್ರಿಯರನ್ನು ತಬ್ಬಿಕೊಂಡು ಪತಿಯನ್ನು ನೆನೆದು ಕಣ್ಣೀರಿಟ್ಟರು. ಸುರೇಶ ಅಂಗಡಿ ಫೋಟೊಗೆ ನಮನ ಸಲ್ಲಿಸಿದರು. ಬೀಗರಾದ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು.

ನಂತರ ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ‘ಪತಿ ಹಾಗೂ ಪಕ್ಷದಿಂದ ಮಾಡಿರುವ ಕಾರ್ಯಗಳನ್ನು ನೋಡಿ ಜನರು ನನ್ನನ್ನು ಬೆಂಬಲಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ಪಕ್ಷದ ಕಾರ್ಯಕರ್ತರು ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ. ಅವರ ಆಶೋತ್ತರಗಳನ್ನು ಈಡೇರಿಸಲು ಬದ್ಧವಿದ್ದೇನೆ. ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಕಡೆಗೆ ಆದ್ಯತೆ ನೀಡುತ್ತೇನೆ’ ಎಂದರು.

‘ಪತಿ ಬಹಳ ಕನಸುಗಳನ್ನು ಕಂಡಿದ್ದರು. ಅವುಗಳನ್ನು ನನಸು ಮಾಡಲು ಪ್ರಯತ್ನಿಸುತ್ತೇನೆ. ಪತಿ ಅಕಾಲಿಕ ನಿಧನರಾದರು. ಆದರೆ, ಜನರು ನಮ್ಮ ಕೈಬಿಡಲಿಲ್ಲ. ಕೋವಿಡ್ ನಡುವೆ ಉಪ ಚುನಾವಣೆ ಬಂತು. ಪ್ರಚಾರಕ್ಕೆ ಸಮಯ ಸಾಲಲಿಲ್ಲ. ಹೀಗಾಗಿ, ಗೆಲುವಿನ ಅಂತರ ಕಡಿಮೆಯಾಯಿತು’ ಎಂದು ತಿಳಿಸಿದರು.

ಧನ್ಯವಾದ ಸಲ್ಲಿಸಿದ ಸತೀಶ
‘ನನ್ನ ಗೆಲುವಿಗಾಗಿ ಶ್ರಮಿಸಿದ ಲೋಕಸಭಾ ಕ್ಷೇತ್ರದ ಎಲ್ಲ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ಸೋಲು–ಗೆಲುವು ಸಹಜ. ಮತ್ತೆ ಇಂತಹ ಹಲವಾರು ಚುನಾವಣಾ ಸವಾಲುಗಳನ್ನು ನಾವು ಎದುರಿಸಬೇಕಾಗಿದೆ. ಹೀಗಾಗಿ, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಪರಾಜಿತ ಅಭ್ಯರ್ಥಿ ಸತೀಶ ಜಾರಕಿಹೊಳಿ ಮನವಿ ಮಾಡಿದ್ದಾರೆ.

‘ಚುನಾವಣೆ ಇರಲಿ, ಇಲ್ಲದಿರಲಿ, ಸದಾ ಜನಪರವಾಗಿ ಕಾರ್ಯನಿರ್ವಹಿಸುತ್ತೇನೆ. ನನ್ನನ್ನು ಬೆಂಬಲಿಸಿದ ಎಲ್ಲ ಮತದಾರರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ’ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು