ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಅಭಿವೃದ್ಧಿಗೆ ಎನ್‌ಇಪಿ ಅವಶ್ಯ: ಸಚಿವ ಬಿ.ಸಿ. ನಾಗೇಶ್

Last Updated 13 ಏಪ್ರಿಲ್ 2022, 14:39 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಅಳವಡಿಕೆಯಿಂದ ವಿದ್ಯಾರ್ಥಿಗಳನ್ನು ಅತ್ಯುತ್ತಮವಾಗಿ ಸಜ್ಜುಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರಲಾಗುವುದು. ಇದರಿಂದ ಭವಿಷ್ಯದಲ್ಲಿ ವಿವಿಧ ಕ್ಷೇತ್ರಗಳು ಅಭಿವೃದ್ಧಿಯಾಗಲಿವೆ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಇಲ್ಲಿನ ಗಾಂಧಿ ಭವನದಲ್ಲಿ ಬುಧವಾರ ನಡೆದ ಎನ್‌ಇಪಿ ಕುರಿತ ಶೈಕ್ಷಣಿಕ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮ ಸರ್ಕಾರ ಎನ್‌ಇಪಿ ಅನುಷ್ಠಾನಗೊಳಿಸಿದೆ. 34 ವರ್ಷಗಳ ನಂತರ ಮೊದಲ ಬಾರಿಗೆ ಜಾರಿಯಾದ ಶಿಕ್ಷಣ ನೀತಿ ಇದಾಗಿದೆ. ದೇಶದ ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ’ ಎಂದು ಆಶಯ ವ್ಯಕ್ತಪಡಿಸಿದರು.

‘ದೇಶವನ್ನು ಜ್ಞಾನ ಜಗತ್ತಿನ ಬಲಶಾಲಿ ಆಗಿಸಲು, ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜವನ್ನಾಗಿ ಪರಿವರ್ತಿಸುವುದು ನೀತಿಯ ದೃಷ್ಟಿಕೋನದ ಮೂಲ ಉದ್ದೇಶವಾಗಿದೆ’ ಎಂದು ಹೇಳಿದರು.

ಪ್ರಾಥಮಿಕ ಹಂತದಿಂದಲೇ ಬದಲಾವಣೆ:

‘ಪ್ರಾಥಮಿಕ ಹಂತದಿಂದಲೇ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು ಎಂಬ ಉದ್ದೇಶದಿಂದ ನೀತಿ ಜಾರಿಗೆ ತರಲಾಗಿದೆ. ನೀತಿಯ ಜಾರಿಗೆ ತಂದ ನಂತರ ಅನೇಕ ಶಿಕ್ಷಕರು ಗೊಂದಲಕ್ಕೆ ಒಳಗಾಗಿದ್ದು, ಕಾರ್ಯಾಗಾರ ಏರ್ಪಡಿಸಿ ಗೊಂದಲ ನಿವಾರಿಸಲಾಗುವುದು. ಪ್ರತಿ ಶಾಲಾ- ಕಾಲೇಜುಗಳಲ್ಲಿ ಶಿಕ್ಷಕರಿಗೆ ಎನ್ಇಪಿ ಪಠ್ಯ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಗುವುದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅನಿಲ ಬೆನಕೆ, ‘ಪಠ್ಯಗಳ ಬದಲಾವಣೆಯಿಂದ ಮಕ್ಕಳ ಭವಿಷ್ಯದಲ್ಲಿ ಉತ್ತಮ ಬದಲಾವಣೆ ಆಗಲಿದೆ. ಎನ್‌ಇಪಿಯು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆಯ ಕಾರ್ಯ ನಿರ್ವಹಿಸಲಿದೆ’ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪೂರ, ಹಣಮಂತ ನಿರಾಣಿ, ಡಿಡಿಪಿಐ ಗಜಾನನ ಮನ್ನಿಕೇರಿ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT