ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಅ.15ರಂದು ಡಾ.ಪ್ರಭಾಕರ ಕೋರೆ ಅಮೃತ ಮಹೋತ್ಸವ

ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ಧೂರಿ ವೇದಿಕೆ | 75 ಸಾವಿರ ಜನ ಭಾಗವಹಿಸುವ ನಿರೀಕ್ಷೆ
Last Updated 12 ಅಕ್ಟೋಬರ್ 2022, 11:19 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಅ.15ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ. ರಾಜ್ಯ ಹಾಗೂ ಹೊರರಾಜ್ಯಗಳಿಂದ 75 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ.

ಈ ಬಗ್ಗೆ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ, ‘ಅಮೃತ ಮಹೋತ್ಸವದಲ್ಲಿ ಭಾಗವಹಿಸಲು ಬರುವ ಜನರಿಗಾಗಿ ತಾಲ್ಲೂಕಿನ ಭೂತರಾಮನಹಟ್ಟಿಯ ಮುಕ್ತಿಮಠ, ಕಣಬರ್ಗಿಯ ಸಂಕಲ್ಪ ಗಾರ್ಡನ್‌, ನಿಲಜಿ, ಧರ್ಮನಾಥ ಭವನ, ನಾಗನೂರು ರುದ್ರಾಕ್ಷಿಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಶ್ರೀನಗರ, ಮಹಾಂತೇಶ ನಗರ, ಬಾಕ್ಸೈಟ್‌ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್‌ ಇಲಾಖೆಯೊಂದಿಗೆ ಚರ್ಚಿಸಿ ಇನ್ನೂ ಹಲವೆಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗುವುದು’ ಎಂದರು.

'ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕೇಂದ್ರ ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ ಆಗಮಿಸುವರು. ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್‌, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡನವೀಸ್‌, ಶಾಸಕರಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ್, ಆರ್‌.ವಿ.ದೇಶಪಾಂಡೆ, ಮಹಾರಾಷ್ಟ್ರದ ಸಚಿವ ರಾಧಾಕೃಷ್ಣ ಪಾಟೀಲ, ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಆಗಮಿಸುವರು’ ಎಂದು ಮಾಹಿತಿ ನೀಡಿದರು.

‘ಮಹಾರಾಷ್ಟ್ರದ ಜ್ಯೋತಿಬಾ ಫುಲೆ ಆರೋಗ್ಯ ಯೋಜನೆಯೊಂದಿಗೆ ಕೆಎಲ್‌ಇ ಸಂಸ್ಥೆಯ ಆಸ್ಪತ್ರೆ ಒಪ್ಪಂದ ಮಾಡಿಕೊಂಡಿದೆ. ಗೋವಾದಿಂದಲೂ ಹೆಚ್ಚಿನ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಮೂರು ರಾಜ್ಯಗಳಲ್ಲಿ ಕೆಎಲ್‌ಇ ಸಂಸ್ಥೆ ತನ್ನ ಛಾಪು ಮೂಡಿಸಿದೆ. ಆಯಾ ರಾಜ್ಯಗಳ ನಾಯಕರೂ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ’ ಎಂದು ಹೇಳಿದರು.

‘ಡಾ.ಪ್ರಭಾಕರ ಕೋರೆ ಶಿಕ್ಷಣ, ಸಹಕಾರ, ಕೃಷಿ, ಆರೋಗ್ಯ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. 1984ರಲ್ಲಿ ಅವರು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗ, ಕೆಎಲ್‌ಇ ಅಂಗಸಂಸ್ಥೆಗಳ ಸಂಖ್ಯೆ 38 ಇತ್ತು. ಇಂದು 293 ಅಂಗಸಂಸ್ಥೆಗಳಿದ್ದು, 1.38 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಿಕ್ಷಣ, ಆರೋಗ್ಯ, ಆರೈಕೆ, ಸಂಶೋಧನೆ, ಕೃಷಿ ಕ್ಷೇತ್ರದಲ್ಲಿ ಈ ಸಂಸ್ಥೆ ಗಣನೀಯ ಸೇವೆ ಸಲ್ಲಿಸುತ್ತಿದೆ’ ಎಂದರು.

‘2006ರಲ್ಲಿ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರಿಸರ್ಚ್‌ (ಕಾಹೇರ್) ಸ್ಥಾಪಿಸಿದ್ದಾರೆ. 2015ರಲ್ಲಿ ಹುಬ್ಬಳ್ಳಿಯಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪಿಸಿದ್ದಾರೆ. ಮೂರು ಬಾರಿ ರಾಜ್ಯಸಭೆ ಸದಸ್ಯರಾಗಿ, ಒಂದು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2011ರಲ್ಲಿ ಬೈಲಹೊಂಗಲ ತಾಲ್ಲೂಕಿನ ಮತ್ತಿಕೊಪ್ಪದಲ್ಲಿ ಐಸಿಎಆರ್‌–ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಸ್ಥಾಪಿಸಿದ್ದಾರೆ. ಶಿಕ್ಷಣ ಹಾಗೂ ಸಂಶೋಧನೆ ಕ್ಷೇತ್ರಗಳಲ್ಲಿ ವಿವಿಧ ವಿಶ್ವವಿದ್ಯಾಲಯಗಳೊಂದಿಗೆ ಕೆಎಲ್ಇ ಅಂತರರಾಷ್ಟ್ರೀಯ ಒಡಂಬಡಿಕೆ ಮಾಡಿಕೊಂಡಿದೆ’ ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಅಭಯ ಪಾಟೀಲ, ಎಂ.ಬಿ.ಝಿರಲಿ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.

ವರ್ಷವಿಡೀ ಕಾರ್ಯಕ್ರಮ:

'ಪ್ರಭಾಕರ ಕೋರೆ ಅವರ 75ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಿದ್ದೇವೆ. ಇದಕ್ಕಾಗಿ ವರ್ಷವಿಡೀ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ‘ರಾಷ್ಟ್ರ ನಿರ್ಮಾಣದಲ್ಲಿ ಮಠ–ಮಾನ್ಯಗಳ ಪಾತ್ರ’ ವಿಷಯ ಕುರಿತು ನ.11ರಂದು ಇಲ್ಲಿನ ನಾಗನೂರು ರುದ್ರಾಕ್ಷಿಮಠದಲ್ಲಿ ರಾಜ್ಯ ಮತ್ತು ಜಿಲ್ಲೆಯ ಮಠಾಧೀಶರ ಸಮಾವೇಶ ನಡೆಯಲಿದೆ. 2023ರ ಜನವರಿಯಲ್ಲಿ ಚಿದಾನಂದ ಪ್ರಭು ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೃಷಿ ಮೇಳ ನಡೆಸಲಾಗುವುದು’ ಎಂದು ಕವಟಗಿಮಠ ಹೇಳಿದರು.

'ಶಿಕ್ಷಣ, ಆರೋಗ್ಯ ವಿಜ್ಞಾನ, ಸಹಕಾರ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಕೋರೆ ಅವರ ಸಾಧನೆಗಳ ಕುರಿತು ಬೃಹತ್ ವೇದಿಕೆ ಕಾರ್ಯಕ್ರಮಗಳೂ ನಡೆಯಲಿವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT