ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ

Published 2 ಫೆಬ್ರುವರಿ 2024, 8:07 IST
Last Updated 2 ಫೆಬ್ರುವರಿ 2024, 8:07 IST
ಅಕ್ಷರ ಗಾತ್ರ

ಬೆಳಗಾವಿ: ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ಫೆ.5 ರಂದು ನಗರದ ಸರ್ದಾರ್‌ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಸಮಾವೇಶ ನಡೆಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಪೊಲೀಸ್‌ ಅಧಿಕಾರಿಗಳು ಸಂಚಾರ ದಟ್ಟಣೆ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಆಂಬುಲೆನ್ಸ್‌ ಹಾಗೂ ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು ಎಂದರು.

ಶಾಸಕ ಆಸಿಫ್ ಸೇಠ್ ಮಾತನಾಡಿ, ಈ ಯೋಜನೆಗಳಿಗೆ ಪ್ರತಿವರ್ಷ ಸರ್ಕಾರದಿಂದ ₹ 60 ಸಾವಿರ ಕೋಟಿ ಖರ್ಚು ಮಾಡಲು ಉದ್ದೇಶಿಸಲಾಗಿದೆ. ಇನ್ನಷ್ಟು ಅರಿವು ಮೂಡಿಸುವ ಕಾರಣಕ್ಕೆ ಸಮಾವೇಶ ಆಯೋಜಿಸಲಾಗುತ್ತಿದೆ ಎಂದರು.

ಬೆಳಗಾವಿ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ, ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳಿಗೆ ಊಟೋಪಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ, ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸಮಾವೇಶದ ಸಿದ್ಧತೆ ಪರಿಶೀಲನೆ: ಪೂರ್ವಭಾವಿ ಸಭೆಯ ಬಳಿಕ ಮೈದಾನಕ್ಕೆ ಭೇಟಿ ನೀಡಿದ ಶಾಸಕ ಆಸಿಫ್ ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಮಾವೇಶದ ಸಿದ್ಧತೆ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಭಾನುವಾರ (ಫೆ.5) ಸರ್ದಾರ್‌ ಮೈದಾನದಲ್ಲಿ ನಡೆಯಲಿರುವ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಸಿದ್ಧತೆಯನ್ನೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಶೀಲಿಸಿದರು.

ಶಾಸಕ ಆಸಿಫ್ ಸೇಠ್, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ಗಂಗಾಮತಸ್ಥ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಕುರಂದವಾಡೆ ಹಾಗೂ ಸಮಾಜದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT