ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ: ಸತೀಶ ಜಾರಕಿಹೊಳಿ

Last Updated 6 ಆಗಸ್ಟ್ 2021, 12:28 IST
ಅಕ್ಷರ ಗಾತ್ರ

ಬೆಳಗಾವಿ: ‘ನೂತನ ಸಚಿವರಿಂದ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕರು ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲೂ ಇದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನೋಡಿದ್ದೇವೆ’ ಎಂದರು.

‘ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು ಯಾವುದೇ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಕೊರೊನಾ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಗಳನ್ನು ಮಾಡಿರಲಿಲ್ಲ. ಅದೇ ಪರಿಸ್ಥಿತಿ ಮುಂದುವರಿಯುತ್ತದಷ್ಟೆ’ ಎಂದು ವ್ಯಂಗ್ಯವಾಡಿದರು.

‘ಬೊಮ್ಮಾಯಿ ಸಂಪುಟದಲ್ಲಿರುವ ಮೂವರು ಸಚಿವರ ವಿರುದ್ಧ ಗಂಭೀರ ಆರೋಪಗಳಿವೆ. ಅವರ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲು ಪಕ್ಷದಿಂದ ಚರ್ಚಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.

‘ಸರ್ಕಾರ ಕೊರೊನಾ ಬಗ್ಗೆ ಮೊದಲಿನಿಂದಲೂ ನಿರ್ಲಕ್ಷ್ಯ ತಾಳುತ್ತಲೇ ಬಂದಿದೆ. ಈಗ 3ನೇ ಅಲೆ ಹರಡುವ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಈ ಬಗ್ಗೆ ಯಾರ ಬಳಿಯೂ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ, ಸರ್ಕಾರವು ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರವು ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಘೋಷಿಸಿದ್ದು, ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವುದನ್ನು ಕಾದು ನೋಡಬೇಕು’ ಎಂದರು.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಕೇಂದ್ರ ಸರ್ಕಾರದಿಂದ ಅನುದಾನ ಬರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಸಾಕಷ್ಟು ಸಮಸ್ಯೆ ಮಾಡಿದ್ದಾರೆ. ರಾಜ್ಯ ಸರ್ಕಾರ ಪ್ರತಿ ಬಾರಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಿಸುತ್ತಿದೆ. ಆದರೆ, ಆ ಪರಿಹಾರ ಸಂತ್ರಸ್ತರಿಗೆ ತಲುಪುತ್ತಿಲ್ಲ. ಈ ಬಾರಿ ಪ್ರವಾಹ ಎದುರಾಗಿದ್ದರೂ ಯಾವುದೇ ಪರಿಹಾರ ನೀಡಿಲ್ಲ. ಇನ್ನೂ ಸರ್ವೇ ಕಾರ್ಯ ನಡೆಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ವೀರಕುಮಾರ ಪಾಟೀಲ, ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ (ಆಡಳಿತ) ಪ್ರದೀಪ ಎಂ.ಜೆ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT