ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ಸಮಸ್ಯೆ ಶೀಘ್ರ ಪರಿಹಾರ: ಸಚಿವ ಜಗದೀಶ್‌ ಶೆಟ್ಟರ್

Last Updated 9 ಮೇ 2021, 11:21 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯಕ್ಕೆ ಅಗತ್ಯವಿರುವ ಆಮ್ಲಜನಕ ಪ್ರಮಾಣವನ್ನು ಆಧರಿಸಿ ಹೆಚ್ಚುವರಿಯಾಗಿ ಹಂಚಿಕೆಗೆ ಕೇಂದ್ರ ಸರ್ಕಾರ ಒಪ್ಪಿದ್ದು, ಮೂರ್ನಾಲ್ಕು ದಿನಗಳಲ್ಲಿ ಸಮಸ್ಯೆ ಪರಿಹಾರ ಕಾಣಲಿದೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಆಮ್ಲಜನಕ ಲಭ್ಯತೆ ಕುರಿತು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಮಹಾರಾಷ್ಟ್ರದ ಕೊಲ್ಹಾಪುರದಿಂದ ಜಿಲ್ಲೆಗೆ ಪೂರೈಕೆ (20 ಕೆ.ಎಲ್.)ಗೆ ನಿರ್ಬಂಧ ವಿಧಿಸಿದ್ದರೆ ಮರುಹಂಚಿಕೆಗೆ ಸಂಬಂಧಿಸಿದಂತೆ ಆ ಸರ್ಕಾರದಿಂದಿಗೆ ಚರ್ಚೆ ನಡೆಸಲಾಗುವುದು. ಬಳ್ಳಾರಿಯಿಂದ ಮಹಾರಾಷ್ಟ್ರಕ್ಕೆ ಹಂಚಿಕೆಯಾಗಿದ್ದ ಪ್ರಮಾಣವನ್ನು ಕರ್ನಾಟಕಕ್ಕೆ ಮರು ಹಂಚಿಕೆ ಮಾಡಲಾಗಿದೆ. ಈ ವಿಷಯವನ್ನೂ ತಿಳಿಸಲಾಗುವುದು. ಕೇಂದ್ರ ಸರ್ಕಾರವು ಕೂಡ ಟ್ಯಾಂಕರ್ ನೀಡಲಿದ್ದು, ಅದರಲ್ಲಿ ಒಂದನ್ನು ಜಿಲ್ಲೆಗೆ ಮೀಸಲಿಡಲಾಗುವುದು’ ಎಂದು ತಿಳಿಸಿದರು.

ಮಾಹಿತಿ ನೀಡಿ:

‘ಹೋಂ ಐಸೊಲೇಷನ್‌ನಲ್ಲಿ ಇರುವವರಿಗೆ ಸಮರ್ಪಕವಾಗಿ ಔಷಧಿ ಕಿಟ್ ನೀಡುವ ಜೊತೆಗೆ ಯಾವ ರೀತಿ ಆರೈಕೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಆರೋಗ್ಯ ಇಲಾಖೆಯವರು ಮಾಹಿತಿ ನೀಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್‌ಗಳನ್ನು ಸಮರ್ಪಕವಾಗಿ ಬಳಸಬೇಕು. ಅಲ್ಲಿ ಬಳಸಲು ಸಾಧ್ಯವಾಗದಿದ್ದರೆ ಜಿಲ್ಲಾಸ್ಪತ್ರೆಗೆ ತಲುಪಿಸಬಹುದು’ ಎಂದು ಸಲಹೆ ನೀಡಿದರು.

‘ನಗರದಲ್ಲಿ ಕೆಲವು ಎನ್‌ಜಿಒಗಳು ಆರಂಭಿಸಿರುವ ಕೋವಿಡ್ ಕೇರ್ ಕೇಂದ್ರಗಳಿಗೆ ಆಮ್ಲಜನಕ ಒದಗಿಸುವ ಕುರಿತು ಇರುವ ನಿಯಮಾವಳಿಗಳನ್ನು ಜಿಲ್ಲಾಧಿಕಾರಿ ಹಾಗೂ ಆರೋಗ್ಯಾಧಿಕಾರಿ ಸ್ಪಷ್ಟಪಡಿಸಬೇಕು. ಇದರಿಂದ ತಪ್ಪುಕಲ್ಪನೆಗಳನ್ನು ದೂರ ಮಾಡಬಹುದು’ ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಿರ್ಬಂಧದಿಂದ ಕೊರತೆ

‘ಕೊಲ್ಹಾಪುರದಿಂದ 20 ಕೆ.ಎಲ್. ಪೂರೈಕೆ ಆಗುತ್ತಿತ್ತು.‌ ಕೈಗಾರಿಕಾ ಆಮ್ಲಜನಕ ಸಾಗಣೆಗೆ ಕೆಲ ನಿರ್ಬಂಧ ವಿಧಿಸಿರುವುದರಿಂದ ಸ್ವಲ್ಪಮಟ್ಟಿಗೆ ಕೊರತೆ ಇದೆ. ಜಿಲ್ಲೆಯ ಟ್ಯಾಂಕರ್ ಅಪಘಾತವಾಗಿದ್ದರಿಂದ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಟ್ಯಾಂಕರ್ ಸರಿಯಾದ ಬಳಿಕ ಸಾಗಣೆಗೆ ಸಮಸ್ಯೆ ಆಗುವುದಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಹೇಳಿದರು.

‘ಜಿಲ್ಲೆಯಲ್ಲಿ ಆಮ್ಲಜನಕ ಲಭ್ಯತೆ ಪ್ರಮಾಣ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಇದಲ್ಲದೇ ಸಂಗ್ರಹಣೆ ಸಾಮರ್ಥ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಚೆಗೆ ಲಕ್ಷಣ ಹೊಂದಿರುವವರ ಮಾದರಿ ಪರೀಕ್ಷಿಸಲಾಗುತ್ತಿದ್ದು, ಸೋಂಕಿನ ಪ್ರಮಾಣ ಶೇ.28ರಷ್ಟಿದೆ. ಲಸಿಕೆಗೆ ಬೇಡಿಕೆ ಹೆಚ್ಚಾಗಿದೆ. ಮಾರ್ಗಸೂಚಿ ಪ್ರಕಾರ 2ನೇ ಡೋಸ್ ಮಾತ್ರ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್, ‘10 ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗಿದೆ’ ಎಂದರು.

ಸಂಸದೆ ಮಂಗಲಾ ಅಂಗಡಿ, ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಜಿ.ಪಂ. ಸಿಇಒ ಡಾ.ಎಚ್‌.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಇದ್ದರು.

***

ಶೆಟ್ಟರ್ ಸೂಚನೆಗಳು

* ಸೋಂಕು ತಪಾಸಣೆಗೆ ಮಾದರಿಯನ್ನು ಸಂಗ್ರಹಿಸಿದ ನಂತರ ತ್ವರಿತವಾಗಿ ವರದಿ ನೀಡಬೇಕು.

* 24 ಗಂಟೆಯೊಳಗೆ ವರದಿ ನೀಡಲು ಕ್ರಮ ವಹಿಸಬೇಕು.

* ಬಿಮ್ಸ್‌ನಲ್ಲಿ ಅಗತ್ಯವಿರುವ ವೈದ್ಯರು, ತಂತ್ರಜ್ಞರು ಹಾಗೂ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅನುಮತಿ ಸಿಕ್ಕಿದ್ದು, ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕು.

* ಮೇ 10ರಿಂದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಬೇಕು.

***

ಬಿಮ್ಸ್ ಆಸ್ಪತ್ರೆಗೆ ಇನ್ನೂ ಹೆಚ್ಚಿನ ಆಮ್ಲಜನಕ ಹಾಗೂ ಸಿಬ್ಬಂದಿ ನೀಡಿದರೆ ಗರಿಷ್ಠ 822 ಹಾಸಿಗೆಗಳನ್ನು ಒದಗಿಸಬಹುದು. ಇದರಿಂದ ಸಮಸ್ಯೆ ಪರಿಹರಿಸಬಹುದು
-ಡಾ.ವಿನಯ್‌ ದಾಸ್ತಿಕೊಪ್ಪ, ನಿರ್ದೇಶಕ, ಬಿಮ್ಸ್

***

ಜಿಲ್ಲೆಗೆ ರೆಮ್‌ಡಿಸಿವಿರ್ ಚುಚ್ಚುಮದ್ದು ಪೂರೈಕೆ ಸಮರ್ಪಕವಾಗಿ ಇಲ್ಲದಿರುವುದರಿ‌ಂದ ಪ್ರತಿ ದಿನ ಕೊರತೆ ಎದ್ದು ಕಾಣುತ್ತಿದೆ. ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು
- ಅನಿಲ ಬೆನಕೆ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT