ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಸಂತ್ರಸ್ತರಿಗೆ ಪರಿಹಾರ ಬಿಡುಗಡೆಗೆ ಸಚಿವ ರಮೇಶ ಜಾರಕಿಹೊಳಿ ಸೂಚನೆ

ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ
Last Updated 16 ಅಕ್ಟೋಬರ್ 2020, 12:17 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರವಾಹದಿಂದ ಮನೆಗಳ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿರುವ ಕಡೆಗಳಲ್ಲಿ ಕೂಡಲೇ ಪರಿಹಾರ ಹಣ ಬಿಡುಗಡೆ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿರ್ದೇಶನ ನೀಡಿದರು.

ಅತಿವೃಷ್ಟಿ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಳೆ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿಟ್ಟುಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

2.30 ಲಕ್ಷ ಕ್ಯುಸೆಕ್ ಆದಾಗ:

‘ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುವ ನೀರಿನ ಪ್ರಮಾಣ 2.30 ಲಕ್ಷ ಕ್ಯುಸೆಕ್‌ಗಿಂತ ಹೆಚ್ಚಾದಾಗ ಮಾತ್ರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಶುಕ್ರವಾರ ಮಹಾರಾಷ್ಟ್ರದಲ್ಲಿ ಮಳೆ ಕಡಿಮೆ ಆಗಿರುವುದರಿಂದ ಯಾವುದೇ ತೊಂದರೆಯಿಲ್ಲ’ ಎಂದರು.

‘ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮನೆ ಹಾಗೂ ಬೆಳೆ ಹಾನಿ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಬೆಳೆ ಹಾನಿ ಪರಿಹಾರ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ. ಆದಷ್ಟು ಬೇಗ ಕೊಡಲಾಗುವುದು’ ಎಂದು ತಿಳಿಸಿದರು.

ಸಂಚಾರಕ್ಕೆ ತೊಂದರೆ ಇಲ್ಲ:

‘ಜಿಲ್ಲೆಯಲ್ಲಿ ಕೆಳ ಹಂತದಲ್ಲಿರುವ ಏಳು ಸೇತುವೆಗಳು ಮಾತ್ರ ಮಳೆಗಾಲದಲ್ಲಿ ಮುಳುಗಡೆಯಾಗುತ್ತವೆ. ಎಲ್ಲ ಕಡೆಯೂ ಪರ್ಯಾಯ ಮಾರ್ಗಗಳು ಇರುವುದರಿಂದ ಜನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ’ ಎಂದರು.

‘ಆಲಮಟ್ಟಿ ಜಲಾಶಯದಿಂದ ಒಳಹರಿವು ಆಧರಿಸಿ ನೀರು ಬಿಡುಗಡೆ ಮಾಡಲಾಗುತ್ತಿದೆ’ ಎಂದು ನೀರಾವರಿ ಇಲಾಖೆ ಎಂಜಿನಿಯರ್‌ ಸಿ.ಡಿ. ಪಾಟೀಲ ಹೇಳಿದರು.

‘ಮಳೆ-ಗಾಳಿಯಿಂದ ಸ್ವಲ್ಪಮಟ್ಟಿಗೆ ಕಬ್ಬು, ಉಳಿದಂತೆ ಮೆಕ್ಕೆಜೋಳ, ಹತ್ತಿ ಬೆಳೆ ಹಾನಿಯಾಗಿದೆ. ಹತ್ತಿ ಬೆಳೆಗೆ ರೋಗ ತಗುಲಿರುವುದನ್ನು ಪರಿಶೀಲಿಸಲು ವಿಜ್ಞಾನಿಗಳ ತಂಡ ಕಳುಹಿಸಲಾಗುತ್ತಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾಹಿತಿ ನೀಡಿದರು.

ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ., ಎಸ್ಪಿಲಕ್ಷ್ಮಣ ನಿಂಬರಗಿ, ನೀರಾವರಿ ನಿಗಮದ ಬೆಳಗಾವಿ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ ಕಣಗಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ನಗರಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT