ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧಾಕರ್ ಕಾರಿಗೆ ಕರವೇ ಕಾರ್ಯಕರ್ತರ ಮುತ್ತಿಗೆ

ನಿಪ್ಪಾಣಿಯಲ್ಲಿ ಮರಾಠಿಯಲ್ಲಿ ನಡೆದ ಕಾರ್ಯಕ್ರಮ
Last Updated 18 ಜನವರಿ 2021, 15:50 IST
ಅಕ್ಷರ ಗಾತ್ರ

ಬೆಳಗಾವಿ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಕಾರಿಗೆ ಕರವೇ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಮುತ್ತಿಗೆ ಹಾಕಿದರು.

‘ರಾಜ್ಯದ ಗಡಿ ನಿಪ್ಪಾಣಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಮರಾಠಿಯಲ್ಲಿ ನಡದಿದೆ. ಅದರಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹಿಸಿದ್ದರು.

ಇದಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ್ದ ಸುಧಾಕರ್, ‘ನಾರಾಯಣಗೌಡ ಯಾರು? ಅವರಾರೆಂದು ಗೊತ್ತಿಲ್ಲ’ ಎಂದು ಹೇಳಿದ್ದರು. ವಿಷಯ ತಿಳಿದ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಹಾಗೂ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಮುಗಿಸಿ ಹೋಗುತ್ತಿದ್ದ ಸಚಿವರನ್ನು ಎದುರಾಗಿ ಪ್ರಶ್ನಿಸಿದರು.

‘ರಾಜ್ಯದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡುತ್ತಿರುವ ನಾರಾಯಣಗೌಡ ಯಾರು ಎಂದು ಪ್ರಶ್ನಿಸುವುದು ಎಷ್ಟರ ಮಟ್ಟಿಗೆ ಸರಿ?’ ಎಂದು ಕೇಳಿದರು. ಕಾರಿನ ಮುಂದೆ ಕುಳಿತು ಧಿಕ್ಕಾರ ಕೂಗಿದರು. ಬಳಿಕ ಪೊಲೀಸರು ಸಚಿವರ ವಾಹನ ಹೋಗಲು ಜಾಗ ಮಾಡಿಕೊಟ್ಟರು.

‘ನಿಪ್ಪಾಣಿಯಲ್ಲಿ ಸರ್ಕಾರಿ ಆಸ್ಪತ್ರೆ ಉದ್ಘಾಟನೆ ಬಹುತೇಕ ಮರಾಠಿಯಲ್ಲೇ ನಡೆದಿದೆ. ಈ ಬಗ್ಗೆ ಪ್ರಶ್ನಿಸಿದರೆ ಸಚಿವರು ಉತ್ತರ ಕೊಡದೆ ಹೋರಟುಬಿಟ್ಟರು. ಅಲ್ಲದೇ, ನಾರಾಯಣಗೌಡ ಯಾರೆಂದು ಕೇಳಿದ್ದಾರೆ. ಅವರು ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಜನರ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಅವರ ಕಾರ್‌ಗೆ ಘೇರಾವ್ ಹಾಕಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಮುಖಂಡ ಸುರೇಶ ಗವನ್ನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT