ಮಂಗಳವಾರ, ನವೆಂಬರ್ 30, 2021
21 °C
ಮಾರ್ಗಸೂಚಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆ

ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಸಾರ್ವಜನಿಕರಿಗೆ ವೇದಿಕೆ, ಆಸನ ಮತ್ತಿತರ ವ್ಯವಸ್ಥೆ ಮಾಡಬೇಕು. ಉಪ ಸಮಿತಿಯ ಅಧ್ಯಕ್ಷರು ಸಭೆಗಳನ್ನು ನಡೆಸಿ ಎಲ್ಲ ಬಗೆಯ ಸಿದ್ಧತೆಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಾಗೂ ಶಾಲಾ–ಕಾಲೇಜುಗಳ ತಂಡಗಳಿಗೆ ಕವಾಯತಿಯನಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ’ ಎಂದು ಹೇಳಿದರು.

ಕೊರೊನಾ ಯೋಧರಿಗೆ ಸತ್ಕಾರ

‘ವೈದ್ಯರು, ಆಶಾ ಕಾರ್ಯಕರ್ತೆಯರು ಮತ್ತಿತರ ಕೊರೊನಾ ಯೋಧರು ಹಾಗೂ ಕೋವಿಡ್-19 ಸೋಂಕಿನಿಂದ ಗುಣಮುಖರಾದ ಐವರನ್ನು ಸಮಾರಂಭದಲ್ಲಿ ಸತ್ಕರಿಸಲಾಗುವುದು’ ಎಂದು ತಿಳಿಸಿದರು.

‘ಪ್ರವೇಶ ದ್ವಾರದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲು ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು. ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್‌ಗಳನ್ನು‌  ಒದಗಿಸಬೇಕು. ಅಗತ್ಯ ಇರುವವರಿಗೆ ಮಾಸ್ಕ್ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಪೊಲೀಸ್ ತಂಡ, ಗೃಹರಕ್ಷಕದಳ, ಅಗ್ನಿಶಾಮಕ ದಳ, ಎನ್‌ಸಿಸಿ ಮತ್ತು ಸ್ಕೌಟ್ಸ್ ಹಾಗೂ ಗೈಡ್ಸ್‌ ಕೆಡೆಟ್‌ಗಳು ಮಾತ್ರ ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ವಿದ್ಯಾರ್ಥಿ ತಂಡಗಳಿಗೆ ಪರೇಡ್‌ನಲ್ಲಿ ಅವಕಾಶವಿಲ್ಲ. 12 ಪ್ಲಟೂನ್‌ಗಳು ಮಾತ್ರ ಭಾಗವಹಿಸಲಿದ್ದು, ಸಂಬಂಧಿಸಿದ ಅಧಿಕಾರಿಗಳು ಪೂರ್ವ ತಯಾರಿ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಎಎಸ್ಪಿ ಅಮರನಾಥ ರೆಡ್ಡಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.