ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಕಾರ ಕೂಲಿ ಕಾರ್ಮಿಕರಿಗೆ ಸೌಲಭ್ಯಕ್ಕೆ ಆಗ್ರಹ

ಅಸಂಘಟಿತ ಕಾರ್ಮಿಕರೆಂದು ಘೋಷಿಸಲು ಒತ್ತಾಯ
Last Updated 22 ಫೆಬ್ರುವರಿ 2021, 11:12 IST
ಅಕ್ಷರ ಗಾತ್ರ

ಬೆಳಗಾವಿ: ವಿದ್ಯುತ್ ಮಗ್ಗಗಳಲ್ಲಿ ಕೆಲಸ ಮಾಡುವ ಕೂಲಿ ನೇಕಾರ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರು ಎಂದು ಬಜೆಟ್‌ನಲ್ಲಿ ಘೋಷಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಕೂಲಿ ನೇಕಾರ ಕಾರ್ಮಿಕರ ಬಳಗ’ದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ರಾಜ್ಯದಾದ್ಯಂತ ಲಕ್ಷಾಂತರ ಕೂಲಿ ನೇಕಾರ ಕಾರ್ಮಿಕರು ವಿದ್ಯುತ್ ಮಗ್ಗಗಳಲ್ಲಿ ದುಡಿಯುತ್ತಿದ್ದಾರೆ. ಆದರೆ, ಅವರಿಗೆ ಕೂಲಿ ಬಿಟ್ಟರೆ ಕಾನೂನುಬದ್ಧವಾಗಿ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಇದರಿಂದಾಗಿ ಅವರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಕೋವಿಡ್–19 ಲಾಕ್‌ಡೌನ್‌ ಪರಿಸ್ಥಿತಿಯಿಂದಾಗಿ ಕೆಲಸವಿಲ್ಲದೆ ಮತ್ತು ಬದುಕು ಸಾಗಿಸಲು ಕಷ್ಟಸಾಧ್ಯವಾಗಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ಅವರನ್ನು ಅಸಂಘಟಿತ ಕಾರ್ಮಿಕರೆಂದು ಘೋಷಿಸಿ ಸರ್ಕಾರದಿಂದ ದೊರೆಯುವ ಶಾಸನಬದ್ಧ ಸೌಲಭ್ಯಗಳನ್ನು ಕಲ್ಪಿಸಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ವಿದ್ಯುತ್‌ಚಾಲಿತ ಮಗ್ಗಗಳಲ್ಲಿ ಕೆಲಸ ಮಾಡುತ್ತಿರುವ ಕೂಲಿ ನೇಕಾರ ಕಾರ್ಮಿಕರು ಮತ್ತು ಇತರ ಪೂರಕ ಕಾರ್ಮಿಕರನ್ನು ಗುರುತಿಸಿ ಅವರಿಗೆ ಕನಿಷ್ಠ ವೇತನ ನಿಗದಿಪಡಿಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಮಾದರಿಯಲ್ಲಿ ಇವರಿಗೂ ಪ್ರತ್ಯೇಕವಾಗಿ ಕಲ್ಯಾಣ ಮಂಡಳಿ ರಚಿಸಬೇಕು. ಕಾರ್ಮಿಕರೆಂದು ಗುರುತಿನ ಚೀಟಿ ನೀಡಬೇಕು. ನೇಕಾರ ಸಮ್ಮಾನ್ ಯೋಜನೆಯನ್ನು ನಮಗೂ ವಿಸ್ತರಿಸಬೇಕು. ನೇಕಾರಿಕೆ ಉಳಿವಿವಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಕೇಂದ್ರ ಸರ್ಕಾರವು ಕಾರ್ಮಿಕ ಕಾಯ್ದೆ ತಿದ್ದುಪಡಿಯು ಶ್ರಮಿಕರ ವಿರೋಧಿಯಾಗಿದ್ದು, ಅದನ್ನು ರಾಜ್ಯದಲ್ಲಿ ಜಾರಿಗೊಳಿಸಬಾರದು’ ಎಂದು ಆಗ್ರಹಿಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಬಳಗದ ಸಂಚಾಲಕ ರವಿ ಮ. ಪಾಟೀಲ, ಕಾರ್ಯದರ್ಶಿ ಶಂಕರ ನಾ.ಢವಳಿ, ಮುಖಂಡರಾದ ವಿಠ್ಠಲ ಬಂಗೋಡಿ, ಬಸವರಾಜ ಮುರಗೋಡ, ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ಹಾಗೂ ಸಾಮಾಜಿಕ ಕಾರ್ಯಕರ್ತ ಶಿವಾಜಿ ಕಾಗಣೆಕರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT