ಸತ್ತಿಗೇರಿ: ಗ್ರಾಮದಲ್ಲಿ ಅಭಿವೃದ್ಧಿ ಕೆಲಸಕ್ಕೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ, ಸಮೀಪದ ಸೊಪ್ಪಡ್ಲ ಗ್ರಾಮ ಪಂಚಾಯ್ತಿ ಕಚೇರಿಗೆ ಸದಸ್ಯರು ಶನಿವಾರ ಬೀಗ ಜಡಿದು ಪ್ರತಿಭಟನೆ ನಡೆಸಿದರು.
‘ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಮ್ಮ ಗ್ರಾ.ಪಂಗೆ ಎಷ್ಟು ಮನೆ ಮಂಜೂರಾಗಿವೆ ಎಂದು ಪಿಡಿಒ ವಹೀದಾ ಮುಲ್ಲಾ ಮಾಹಿತಿ ಕೊಡುತ್ತಿಲ್ಲ. ನರೇಗಾ ಯೋಜನೆಯಡಿ ಕೈಗೊಳ್ಳಬೇಕಿರುವ ಕೆಲಸಕ್ಕೆ ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ಚರ್ಚಿಸಲು ಕಚೇರಿಗೆ ಹೋದರೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ’ ಎಂದು ದೂರಿದರು.
ಸವದತ್ತಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಬಡಕುಂದ್ರಿ ಸ್ಥಳಕ್ಕಾಗಮಿಸಿ ಸಮಸ್ಯೆ ಆಲಿಸಿದರು. ‘ನಿಮ್ಮ ಆರೋಪಗಳ ಪರಿಶೀಲಿಸಿ, ಕ್ರಮ ಜರುಗಿಸಲಾಗುವುದು’ ಎಂದು ಅವರು ಭರವಸೆ ನೀಡಿದ್ದರಿಂದ ಸದಸ್ಯರು ಪ್ರತಿಭಟನೆ ಹಿಂಪಡೆದರು.