ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯಾವಸ್ಥೆ, ಕಿಶೋರಾವಸ್ಥೆಯವರ ಸಮೀಕ್ಷೆ: ಜಿಲ್ಲಾಧಿಕಾರಿ ಹಿರೇಮಠ ಸೂಚನೆ

Last Updated 28 ಜುಲೈ 2021, 13:06 IST
ಅಕ್ಷರ ಗಾತ್ರ

ಬೆಳಗಾವಿ: ‘ಮಕ್ಕಳ ಸಮೀಕ್ಷೆಗೆ ಎಲ್ಲ ರೀತಿಯ ಅಗತ್ಯ ನೆರವು ಒದಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯಲ್ಲಿರುವವವರ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಬಾಲಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಮಕ್ಕಳ ಹಕ್ಕುಗಳ ಹಿತರಕ್ಷಣೆ ದೃಷ್ಟಿಯಿಂದ ನಾವು ಕೆಲಸ ಮಾಡಬೇಕು. ಬಾಲಕಾರ್ಮಿಕರು ಕಂಡುಬಂದಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಈ ನಿಟ್ಟಿನಲ್ಲಿ ಎಲ್ಲ ತಹಶೀಲ್ದಾರರು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು’ ಎಂದು ತಿಳಿಸಿದರು.

ಪ್ರಕರಣ ದಾಖಲಿಸಿ:

‘ಸಮೀಕ್ಷೆಗಿಂತ ಮುಂಚೆ ಅನಿರೀಕ್ಷಿತ ಭೇಟಿಯ ಮೂಲಕ ಪರಿಶೀಲನೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಬೇಕು ಇದರಿಂದ ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ’ ಎಂದು ನಿರ್ದೇಶನ ನೀಡಿದರು.

‘ಬಾಲಕಾರ್ಮಿಕ ಪದ್ಧತಿ ಪತ್ತೆ ಹಚ್ಚುವುದಕ್ಕಾಗಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಿ, ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ಸಮೀಕ್ಷೆ ಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಕೋವಿಡ್-19 ಹಿನ್ನೆಲೆಯಲ್ಲಿ ಅನೇಕ ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದು, ಈ ಕುರಿತು ಸಮೀಕ್ಷೆ ನಡೆಸಲಾಗುವುದು. ಕಾಯ್ದೆ ತಿದ್ದುಪಡಿ ಪ್ರಕಾರ 14 ವರ್ಷದೊಳಗಿನ ಮಕ್ಕಳು ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ 14-18 ವಯೋಮಿತಿಯ ಮಕ್ಕಳು ಅಪಾಯಕಾರಿ ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಪರಿಷ್ಕೃತ ಕಾಯ್ದೆಯಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಿಸಲಾಗಿದ್ದು, ಬಾಲಕಾರ್ಮಿಕ ಪದ್ಥತಿ ಕಂಡುಬಂದಾಗ ಸಂಬಂಧಿಸಿದ ಅಧಿಕಾರಿಗಳು ಮಾತ್ರವಲ್ಲದೇ ಯಾರು ಬೇಕಾದರೂ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಹೇಳಿದರು.

ಶಿಕ್ಷಣದ ಮೇಲೂ ಪರಿಣಾಮ:

ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ, ‘ಕೋವಿಡ್ ಸಂಕಷ್ಟದ ಪರಿಸ್ಥಿತಿಯು ಮಕ್ಕಳ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ. ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಇಲಾಖೆ ಹಾಗೂ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

‘ಕಾರ್ಖಾನೆಗಳ ಸಂಖ್ಯೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ಮುತುವರ್ಜಿಯಿಂದ ಸಮೀಕ್ಷೆ ಕೈಗೊಳ್ಳಬೇಕು. ಮಕ್ಕಳ ಸುರಕ್ಷತೆ, ಹಕ್ಕುಗಳ ರಕ್ಷಣೆ ಜೊತೆಗೆ ಸೂಕ್ತ ಪುನರ್ವಸತಿ ಕುರಿತು ಗಮನಹರಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಕಾರ್ಮಿಕ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸಮೀಕ್ಷೆ ಕೈಗೊಳ್ಳಲಾಗುವುದು ಹಾಗೂ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ತಂಡಗಳನ್ನು ರಚಿಸಿ ವಿಭಾಗವಾರು 3 ಹಂತಗಳಲ್ಲಿ ನಡೆಸಲಾಗುವುದು’ ಎಂದು ತಿಳಿಸಲಾಯಿತು. ಪರಿಷ್ಕೃತ ಎನ್.ಸಿ.ಎಲ್.ಪಿ. ಪ್ರಕಾರ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಸಮೀಕ್ಷೆಯ ವಿಧಾನಗಳನ್ನು ವಿವರಿಸಲಾಯಿತು.

ಕಾರ್ಮಿಕ ಅಧಿಕಾರಿಗಳಾದ ತರನ್ನುಂ‌ ಬೆಂಗಾಲಿ, ಬಾಲಕಾರ್ಮಿಕ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಎನ್‌ಜಿಒಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT