ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ ಸರಳ ಆಚರಣೆ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

Last Updated 30 ಜುಲೈ 2021, 13:19 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸರಳ ಮತ್ತು ಅರ್ಥಪೂರ್ಣವಾಗಿ ನೆಹರೂ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಇದು ರಾಷ್ಟ್ರೀಯ ಹಬ್ಬವಾಗಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಕವಾಯತಿಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಪೂರ್ವಾಭ್ಯಾಸ ನಡೆಸಬೇಕು. ಕೋವಿಡ್ ಕಾರಣದಿಂದ ಈ ಬಾರಿಯೂ ಶಾಲಾ ಮಕ್ಕಳಿಂದ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕವಾಯತು ಕೂಡ ನಡೆಯುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ದೀಪಾಲಂಕಾರ ಮಾಡಬೇಕು: ‘ವೇದಿಕೆಯ ಸಿದ್ಧತೆ, ಆಸನಗಳು, ಧ್ವನಿವರ್ಧಕ, ಕುಡಿಯುವ ನೀರು, ಆಹಾರ ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ಕೋವಿಡ್ ಕಾರಣದಿಂದಾಗಿ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಆರೋಗ್ಯ ಇಲಾಖೆಯ ತಂಡಗಳನ್ನು ನಿಯೋಜಿಸಬೇಕು’ ಎಂದು ಸೂಚನೆ ನೀಡಿದರು.

‘ಉಪ ಸಮಿತಿಗಳು ಸಭೆ ನಡೆಸಿ ಎಲ್ಲ ಪೂರ್ವಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಬೇಕು. ಅಂದು ಬೆಳಿಗ್ಗೆ 6ರಿಂದ ಸಂಜೆ 7ರವರೆಗೆ ಎಲ್ಲ ದೇವಾಲಯ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕ್ರಮ‌ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಪ್ಲಾಸ್ಟಿಕ್ ಧ್ವಜ ಬಳಕೆಗೆ ನಿಷೇಧ: ‘ಜಿಲ್ಲೆಯ ಎಲ್ಲ ಕಡೆಗಳಲ್ಲೂ ಧ್ವಜಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಷ್ಟ್ರಧ್ವಜಕ್ಕೆ ಯಾವುದೇ ಕಾರಣಕ್ಕೂ ಅವಮಾನ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು‌ ಸೂಚನೆ ನೀಡಿದರು.

‘ಪ್ಲಾಸ್ಟಿಕ್ ಧ್ವಜ ಮಾರುವುದು ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆನ್‌ಲೈನ್‌ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆಗಳ ಸ್ಪರ್ಧೆಗಳನ್ನು ಆಯೋಜಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯ ಯೋಧರಿಗೆ ಸನ್ಮಾನ: ‘ಕೋವಿಡ್-19 ಕಾರಣದಿಂದ ಸ್ವಾತಂತ್ರ್ಯ ಯೋಧರನ್ನು ಸಮಾರಂಭದ ಬದಲಿಗೆ ಅವರ ಮನೆಗಳಿಗೆ ತೆರಳಿ ಸನ್ಮಾನ ಮಾಡಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಧ್ವಜ ಸಂಹಿತೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಧ್ವಜಾರೋಹಣ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆ ಮಾಡಬೇಕು ಎಂದು ಗಣ್ಯರು ಸಲಹೆ ನೀಡಿದರು.

ಡಿಸಿಪಿ ವಿಕ್ರಂ ಅಮಟೆ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ. ದಿನೇಶಕುಮಾರ್, ಡಿಎಚ್‌ಒ ಡಾ.ಶಶಿಕಾಂತ ಮುನ್ಯಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT